Thursday, September 19, 2024

ಪ್ರಾಯೋಗಿಕ ಆವೃತ್ತಿ

ವಿದ್ಯೆಯು ಸಾಧಕರ ಸ್ವತ್ತೇ ಹೊರತು ಸೋಮಾರಿಗಳ ಸ್ವತ್ತಲ್ಲ- ಹೆಚ್.ಟಿ.ಮಂಜು

ವಿದ್ಯೆಯು ಸಾಧಕರ ಸ್ವತ್ತೇ ಹೊರತು ಸೋಮಾರಿಗಳ ಸ್ವತ್ತಲ್ಲ ಆದ್ದರಿಂದ ವಿದ್ಯಾರ್ಥಿಗಳು ಏಕಾಗ್ರತೆಯಿಂದ ವಿದ್ಯಾಭ್ಯಾಸ ಮಾಡಿ ಸರ್ವಶ್ರೇಷ್ಠ ಸಾಧನೆ ಮಾಡಬೇಕು ಎಂದು ಶಾಸಕ ಹೆಚ್.ಟಿ.ಮಂಜು ಅವರು ಹೇಳಿದರು.

ಕೆ.ಆರ್.ಪೇಟೆ ಪಟ್ಟಣದಲ್ಲಿ ಕರ್ನಾಟಕ ರಾಜ್ಯ ಎಸ್.ಸಿ/ಎಸ್.ಟಿ. ಪ್ರಾಥಮಿಕ ಹಾಗೂ ಮಾಧ್ಯಮಿಕ ಶಾಲಾ ಶಿಕ್ಷಕರ ಕ್ಷೇಮಾಭಿವೃದ್ಧಿ ಸಂಘ ಹಾಗೂ ಸ್ವಾಭಿಮಾನಿ ನೌಕರರ ಬಳಗದ ಸಹಯೋಗದಲ್ಲಿ ಹಮ್ಮಿಕೊಂಡಿದ್ದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಹಾಗೂ ಅಭಿನಂದನಾ ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಸರ್ವರಿಗೂ ಸಮಪಾಲು, ಸರ್ವರಿಗೂ ಸಮಬಾಳು ಎಂಬ ಆಶಯದಲ್ಲಿ ವಿಶ್ವವೇ ಮೆಚ್ಚುವಂತಹ ಸಂವಿಧಾನವನ್ನು ನಮಗೆ ಕೊಡುಗೆಯಾಗಿ ನೀಡಿರುವ ವಿಶ್ವರತ್ನ ಡಾ.ಬಿ.ಆರ್.ಅಂಬೇಡ್ಕರ್ ಅವರ ಆಶಯಗಳ ಈಡೇರಿಕೆಗಾಗಿ ನಾವು ಇಂದು ಕೆಲಸ ಮಾಡುವ ಜೊತೆಗೆ ಜಾತಿ, ಮತ ಪಂಥಗಳಿಂದ ಮುಕ್ತವಾದ ಸಮ ಸಮಾಜದ ನಿರ್ಮಾಣಕ್ಕೆ ಒತ್ತು ನೀಡಬೇಕಾಗಿದೆ. ಶಿಕ್ಷಣದ ಜ್ಞಾನದ ಬೆಳಕಿನ ಶಕ್ತಿಯು ನಮ್ಮಿಂದ ಯಾರೂ ಕದಿಯಲಾಗದ ಆಸ್ತಿಯಾಗಿದೆ. ಆದ್ದರಿಂದ ತಂದೆ-ತಾಯಿಗಳು ಹಾಗೂ ಪೋಷಕರು ತಮ್ಮ ಮಕ್ಕಳಿಗಾಗಿ ಆಸ್ತಿಯನ್ನು ಸಂಪಾದನೆ ಮಾಡುವ ಬದಲು ಗುಣಮಟ್ಟದ ಶಿಕ್ಷಣ ಕೊಡಿಸುವ ಮೂಲಕ ಮಕ್ಕಳನ್ನೇ ಆಸ್ತಿಯನ್ನಾಗಿ ಮಾಡಬೇಕು ಎಂದು ಮನವಿ ಮಾಡಿದರು.

ರಾಜ್ಯ ಆರ್.ಟಿ.ಓ ಅಧಿಕಾರಿಗಳ ಸಂಘದ ಅಧ್ಯಕ್ಷರಾದ ಆರ್.ಟಿ.ಓ ಮಲ್ಲಿಕಾರ್ಜುನ್ ಮಾತನಾಡಿ, ಪೋಷಕರು ನಮ್ಮ ಮಕ್ಕಳು ಹೆಣ್ಣಾಗಲೀ ಅಥವಾ ಗಂಡಾಗಲೀ ಬೇಧಭಾವ ಮಾಡದೇ ಕಡ್ಡಾಯವಾಗಿ ಶಾಲೆಗೆ ಕಳಿಸಿ, ಸಾಧನೆ ಮಾಡುವಂತೆ ಬೆನ್ನುತಟ್ಟಿ ಪ್ರೋತ್ಸಾಸಬೇಕು. ಶಿಕ್ಷಣದ ಜ್ಞಾನದ ಶಕ್ತಿಯಿಂದ ಮಾತ್ರ ನಾವು ಸಂಘಟಿತರಾಗಿ ಸಮಾಜದ ಮುಖ್ಯವಾಹಿನಿಗೆ ಬಂದು ಸಾಧನೆ ಮಾಡಬಹುದು ಎಂಬ ಸತ್ಯವನ್ನು ಅರಿಯಬೇಕು. ಅಂಬೇಡ್ಕರ್ ಅವರು ನಮಗೆ ಕೊಡುಗೆಯಾಗಿ ನೀಡಿರುವ ಸಂವಿಧಾನದ ಆಶಯದಂತೆ ನಮಗೆ ನ್ಯಾಯಬದ್ಧವಾಗಿ ಸಿಗಬೇಕಾದ ಸೌಲಭ್ಯಗಳನ್ನು ಸದ್ಭಳಕೆ ಮಾಡಿಕೊಂಡು ಸಾಧನೆ ಮಾಡಬೇಕು. ಅನ್ಯಾಯ, ಅಕ್ರಮ ಹಾಗೂ ಸಾಮಾಜಿಕ ದೌರ್ಜನ್ಯದ ವಿರುದ್ಧ ಸಂಘಟಿತ ಹೋರಾಟ ನಡೆಸಬೇಕು ಎಂದು ಯುವಜನರಿಗೆ ಎಂದು ಕರೆ ನೀಡಿದರು.

ಮೈಸೂರಿನ ವಿಚಾರವಾದಿಗಳಾದ ರಘೋತ್ತಮ ಹಾಗೂ ಕನ್ನಡ ಪ್ರಾಧ್ಯಾಪಕ ಡಾ.ಹೆಚ್.ಡಿ.ಉಮಾಶಂಕರ್ ಕಾರ್ಯಕ್ರಮ ಕುರಿತು ಉಪನ್ಯಾಸ ನೀಡಿದರು. ಎಸ್‌ಎಸ್‌ಎಲ್‌ಸಿ, ಪಿಯುಸಿ ಹಾಗೂ ಪದವಿ ಪರೀಕ್ಷೆಗಳಲ್ಲಿ ಅತೀ ಹೆಚ್ಚು ಅಂಕಗಳನ್ನು ಪಡೆದು ಸಾಧನೆ ಮಾಡಿರುವ ಸಮಾಜದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಿ ಗೌರವಿಸಲಾಯಿತು. ಇದೇ ಸಂದರ್ಭದಲ್ಲಿ ಶಾಸಕ ಮಂಜು, ಸಮಾಜಸೇವಕ ಮಲ್ಲಿಕಾರ್ಜುನ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು.

ಕರ್ನಾಟಕ ರಾಜ್ಯ ಎಸ್.ಸಿ/ಎಸ್.ಟಿ. ಪ್ರಾಥಮಿಕ, ಮಾಧ್ಯಮಿಕ ಶಾಲಾ ಶಿಕ್ಷಕರ ಕ್ಷೇಮಾಭಿವೃದ್ಧಿ ಸಂಘದ ತಾಲ್ಲೂಕು ಘಟಕದ ಅಧ್ಯಕ್ಷ ಹಳೆಯೂರು ಯೋಗೇಶ್ ಪ್ರಾಸ್ತಾವಿಕ ನುಡಿಗಳನ್ನಾಡಿದರು.

ಕೆ.ಆರ್.ಪೇಟೆ ತಾಲೂಕಿನ ಸಾಮಾಜಿಕ ವಲಯ ಅರಣ್ಯಾಧಿಕಾರಿ ಶೈಲೇಂದ್ರ, ತಾಲೂಕು ಸಮಾಜ ಕಲ್ಯಾಣಾಧಿಕಾರಿ ಬಸವರಾಜು, ಕರ್ನಾಟಕ ರಾಜ್ಯ ಎಸ್.ಸಿ/ಎಸ್.ಟಿ. ಪ್ರಾಥಮಿಕ, ಮಾಧ್ಯಮಿಕ ಶಾಲಾ ಶಿಕ್ಷಕರ ಕ್ಷೇಮಾಭಿವೃದ್ಧಿ ಸಂಘದ ಅಧ್ಯಕ್ಷ ಹಳೆಯೂರು ಯೋಗೇಶ್, ಕಾರ್ಯದರ್ಶಿ ಅರುಣ್‌ಕುಮಾರ್, ಸಂಘಟನಾ ಕಾರ್ಯದರ್ಶಿ ರತ್ನಮ್ಮ, ಸಹಕಾರ್ಯದರ್ಶಿಗಳಾದ ನಂಜುಂಡ, ಅಣ್ಣಯ್ಯ, ಖಜಾಂಚಿ ಕುಮಾರ್ ಸೇರಿದಂತೆ ವಿದ್ಯಾರ್ಥಿಗಳ ಪೋಷಕರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!