Sunday, November 22, 2026

ಪ್ರಾಯೋಗಿಕ ಆವೃತ್ತಿ

ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆ| 10 ಕ್ಷೇತ್ರಗಳಲ್ಲಿ ”ಇಂಡಿಯಾ ಒಕ್ಕೂಟ”ಕ್ಕೆ ಭರ್ಜರಿ ಗೆಲುವು; ಎನ್’ಡಿಎಗೆ ಕೇವಲ 3 ಸ್ಥಾನ

ಲೋಕಸಭಾ ಚುನಾವಣೆಯಲ್ಲಿನ ಪ್ರಬಲ ಪ್ರದರ್ಶನವನ್ನು ಮುಂದುವರೆಸಿರುವ ‘ಇಂಡಿಯಾ’ ಮೈತ್ರಿಕೂಟ ಏಳು ರಾಜ್ಯಗಳ 13 ವಿಧಾನಸಭಾ ಕ್ಷೇತ್ರಗಳ ಪೈಕಿ 10 ಸ್ಥಾನಗಳನ್ನು ಗೆದ್ದುಕೊಂಡಿದೆ. ಬಿಜೆಪಿ ನೇತೃತ್ವದ ಎನ್‌ಡಿಎ ಕೇವಲ 3 ಸ್ಥಾನಗಳಲ್ಲಿ ಮಾತ್ರವೇ ಗೆದ್ದಿದೆ. ಕಳೆದ ತಿಂಗಳಷ್ಟೇ 3ನೇ ಅವಧಿಗೆ ಅಧಿಕಾರಕ್ಕೇರಿದ ಬಿಜೆಪಿ, ಉತ್ತಮ ಪ್ರದರ್ಶನ ನೀಡುವಲ್ಲಿ ಸಂಪೂರ್ಣ ವಿಫಲವಾಗಿದೆ.

ಪಂಜಾಬ್‌ನ ಜಲಂಧರ್ ಪಶ್ಚಿಮ ಕ್ಷೇತ್ರದಲ್ಲಿ ಎಎಪಿ ಅಭ್ಯರ್ಥಿ ಮೊಹಿಂದರ್ ಭಗತ್ ಅವರು 23,000 ಮತಗಳ ಅಂತರದಿಂದ ನಿರ್ಣಾಯಕ ವಿಜಯ ಸಾಧಿಸಿದ್ದಾರೆ. ಪಶ್ಚಿಮ ಬಂಗಾಳದಲ್ಲಿ ಚುನಾವಣೆ ನಡೆದ ಎಲ್ಲ ನಾಲ್ಕು ಸ್ಥಾನಗಳನ್ನು ಟಿಎಂಸಿ ಗೆಲ್ಲುವ ಮೂಲಕ ಮತ್ತೆ ತನ್ನ ಪ್ರಾಬಲ್ಯವನ್ನು ಪ್ರದರ್ಶಿಸಿದೆ.

ಹಿಮಾಚಲ ಪ್ರದೇಶದಲ್ಲಿ ಮುಖ್ಯಮಂತ್ರಿ ಸುಖವಿಂದರ್ ಸಿಂಗ್ ಸುಖು ಅವರ ಪತ್ನಿ ಕಮಲೇಶ್ ಠಾಕೂರ್ ಅವರು ಡೆಹ್ರಾ ಕ್ಷೇತ್ರದಲ್ಲಿ ಗೆಲುವು ಸಾಧಿಸಿದ್ದಾರೆ. ತಮ್ಮ ಮೊದಲ ಸ್ಪರ್ಧೆಯಲ್ಲೇ ವಿಧಾನಸಭೆ ಪ್ರವೇಶಿಸಿದ್ದಾರೆ. ನಲಗಢ್‌ ಕ್ಷೇತ್ರವನ್ನೂ ಕಾಂಗ್ರೆಸ್‌ ಗೆದ್ದುಕೊಂಡಿದೆ. ಹಮೀರ್‌ಪುರದಲ್ಲಿ ಬಿಜೆಪಿ ಗೆಲುವು ಸಾಧಿಸುವಲ್ಲಿ ಯಶಸ್ವಿಯಾಗಿದೆ.

ತಮಿಳುನಾಡಿನ ವಿಕ್ರವಾಂಡಿ ವಿಧಾನಸಭಾ ಕ್ಷೇತ್ರದಲ್ಲಿ ಡಿಎಂಕೆಯ ಅಣ್ಣಿಯೂರ್ ಶಿವ ಅವರು ಸುಮಾರು 60,000 ಮತಗಳ ಅಂತರದಲ್ಲಿ ಗಮನಾರ್ಹ ಗೆಲುವು ಸಾಧಿಸಿದ್ದಾರೆ.

ಬಿಜೆಪಿ ಅಧಿಕಾರದಲ್ಲಿರುವ ಉತ್ತರಾಖಂಡದ ಬದ್ರಿನಾಥ್ ಮತ್ತು ಮಂಗಳೌರ್ – ಎರಡೂ ಸ್ಥಾನಗಳಲ್ಲಿ ಕಾಂಗ್ರೆಸ್ ಗೆದ್ದಿದ್ದರೆ, ಮಧ್ಯಪ್ರದೇಶದ ಅಮರವಾರ್ ಕ್ಷೇತ್ರದಲ್ಲಿ ಬಿಜೆಪಿಯ ಕಮಲೇಶ್ ಪ್ರತಾಪ್ ಶಾಹಿ ಗೆಲುವು ಸಾಧಿಸಿದ್ದಾರೆ. ಬಿಹಾರದ ರುಪೌಲಿ ಕ್ಷೇತ್ರದಲ್ಲಿ ಜೆಡಿಯು ಅಭ್ಯರ್ಥಿ ಕಲಾಧರ್ ಪ್ರಸಾದ್ ಮಂಡಲ್ ಗೆಲುವು ಸಾಧಿಸಿದ್ದಾರೆ.

ನಮ್ಮ ಸುದ್ದಿಗಳು ಇಷ್ಟವಾದರೆ ನುಡಿ ಕರ್ನಾಟಕ.ಕಾಂ (ಮಂಡ್ಯ ಡಿಜಿಟಲ್ ಮೀಡಿಯಾ) ಗೆ ದೇಣಿಗೆ ನೀಡಿ ಪ್ರೋತ್ಸಾಹಿಸಿ

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ