ಮಂಡ್ಯ ಜಿಲ್ಲಾ ಕುರುಬರ ಸಂಘ ಮತ್ತು ಕೆ.ಆರ್. ಪೇಟೆ ತಾಲ್ಲೂಕು ಶಾಖೆ ಇವರ ವತಿಯಿಂದ ದಾಸ ಶ್ರೇಷ್ಠ ಕನಕದಾಸರ 535ನೇ ಜಯಂತೋತ್ಸವ ಹಾಗೂ ಪ್ರತಿಭಾ ಪುರಸ್ಕಾರ ಕಾರ್ಯಕ್ರಮವು ನ.29ರಂದು ಬೆಳಿಗ್ಗೆ 11 ಗಂಟೆಗೆ ಕೆ.ಆರ್.ಪೇಟೆ ಪುರಸಭೆ ಕಚೇರಿ ಪಕ್ಕದ ಮೈದಾನದಲ್ಲಿ ನಡೆಯಲಿದೆ ಎಂದು ಜಿಲ್ಲಾ ಕುರುಬರ ಸಂಘದ ಜಿಲ್ಲಾಧ್ಯಕ್ಷ ಎಂ.ಎಲ್.ಸುರೇಶ್ ತಿಳಿಸಿದರು.
ಮಳವಳ್ಳಿ ಪಟ್ಟಣದ ಪ್ರವಾಸಿ ಮಂದಿರದಲ್ಲಿ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಕಾಗಿನಲೆ ಕನಕಗುರು ಪೀಠದ ಪೀಠಾಧ್ಯಕ್ಷ ಶಿವಾನಂದಪುರಿ ಮಹಾಸ್ವಾಮಿ ದಿವ್ಯ ಸಾನಿಧ್ಯದಲ್ಲಿ ನಡೆಯುವ ಕಾರ್ಯಕ್ರಮವನ್ನು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಉದ್ಘಾಟಿಸಲಿದ್ದು, ಮಂಡ್ಯ ಜಿಲ್ಲಾ ಕುರುಬರ ಸಂಘದ ಜಿಲ್ಲಾಧ್ಯಕ್ಷ ಎಂ ಎಲ್ ಸುರೇಶ್ ಅಧ್ಯಕ್ಷತೆ ವಹಿಸುವರು ಎಂದರು.
ಈ ಕಾರ್ಯಕ್ರಮದಲ್ಲಿ ಸುಮಾರು 25 ಸಾವಿರ ಮಂದಿ ಭಾಗವಹಿಸುವ ನಿರೀಕ್ಷೆ ಹೊಂದಿದ್ದು, ಎಲ್ಲಾ ರೀತಿಯ ಪೂರ್ವ ಸಿದ್ದತೆಗಳನ್ನು ನಡೆಸಲಾಗಿದೆ. ಕುರುಬ ಸಮುದಾಯದ ಪ್ರತಿಭಾನ್ವಿತ ವಿದ್ಯಾರ್ಥಿಗಳನ್ನು ಅಭಿನಂದಿಸಲಾಗುವುದು, ಹಿಂದುಳಿದ ಸಮುದಾಯದ ಎಲ್ಲಾ ಮುಖಂಡರು ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕೆಂದು ಕೋರಿದರು.
ಜಿಲ್ಲಾ ಪ್ರಧಾನ ಕಾರ್ಯದರ್ಶಿ ಶಶಿಧರ್, ಮಾಜಿ ಅಧ್ಯಕ್ಷ ನಾಗರಾಜು, ನಿರ್ದೇಶಕ ಲಿಂಗರಾಜು ಸೇರಿದಂತೆ ಹಲವು ಮುಖಂಡರು ಹಾಜರಿದ್ದರು.




