ಮುಂದಿನ ಒಂದು ತಿಂಗಳೊಳಗೆ ಕೇಂದ್ರೀಯ ವಿದ್ಯಾಲಯವನ್ನು ಮೈಷುಗರ್ ಶಾಲೆಗೆ ಸ್ಥಳಾಂತರ ಮಾಡದಿದ್ದರೆ ಶಾಲಾ ಮಕ್ಕಳು ಹಾಗೂ ಪೋಷಕರೊಂದಿಗೆ ಜಿಲ್ಲಾಧಿಕಾರಿ ಕಚೇರಿಗೆ ಮುತ್ತಿಗೆ ಹಾಕುವುದಾಗಿ ಕರ್ನಾಟಕ ಸಂಘದ ಅಧ್ಯಕ್ಷ ಪ್ರೊ.ಜಯಪ್ರಕಾಶ್‌ಗೌಡ ಎಚ್ಚರಿಕೆ ನೀಡಿದರು.
ಮಂಡ್ಯದ ಉಪವಿಭಾಗಾಧಿಕಾರಿ ಕಚೇರಿಯಲ್ಲಿ ಶಾಸಕ ಎಂ.ಶ್ರೀನಿವಾಸ್ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಮಾತನಾಡಿದ ಅವರು, ಜಿಲ್ಲೆಯಲ್ಲಿ ಕೇಂದ್ರೀಯ ವಿದ್ಯಾಲಯ ಕಾರ್ಯಾರಂಭ ಮಾಡಿ 8 ವರ್ಷಗಳಾಗಿದ್ದು, ಇಂದಿಗೂ ಶಾಲಾ ಕಟ್ಟಡ ನಿರ್ಮಾಣವಾಗಿಲ್ಲ. ಯಾಕೆ ಇಷ್ಟೊಂದು ವಿಳಂಬ ಎಂದು ತರಾಟೆಗೆ ತೆಗೆದುಕೊಂಡರು.
ನೂತನ ಕಟ್ಟಡ ನಿರ್ಮಾಣಕ್ಕೆ 26.57 ಕೋಟಿ ಅನುದಾನ ಬಿಡುಗಡೆಯಾಗಿದ್ದು, ಶಾಲೆಯನ್ನು ತಾತ್ಕಾಲಿಕವಾಗಿ ಸ್ಥಳಾಂತರ ಮಾಡದೆ ಇರುವ ಕಾರಣ ಕಾಮಗಾರಿ ಆರಂಭವಾಗಿಲ್ಲ. ಇದೇ ಧೋರಣೆ ಮುಂದುವರಿದರೆ ಶಾಲಾ ಮಕ್ಕಳು ಹಾಗೂ ಪೋಷಕರೊಂದಿಗೆ ಜಿಲ್ಲಾಧಿಕಾರಿ ಕಚೇರಿ ಮುತ್ತಿಗೆ ಹಾಕುತ್ತೇವೆ ಎಂದರು.
15 ಕೊಠಡಿಯುಳ್ಳ ಸರ್ಕಾರಿ ಕಚೇರಿಗಳು ಮಂಡ್ಯದಲ್ಲಿ ಎಲ್ಲೂ ಇಲ್ಲ. ಮೈಷುಗರ್ ಪ್ರೌಢಶಾಲೆಯಲ್ಲಿ ಕೇಂದ್ರೀಯ ವಿದ್ಯಾಲಯಕ್ಕೆ ಬೇಕಾದ ಕೊಠಡಿಗಳು ಲಭ್ಯವಿದ್ದು, ಶಾಲಾ ಆಡಳಿತ ಮಂಡಳಿ ಹಾಗೂ ಪೋಷಕರು ಮೈಷುಗರ್ ಪ್ರೌಢಶಾಲೆ ಸೂಕ್ತ ಎಂಬ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಸಣ್ಣ-ಪುಟ್ಟ ದುರಸ್ತಿ ಆಗಬೇಕಿದೆ. ಜಿಲ್ಲಾಡಳಿತ ಕೂಡಲೇ ದುರಸ್ತಿಗೊಳಿಸಿ ಕೇಂದ್ರೀಯ ವಿದ್ಯಾಲಯ ಸ್ಥಳಾಂತರಕ್ಕೆ ಕ್ರಮ ವಹಿಸಬೇಕು ಎಂದು ಒತ್ತಾಯಿಸಿದರು.
ಕೇಂದ್ರೀಯ ವಿದ್ಯಾಲಯದಲ್ಲಿ ಪಿಯುಸಿ ವರೆಗೆ ಶಿಕ್ಷಣ ನೀಡಬೇಕು. ನೂತನ ಕಟ್ಟಡ ನಿರ್ಮಾಣವಾಗದ ಹಿನ್ನೆಲೆಯಲ್ಲಿ ಎಸ್ಸೆಸ್ಸೆಲ್ಸಿ ವರೆಗೆ ಮಾತ್ರ ತರಗತಿಗಳನ್ನು ಮಾಡಲಾಗುತ್ತಿದೆ. ಪಿಯುಸಿಗೆ ಮಕ್ಕಳು ಎಲ್ಲಿಗೆ ಹೋಗಬೇಕು ಎಂದು ಪ್ರಶ್ನಿಸಿದರು.
ಕನ್ನಡ ಭಾಷೆಯನ್ನು ಮಕ್ಕಳಿಗೆ ಕಲಿಸಲು ಅವಕಾಶವಿದೆ. ಆದರೆ, ಕನ್ನಡ ಶಿಕ್ಷಕರಿಲ್ಲದೆ ಮಕ್ಕಳಿಗೆ ಕನ್ನಡ ಭಾಷೆಯನ್ನು ಕಲಿಸುತ್ತಿಲ್ಲ.ಕನ್ನಡ ಪ್ರಾಧ್ಯಾಪಕರನ್ನು ನೇಮಿಸಬೇಕು ಎಂದರು.
ಉಪವಿಭಾಗಾಧಿಕಾರಿ ಐಶ್ವರ್ಯ,ಶಿವರುದ್ರಪ್ಪ ಸೇರಿದಂತೆ ಹಲವರಿದ್ದರು.