75ನೇ ಸ್ವಾತಂತ್ರ್ಯ ದಿನಾಚರಣೆಯ ಅಮೃತ ಮಹೋತ್ಸವದ ಅಂಗವಾಗಿ ಕಾಂಗ್ರೆಸ್ ಪಕ್ಷದ ವತಿಯಿಂದ ಮಳವಳ್ಳಿ ತಾಲ್ಲೂಕಿನ ಕಿರುಗಾವಲಿನಿಂದ ಮಳವಳ್ಳಿ ಪಟ್ಟಣದವರೆಗೆ ಸ್ವಾತಂತ್ರ್ಯ ನಡಿಗೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದ್ದು, ಕಾಂಗ್ರೆಸ್ ಮುಖಂಡರು ಹಾಗೂ ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಯಶಸ್ವಿಗೊಳಿಸಿಕೊಡಬೇಕೆಂದು ಮಾಜಿ ಸಚಿವ ಪಿ.ಎಂ ನರೇಂದ್ರಸ್ವಾಮಿ ಮನವಿ ಮಾಡಿದರು.
ಮಳವಳ್ಳಿ ಪಟ್ಟಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸ್ವಾತಂತ್ರ್ಯ ಬಂದು 75 ವರ್ಷ ತುಂಬುತ್ತಿರುವ ಹಿನ್ನೆಲೆಯಲ್ಲಿ ಆಗಸ್ಟ್ 15ರಂದು ಸ್ವಾತಂತ್ರ್ಯ ದಿನಾಚರಣೆಯನ್ನು ಸಂಭ್ರಮದಿಂದ ವಿಜೃಂಭಣೆಯಿಂದ ಆಚರಿಸುವುದು ಪ್ರತಿಯೊಬ್ಬರ ಕರ್ತವ್ಯವಾಗಿದೆ.ಕಾಂಗ್ರೆಸ್ ಪಕ್ಷ ಹೋರಾಟ ಮಾಡಿ ಈ ದೇಶಕ್ಕೆ ಸ್ವಾತಂತ್ರ್ಯವನ್ನು ತಂದು ಕೊಡುವುದರ ಜೊತೆಗೆ ದೇಶವನ್ನು ಕಟ್ಟಲು ಜವಾಬ್ದಾರಿಯುತವಾಗಿ ಕಾರ್ಯನಿರ್ವಹಿಸಿದೆ.ತ್ಯಾಗ ಬಲಿದಾನದಿಂದ ಪಡೆದ ಸ್ವಾತಂತ್ರ್ಯ ನಂತರ ಕಾಂಗ್ರೆಸ್ ಪಕ್ಷ ಆತ್ಯುತ್ತಮವಾಗಿ ಆಡಳಿತವನ್ನು ಮುನ್ನೆಡೆಸಿಕೊಂಡು ಬಂದಿದೆ ಎಂದರು.
ಸ್ವಾತಂತ್ರ್ಯ ಸಂಗ್ರಾಮದ ನೆನಪಿಗಾಗಿ ನಾಡಿನ ಜನತೆಗೆ ಸ್ವಾತಂತ್ರ್ಯದ ಮಹತ್ವವನ್ನು ಸಾರುವ ಹಿನ್ನೆಲೆಯಲ್ಲಿ ಕಾಂಗ್ರೆಸ್ ಪಕ್ಷದ ಕರೆಯ ಮೇರೆಗೆ ಆಗಸ್ಟ್ 15ರಂದು ಬೆಂಗಳೂರಿನ ಸಂಗೊಳ್ಳಿ ರಾಯಣ್ಣ ಪುತ್ಥಳಿ ಬಳಿಯಿಂದ ನ್ಯಾಷನಲ್ ಕಾಲೇಜುವರೆಗೆ ಪಾದಯಾತ್ರೆಯನ್ನು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ಹಮ್ಮಿಕೊಳ್ಳಲಾಗಿದೆ.
ಆಗಸ್ವ್ 15ರಂದು ನಡೆಯಲಿರುವ ಪಾದಯಾತ್ರೆಯ ಪೂರ್ವಭಾವಿಯಾಗಿ ಪ್ರತಿಯೊಂದು ವಿಧಾನಸಭಾ ಕ್ಷೇತ್ರಗಳಲ್ಲಿಯೂ ಕಾಂಗ್ರೆಸ್ ಪಕ್ಷದ ಜವಾಬ್ದಾರಿಯಲ್ಲಿ ಸ್ವಾತಂತ್ರ್ಯ ನಡಿಗೆ ಕಾರ್ಯಕ್ರಮ ಸಾಂಕೇತಿಕವಾಗಿ ನಡೆಯುತ್ತಿವೆ. ಅದರಂತೆ ಆಗಸ್ಟ್ 12ರಂದು ಕಿರುಗಾವಲು ಸಂತೇ ಮಾಳದಿಂದ ಮಳವಳ್ಳಿ ಪಟ್ಟಣದವರೆಗೆ ಪಾದಯಾತ್ರೆಯನ್ನು ಹಮ್ಮಿಕೊಳ್ಳಲಾಗಿದ್ದು, ಕಾಂಗ್ರೆಸ್ ಮುಖಂಡರು, ಕಾರ್ಯಕರ್ತರು ಹಾಗೂ ಯುವಕ-ಯುವತಿಯವರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಸ್ವಾತಂತ್ರ್ಯ ಸಂಭ್ರಮವನ್ನು ಯಶಸ್ವಿಗೊಳಿಸಿಕೊಡಬೇಕೆಂದು ಕೋರಿದರು.




