Thursday, May 16, 2024

ಪ್ರಾಯೋಗಿಕ ಆವೃತ್ತಿ

ಆಗಸ್ಟ್ 12 ರಂದು ಸ್ವಾತಂತ್ರ್ಯ ನಡಿಗೆ ಕಾರ್ಯಕ್ರಮ

75 ನೇ ಸ್ವಾತಂತ್ರ‍್ಯೋತ್ಸವದ ಅಂಗವಾಗಿ ಕಾಂಗ್ರೆಸ್ ಪಕ್ಷದ ವತಿಯಿಂದ ನಾಡಿನೆಲ್ಲೆಡೆ ಸುವರ್ಣ ಸ್ವಾತಂತ್ರ‍್ಯೋತ್ಸವ ನಡಿಗೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದ್ದು, ಮಳವಳ್ಳಿ ಕ್ಷೇತ್ರದಲ್ಲಿಯೂ ಸಹ ಕಿರುಗಾವಲಿನಿಂದ ಮಳವಳ್ಳಿವರೆಗೆ ಆಗಸ್ಟ್ 12ರಂದು ಸ್ವಾತಂತ್ರ‍್ಯ ನಡಿಗೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಮಾಜಿ ಸಚಿವ ಹಾಗೂ ಕೆಪಿಸಿಸಿ ಉಪಾಧ್ಯಕ್ಷ ಪಿ.ಎಂ. ನರೇಂದ್ರಸ್ವಾಮಿ ತಿಳಿಸಿದರು.

ಮಳವಳ್ಳಿ ಪಟ್ಟಣದ ರೈತ ಭವನದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಿರುಗಾವಲಿನಿಂದ ಮಳವಳ್ಳಿ ವರೆಗೆ ಒಟ್ಟು 15 ಕಿ.ಮೀ. ಸ್ವಾತಂತ್ರ‍್ಯ ನಡಿಗೆ ನಡೆಸಲಾಗುವುದು.ಸ್ವಾತಂತ್ರ‍್ಯ ಪೂರ್ವದಲ್ಲಿ ಭಾರತದ ಪರಿಸ್ಥಿತಿ ಹೇಗಿತ್ತು, ನಂತರ ಅಧಿಕಾರಕ್ಕೆ ಬಂದ ಕಾಂಗ್ರೆಸ್ ಪಕ್ಷ ಯಾವ ರೀತಿ ಯೋಜನೆಗಳ ಮೂಲಕ ದೇಶವನ್ನು ಪುನರ್ ನಿರ್ಮಾಣ ಮಾಡಿ ಅಭಿವೃದ್ಧಿ ಪಥದಲ್ಲಿ ಕೊಂಡೊಯ್ಯಲಾಗಿದೆ ಎಂಬುವುದನ್ನು ಜನರಿಗೆ ಅರಿವು ಮೂಡಿಸುವ ಉದ್ದೇಶದಿಂದ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದು ಹೇಳಿದರು.

ಕೋಮುವಾದವನ್ನು ಮುಂದಿಟ್ಟುಕೊಂಡು, ಜನರನ್ನು ಭಾವನಾತ್ಮಕವಾಗಿ ಕೆರಳಿಸಿ ಅಧಿಕಾರಕ್ಕೆ ಬಂದ ಬಿಜೆಪಿ ಸರ್ಕಾರ ದೇಶಾದ್ಯಂತ ಕೋಮು ಗಲಭೆಗಳನ್ನು ಹರಡುತ್ತ ಯುವ ಜನತೆಯ ದಿಕ್ಕು ತಪ್ಪಿಸುತ್ತ ದೇಶವನ್ನು ಹಾಳು ಮಾಡುತ್ತಿದ್ದಾರೆಂದು ಕಿಡಿಕಾರಿದರು.

ಆಗಸ್ಟ್ 15 ರಂದು ಸ್ವಾತಂತ್ರ‍್ಯ ದಿನಾಚರಣೆ ದಿನದಂದು ಬೆಂಗಳೂರಿನಲ್ಲಿ ಕಾಂಗ್ರೆಸ್ ಪಕ್ಷದಿಂದ ಬೃಹತ್ ನಡಿಗೆ ಕಾರ್ಯಕ್ರಮ ನಡೆಯಲಿದೆ. ಸಂಗೊಳ್ಳಿ ರಾಯಣ್ಣ ರೈಲ್ವೆ ನಿಲ್ದಾಣದಿಂದ ನ್ಯಾಷನಲ್ ಕಾಲೇಜ್ ಮೈದಾನದವರೆಗೆ ನಡೆಯುವ ಜಾಥ ಕಾರ್ಯಕ್ರಮದಲ್ಲಿ ಮಳವಳ್ಳಿ ತಾಲ್ಲೂಕಿನಿಂದ ಹೆಚ್ಚಿನ ಸಂಖ್ಯೆಯಲ್ಲಿ ಕಾರ್ಯಕರ್ತರು ತೆರಳಲಿದ್ದಾರೆ ಎಂದು ತಿಳಿಸಿದರು.

ಅಕ್ಟೋಬರ್ ತಿಂಗಳಲ್ಲಿ ಎಐಸಿಸಿ ನಾಯಕ ರಾಹುಲ್ ಗಾಂಧಿಯವರು ಕಾಶ್ಮೀರದಿಂದ ಕನ್ಯಾಕುಮಾರಿಯವರೆಗೆ ಪಾದಯಾತ್ರೆಯನ್ನು ಹಮ್ಮಿಕೊಂಡಿದ್ದಾರೆ. ಜಾಥವು ನಮ್ಮ ರಾಜ್ಯಕ್ಕೂ ಆಗಮಿಸಿ ಮಂಡ್ಯ ಜಿಲ್ಲೆಯಲ್ಲಿ ಐದು ದಿನಗಳ ಕಾಲ ಸಂಚರಿಸಲಿದೆ. ಕಾಂಗ್ರೆಸ್ ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಈ ಜಾಥಾವನ್ನು ಯಶಸ್ವಿಗೊಳಿಸಬೇಕೆಂದು ಕೋರಿದರು.

ಆಗಸ್ಟ್ 3 ರಂದು ದಾವಣಗೆರೆಯಲ್ಲಿ ನಡೆಯುವ ಮಾಜಿ ಮುಖ್ಯಮಂತ್ರಿ, ನಾಡಿನ ಜನಪರ ನಾಯಕ ಸಿದ್ದರಾಮಯ್ಯ ಅವರ 75 ನೇ ಜನ್ಮದಿನದ ಅಮೃತ ಮಹೋತ್ಸವ ಸಮಾರಂಭಕ್ಕೆ ತಾಲ್ಲೂಕಿನಿಂದ ಹೆಚ್ಚಿನ ಸಂಖ್ಯೆಯಲ್ಲಿ ಅಭಿಮಾನಿಗಳು, ಕಾರ್ಯಕರ್ತರು ತೆರಳುತ್ತಿದ್ದು ಇವರಿಗೆ ಅಗತ್ಯ ವಾಹನ ಹಾಗೂ ಊಟದ ವ್ಯವಸ್ಥೆ ಸಹ ಮಾಡಲಾಗುತ್ತಿದೆ ಎಂದರು.

ಗೋಷ್ಠಿಯಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ, ದೇವರಾಜು, ಜಿಲ್ಲಾ ಕುರುಬರ ಸಂಘದ ಅಧ್ಯಕ್ಷ ಸುರೇಶ್, ರಾಜ್ಯ ಸಂಘದ ಉಪಾಧ್ಯಕ್ಷ ಪುಟ್ಟಬಸವಯ್ಯ, ಮುಖಂಡರಾದ ಚಿಕ್ಕಲಿಂಗಯ್ಯ, ಸಿದ್ದೇಗೌಡ, ಬಾಲಚಂದರ್, ಮಾಜಿ ಜಿ. ಪಂ.ಸದಸ್ಯೆ ಸುಜಾತ ಪುಟ್ಟು ಸೇರಿದಂತೆ ಹಲವರು ಹಾಜರಿದ್ದರು

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!