ಮಂಡ್ಯ ಜಿಲ್ಲೆಯ ರೈತರ ಜೀವನಾಡಿ ಕೃಷ್ಣರಾಜ ಸಾಗರ ಅಣೆಕಟ್ಟೆ ಭರ್ತಿಯಾಗಿ ಸುಮಾರು ೧೫ ದಿನಗಳು ಕಳೆದಿದ್ದರೂ ನಾಲೆಗಳಿಗೆ ನೀರು ಹರಿಸದಿರುವುದರಿಂದ ರೈತರು ಕೃಷಿ ಚಟುವಟಿಕೆ ಕೈಗೊಳ್ಳಲು ಹಿನ್ನಡೆಯಾಗಿದೆ. ಕೂಡಲೇ ನಾಲೆಗಳಿಗೆ ನೀರು ಹರಿಸುವ ಮೂಲಕ ರೈತರ ಕೃಷಿ ಚಟುವಟಿಕೆಗಳಿಗೆ ಅನುಕೂಲ ಕಲ್ಪಿಸಬೇಕೆಂದು ಜೈ ಕರ್ನಾಟಕ ಪರಿಷತ್ತು ರಾಜ್ಯಾಧ್ಯಕ್ಷ ಡಾ.ಎಸ್.ನಾರಾಯಣ್ ಆಗ್ರಹಿಸಿದ್ದಾರೆ.
ಇದೇ ಪ್ರಥಮ ಬಾರಿಗೆ ಜೂನ್ ತಿಂಗಳಲ್ಲಿ ಕೆಆರ್ಎಸ್ ಅಣೆಕಟ್ಟೆ ಸಂಪೂರ್ಣ ಭರ್ತಿಯಾಗಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬಾಗಿನ ಅರ್ಪಿಸಿರುವುದು ಸಂತಸದ ಸಂಗತಿ. ಆದರೆ, ನಾಲೆಗಳ ಆಧುನೀಕರಣದ ನೆಪದಲ್ಲಿ ನಾಲೆಗಳಿಗೆ ನೀರು ಹರಿಸದಿರುವುದು ದುರದೃಷ್ಟಕರ ಎಂದು ಪ್ರಕಟಣೆ ಯಲ್ಲಿ ತಿಳಿಸಿದ್ದಾರೆ.
ಅಣೆಕಟ್ಟೆ ಭರ್ತಿಯಾಗಿ, ತಮಿಳುನಾಡಿಗೆ ಸಾಕಷ್ಟು ನೀರು ಹರಿದು ಹೋಗುತ್ತಿದೆ. ಜಿಲ್ಲೆಯ ರೈತರು ಕೃಷಿ ಚಟುವಟಿಕೆ ಆರಂಭಿಸಲು ಪ್ರಮುಖವಾಗಿ ಭತ್ತದ ಬಿತ್ತನೆ ಮಾಡಲು ನೀರಿಲ್ಲದೆ ಸಂಕಷ್ಟ ಎದುರಿಸಬೇಕಾಗಿದೆ. ಸರಿಯಾದ ಸಮಯಕ್ಕೆ ಬಿತ್ತನೆ ಮಾಡದಿದ್ದರೆ ನಾಟಿ ಹಾಗೂ ಕೃಷಿ ಚಟುವಟಿಕೆಗಳು ಹಿಂದುಳಿಯಲಿವೆ. ಅಲ್ಲದೇ, ಬೆಳೆಗಳ ಇಳುವರಿಯೂ ಕಡಿಮೆಯಾಗಲಿದೆ. ಆದ್ದರಿಂದ ಕೂಡಲೇ ನಾಲೆಗಳಿಗೆ ನೀರು ಹರಿಸಬೇಕು. ಇಲ್ಲದಿದ್ದರೆ ಹೋರಾಟ ಹಮ್ಮಿಕೊಳ್ಳಲಾಗುವುದು ಎಂದು ಅವರು ಎಚ್ಚರಿಸಿದ್ದಾರೆ.




