ಜೂ.25ರಂದು ರಾಜ್ಯಾದ್ಯಂತ ರಾಷ್ಟ್ರೀಯ ಲೋಕ್ ಅದಾಲತ್ ಕಾರ್ಯಕ್ರಮ ನ್ಯಾಯಾಲಯ ಸಂಕೀರ್ಣದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ನ್ಯಾಯಾಧೀಶೆ ಡಾ.ನಳಿನಿ ಕುಮಾರಿ ತಿಳಿಸಿದರು.
ಮಂಡ್ಯದ ಜಿಲ್ಲಾ ನ್ಯಾಯಾಲಯದ ಸಂಕೀರ್ಣದಲ್ಲಿರುವ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಜಿಲ್ಲೆಯಲ್ಲಿಯೂ ಸಹ ಲೋಕ್ ಅದಾಲತ್ ಮುಖಾಂತರ ಪ್ರಕರಣಗಳನ್ನು ಇತ್ಯರ್ಥಗೊಳಿಸುವ ನಿಟ್ಟಿನಲ್ಲಿ ಪೂರ್ವಭಾವಿ ಬೈಠಕ್‌ಗಳನ್ನು ನಡೆಸಲಾಗಿದೆ.
ಮೋಟಾರು ವಾಹನಗಳ ಪ್ರಕರಣಗಳು, ರಾಜಿ ಆಗಬಹುದಾದಂತಹ ಕ್ರಿಮಿನಲ್ ಪ್ರಕರಣಗಳು ಮತ್ತು ಚೆಕ್ ಬೌನ್ಸ್ ಪ್ರಕರಣಗಳನ್ನು ರಾಜಿಗೆ ತೆಗೆದುಕೊಂಡು ಆಯಾ ನ್ಯಾಯಾಲಯಗಳಲ್ಲೇ ಜನತಾ ನ್ಯಾಯಾಲಯ ಮಾಡಿ ಪ್ರಕರಣಗಳನ್ನು ಇತ್ಯರ್ಥಗೊಳಿಸುವ ಪ್ರಯತ್ನ ಮಾಡಲಾಗಿದೆ ಎಂದು ತಿಳಿಸಿದರು.
ಅಂದು ನಡೆಯುವ ರಾಷ್ಟ್ರೀಯ ಲೋಕ್-ಅದಾಲತ್‌ಗೆ ನಮ್ಮ ಮಂಡ್ಯ ಜಿಲ್ಲೆಯಲ್ಲಿ ಸುಮಾರು 79,907 ಪ್ರಕರಣಗಳು ಬಾಕಿ ಇದ್ದು, ಅದರಲ್ಲಿ ಸುಮಾರು 10,477 ಪ್ರಕರಣಗಳು ರಾಜಿ ಆಗಬಹುದಾದಂತಹ ಪ್ರಕರಣಗಳಾಗಿವೆ. ಅವುಗಳಲ್ಲಿ ಸುಮಾರು 534ಪ್ರಕರಣಗಳು ಈಗಾಗಲೇ ರಾಜಿಗಾಗಿ ಪರಿಗಣಿಸಲಾಗಿದೆ. ಹಾಗೂ 3591 (ವ್ಯಾಜ್ಯಪೂರ್ವ ಪ್ರಕರಣಗಳು) ಪ್ರಕರಣಗಳಲ್ಲಿ ಸುಮಾರು 2469 ಪ್ರಕರಣಗಳು ಈಗಾಗಲೇ ಇತ್ಯರ್ಥಗೊಂಡಿವೆ ಎಂದರು.
ಕಳೆದ ಮಾ.೧೨ರಂದು ನಡೆದ ಲೋಕ್ ಅದಾಲತ್‌ನಲ್ಲಿ 13, 059 ಕ್ಕೂ ಹೆಚ್ಚು ಪ್ರಕರಣಗಳು ಇತ್ಯರ್ಥವಾಗಿದ್ದು, ವಕೀಲರ, ಪಕ್ಷಗಾರರ ಹಾಗೂ ಎಲ್ಲಾ ನ್ಯಾಯಾಲಯದ ಗೌರವಾನ್ವಿತ ನ್ಯಾಯಾ ಧೀಶರುಗಳ ಸಹಯೋಗ ದೊಂದಿಗೆ ಇತ್ಯರ್ಥ ಪಡಿಸು ವಲ್ಲಿ ಯಶಸ್ವಿಯಾಗಿದ್ದೇವೆ ಎಂದು ತಿಳಿಸಿದರು.
ಈ ಬಾರಿಯ ಲೋಕ್-ಅದಾಲತ್‌ನಲ್ಲಿಯೂ ಸಹ ಇನ್ನು ಹೆಚ್ಚಿನ ಪ್ರಕರಣಗಳನ್ನು ಇತ್ಯರ್ಥಪಡಿಸಿ ಜನ ಸಾಮಾನ್ಯರಿಗೆ ಅನುಕೂಲವಾಗುವ ರೀತಿಯಲ್ಲಿ ನ್ಯಾಯಧಾನ ಮಾಡಬೇಕೆಂಬ ಇಚ್ಛೆಯಿಂದ ಪ್ರಕರಣಗಳನ್ನು ತೆಗೆದುಕೊಂಡಿದ್ದು, ಜನ ಸಾಮಾನ್ಯರು ಇದರ ಸದುಪಯೋಗವನ್ನು ಪಡೆದುಕೊಂಡು ಲೋಕ್ ಅದಾಲತ್ ಭಾಗವಹಿಸಿ ತಮ್ಮ ಪ್ರಕರಣಗಳನ್ನು ಇತ್ಯರ್ಥಪಡಿಸಿಕೊಳ್ಳಬೇಕೆಂದರು.