ನಿತ್ಯ ಸಚಿವ ಕೆ.ವಿ.ಶಂಕರಗೌಡರ 107ನೇ ಜನ್ಮದಿನೋತ್ಸವ ಅಂಗವಾಗಿ ಜನತಾ ಶಿಕ್ಷಣ ಟ್ರಸ್ಟ್ ವತಿಯಿಂದ 2022 ನೇ ಸಾಲಿನ ರಾಜ್ಯ ಮಟ್ಟದ ಕೆ.ವಿ.ಶಂಕರಗೌಡ ಮತ್ತು ಕೆ.ಎಸ್.ಸಚ್ಚಿದಾನಂದ ಅವರ ಹೆಸರಿನಲ್ಲಿ ಕೊಡ ಮಾಡುವ ಸಮಾಜ ಸೇವಾ ಮತ್ತು ರಂಗಭೂಮಿ ಪ್ರಶಸ್ತಿ ಪ್ರದಾನ ಸಮಾರಂಭ ಜುಲೈ 15 ರಂದು ನಗರದ ಪಿ.ಇ.ಎಸ್ ಇಂಜಿನಿಯರಿಂಗ್ ಕಾಲೇಜಿನ ಪ್ಲೇಸ್‌ಮೆಂಟ್ ಸಭಾಂಗಣದಲ್ಲಿ ಆಯೋಜಿಸಲಾಗಿದೆ ಎಂದು ಪಿಇಟಿ ಟ್ರಸ್ಟ್ ನಿರ್ದೇಶಕ ಡಾ.ರಾಮಲಿಂಗಯ್ಯ ತಿಳಿಸಿದರು.
ಮಂಡ್ಯದಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿದ ಅವರು,ಸಮಾಜ ಸೇವಕರಾದ ಕೆ.ಪಿ.ಅರುಣಕುಮಾರಿ ಮತ್ತು ಮಂಗಲ ಎಂ.ಯೋಗೀಶ್ ದಂಪತಿಗಳು ರಾಜ್ಯ ಮಟ್ಟದ ಸಮಾಜ ಸೇವಾ ಪ್ರಶಸ್ತಿಗೆ ಆಯ್ಕೆಯಾಗಿದ್ದು, ರಂಗಭೂಮಿ ಪ್ರಶಸ್ತಿಗೆ ಬೆಂಗಳೂರಿನ ಪೌರಾಣಿಕ ನಾಟಕಗಳ ರಂಗಭೂಮಿ ಕಲಾವಿದ ಡಬ್ಲ್ಯು. ಹೆಚ್.ಶಾಂತ ಕುಮಾರ್ ಆಯ್ಕೆಯಾಗಿದ್ದಾರೆ ಎಂದು ತಿಳಿಸಿದರು.
ಅಂದು ಬೆಳಿಗ್ಗೆ 11 ಗಂಟೆಗೆ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಕಾರ್ಯಕ್ರಮ ಉದ್ಘಾಟನೆ ಮತ್ತು ಪ್ರಶಸ್ತಿ ಪ್ರದಾನ ಮಾಡಲಿದ್ದು, ಶಾಸಕ ಎಂ.ಶ್ರೀನಿವಾಸ್ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ.
ನಿವೃತ್ತ ಮುಖ್ಯ ಇಂಜಿನಿಯರ್ ಎಸ್.ಎಲ್.ಶಿವಪ್ರಸಾದ್ ಭಾಗವಹಿಸಲಿದ್ದಾರೆ ಎಂದರು.
ಜನತಾ ಶಿಕ್ಷಣ ಟ್ರಸ್ಟ್ ಅಧ್ಯಕ್ಷ ಕೆ.ಎಸ್.ವಿಜಯ್ ಆನಂದ್ ಅಧ್ಯಕ್ಷತೆ ವಹಿಸಲಿದ್ದಾರೆ ಎಂದು ಹೇಳಿದರು.
ಸುದ್ದಿಗೋಷ್ಠಿಯಲ್ಲಿ ಪಿಇಟಿ ಟ್ರಸ್ಟ್ ಉಪಾಧ್ಯಕ್ಷ ಎಂ.ಶ್ರೀಧರ್ ಹಾಜರಿದ್ದರು.