Friday, September 20, 2024

ಪ್ರಾಯೋಗಿಕ ಆವೃತ್ತಿ

ಮಂಡ್ಯ| ಜ.13ರಂದು 19 ಕೇಂದ್ರಗಳಲ್ಲಿ ಕೆ. ಸೆಟ್ ಪರೀಕ್ಷೆ

ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಜನವರಿ 13 ರಂದು ಜಿಲ್ಲೆಯ (ಮಂಡ್ಯ ನಗರ ವ್ಯಾಪ್ತಿಯಲ್ಲಿರುವ) 19 ಪರೀಕ್ಷಾ ಕೇಂದ್ರಗಳಲ್ಲಿ ಕೆ -ಸೆಟ್ ಪರೀಕ್ಷೆ ನಡೆಸಲಿದೆ. ಪರೀಕ್ಷೆಯಲ್ಲಿ ಯಾವುದೇ ಅಕ್ರಮ ಚಟುವಟಿಕೆಗಳಿಗೆ ಆಸ್ಪದ ನೀಡದೆ ಶಿಸ್ತುಬದ್ಧವಾಗಿ ನಡೆಸಬೇಕು‌ ಎಂದು ಅಪರ ಜಿಲ್ಲಾಧಿಕಾರಿ ಡಾ.ಹೆಚ್.ಎಲ್ ನಾಗರಾಜ್ ತಿಳಿಸಿದರು.

ಮಂಡ್ಯ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಗುರುವಾರ ನಡೆದ ಪೂರ್ವಭಾವಿ ಸಿದ್ಧತಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಇದೇ ಮೊದಲ ಬಾರಿಗೆ ಕೆ‌ಸೆಟ್ ಪರೀಕ್ಷೆ ಜಿಲ್ಲೆಯ 19 ಪರೀಕ್ಷೆ ಕೇಂದ್ರಗಳಲ್ಲಿ ನಡೆಯಲಿದ್ದು, ಒಟ್ಟು 7779 ಪರೀಕ್ಷಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ‌. ಪರೀಕ್ಷೆಯು ಎರಡು ಅಧಿವೇಶನವನ್ನೊಳಗೊಂಡಿದ್ದು ಕ್ರಮವಾಗಿ ಪತ್ರಿಕೆ-1 ಬೆಳಿಗ್ಗೆ 10 ರಿಂದ 11 ಗಂಟೆಯವರೆಗೆ, ಪತ್ರಿಕೆ-2 ಅಪರಾಹ್ನ 12 ರಿಂದ 2 ಗಂಟೆಯ ಅವಧಿಯವರೆಗೆ ನಡೆಯಲಿದೆ. ಪರೀಕ್ಷಾರ್ಥಿಗಳು ಪರೀಕ್ಷಾ ಕೇಂದ್ರದ ಒಳಗೆ ಪ್ರವೇಶಿಸಿದ ನಂತರ ಎರಡು ಪತ್ರಿಕೆಗಳ ಪರೀಕ್ಷೆ ಮುಗಿದ ನಂತರ ಮಾತ್ರ ಹೊರಗೆ ಹೋಗಲು ಅವಕಾಶವಿರುತ್ತದೆ ಎಂದರು.

ಅಭ್ಯರ್ಥಿಗಳು ಪರೀಕ್ಷಾ ಕೊಠಡಿಯ ಒಳಗೆ ಯಾವುದೇ ರೀತಿಯ ಕೈ ಗಡಿಯಾರ, ಆಧುನಿಕ ಎಲೆಕ್ಟ್ರಾನಿಕ್ ಉಪಕರಣಗಳು, ಮೊಬೈಲ್ ಫೋನ್, ಬ್ಲೂಟೂತ್, ಕ್ಯಾಲ್ಕುಲೇಟರ್, ವೈಟ್ ಫ್ಲೂಯಿಡ್, ವೈರ್ ಲೆಸ್ ಸೆಟ್ಸ್, , ಕ್ಯಾಲ್ಕುಲೇಟರ್ ಇತ್ಯಾದಿ ತರುವುದನ್ನು ನಿಷೇಧಿಸಲಾಗಿದೆ. ಪರೀಕ್ಷಾರ್ಥಿಗಳು ತಮಗೆ ಪ್ರವೇಶ ಪತ್ರದಲ್ಲಿ ನೀಡಲಾಗಿರುವ ಎಲ್ಲಾ ಸೂಚನೆಗಳನ್ನು ಪರಿಶೀಲಿಸಬೇಕು. ಪರೀಕ್ಷಾರ್ಥಿಗಳು ತಮಗೆ ಪ್ರವೇಶ ಪತ್ರದಲ್ಲಿ ತಿಳಿಸಿರುವ ರೀತಿ ವಸ್ತ್ರ ಸಂಹಿತೆ‌ ಪಾಲಿಸಬೇಕು ಎಂದರು.

ಪ್ರತಿ ಪರೀಕ್ಷಾ ಕೇಂದ್ರಕ್ಕೆ ಒಬ್ಬರು ವೀಕ್ಷಕರನ್ನು ನೇಮಕ ಮಾಡಲಾಗಿದೆ. ಪ್ರಶ್ನಪತ್ರಿಕೆ ವಿತರಣೆಗೆ ತ್ರಿಸದಸ್ಯರನ್ನೊಳಗೊಂಡ 6 ಮಾರ್ಗಾಧಿಕಾರಿಗಳ ತಂಡ ರಚಿಸಲಾಗಿದೆ. ವೀಕ್ಷಕರು ಹಾಗೂ ಪರೀಕ್ಷೆಗೆ ನಿಯೋಜಿಸಲಾಗಿರುವ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಪರೀಕ್ಷಾ ಪ್ರಾಧಿಕಾರ ಕಾಲ ಕಾಲಕ್ಕೆ ನೀಡಲಾಗುವ ಸಲಹೆ ಹಾಗೂ ಸೂಚನೆಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು ಎಂದರು.

ಸಭೆಯಲ್ಲಿ ಪದವಿ ಪೂರ್ವ ಶಿಕ್ಷಣ ಇಲಾಖೆ ಉಪನಿರ್ದೇಶಕ ಚಲುವಯ್ಯ, ಅಧೀಕ್ಷಕ ರಾಜೇಗೌಡ, ಉಪ ತಹಶಿಲ್ದಾರ್ ವಸಂತಕುಮಾರ್, ನಗರಸಭೆ ಆಯುಕ್ತ ಆರ್ ಮಂಜುನಾಥ್, ಪ್ರಾದೇಶಿಕ ಸಾರಿಗೆ ಅಧಿಕಾರಿ ಹೇಮಾವತಿ, ಜಿಲ್ಲಾ ಕೈಗಾರಿಕಾ ಕೇಂದ್ರದ ಜಂಟಿ ನಿರ್ದೇಶಕ ಶಿವಲಿಂಗಯ್ಯ, ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಎಚ್ ಶಿವರಾಮೇಗೌಡ ಸೇರಿದಂತೆ ಇನ್ನಿತರ ಅಧಿಕಾರಿಗಳು ಉಪಸ್ಥಿತರಿದ್ದರು.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!