Friday, September 20, 2024

ಪ್ರಾಯೋಗಿಕ ಆವೃತ್ತಿ

ಕಲ್ಬುರ್ಗಿ- ಗೌರಿ ಲಂಕೇಶ್ ಹತ್ಯೆ ಪ್ರಕರಣದ ವಿಚಾರಣೆಗೆ ವಿಶೇಷ ನ್ಯಾಯಾಲಯ: ಸಿಎಂ ಆದೇಶ

ಬಲಪಂಥೀಯ ಕೋಮುವಾದಿಗಳ ಗುಂಡೇಟಿಗೆ ಬಲಿಯಾಗಿದ್ದ ಖ್ಯಾತ ಪತ್ರಕರ್ತೆ, ಸಾಮಾಜಿಕ ಕಾರ್ಯಕರ್ತೆ ಗೌರಿ ಲಂಕೇಶ್ ಮತ್ತು ಸಾಹಿತಿ, ಚಿಂತಕ ಎಂ.ಎಂ.ಕಲ್ಬುರ್ಗಿ ಅವರ ಹತ್ಯೆ ಪ್ರಕರಣದ ಸಂಬಂಧ ವಿಚಾರಣೆಗೆ ವಿಶೇಷ ನ್ಯಾಯಾಲಯ ರಚಿಸುವಂತೆ ಸಿಎಂ ಸಿದ್ದರಾಮಯ್ಯ ಆದೇಶ ಹೊರಡಿಸಿದ್ದಾರೆ.

ಗೌರಿ ಲಂಕೇಶ್ ಅವರು ಸೆಪ್ಟೆಂಬರ್ 05, 2017ರಂದು ಹತ್ಯೆಗೀಡಾಗಿದ್ದು, ಈ ಸಂಬಂಧ ವಿಶೇಷ ತನಿಖಾ ದಳ ರಚಿಸಲಾಗಿದೆ. ಇದುವರೆಗೂ 18 ಆರೋಪಿಗಳು ಬಂಧನಕ್ಕೊಳಗಾಗಿದ್ದು, 1200 ಪುರಾವೆ ಹಾಗೂ 500 ಕ್ಕೂ ವಿವಿಧ ಬಗೆಯ ಸಾಕ್ಷ್ಯಗಳನ್ನೊಳಗೊಂಡ ಚಾರ್ಜ್‌ ಶೀಟ್‌ ಅನ್ನು ನ್ಯಾಯಾಲಯಕ್ಕೆ ಸಲ್ಲಿಸಲಾಗಿದೆ.

ಪ್ರಕರಣದ ವಿಚಾರಣೆಯು ನ್ಯಾಯಾಲಯದಲ್ಲಿ ಜುಲೈ, 2022 ರಿಂದ ಪ್ರಾರಂಭಗೊಂಡಿದ್ದು, ನ್ಯಾಯಾಲಯದ ಅನುದಿನದ ಪ್ರಕರಣಗಳು ಸಾಕಷ್ಟು ಸಂಖ್ಯೆಯಲ್ಲಿ ಇರುವುದರಿಂದ ವಿಚಾರಣೆಯು ನಿಧಾನಗತಿಯಲ್ಲಿ ಸಾಗಿದೆ. ಆದ್ದರಿಂದ, ಈ ಪ್ರಕರಣದ ವಿಚಾರಣೆಗೆ ವಿಶೇಷ ನ್ಯಾಯಾಲಯ ರಚಿಸಿ, ಪೂರ್ಣಾವಧಿ ನ್ಯಾಯಾಧೀಶರನ್ನು ನೇಮಕ ಮಾಡುವಂತೆ ಮೃತರ ಸಹೋದರಿ ಕವಿತಾ ಲಂಕೇಶ್ ರವರು ಕೋರಿದ್ದು, ಈ ಬಗ್ಗೆ ಜರೂರು ಅಗತ್ಯ ಕ್ರಮವಹಿಸಲು ಸೂಚಿಸಿರುವುದಾಗಿ ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.

ವಿಶೇಷ ನ್ಯಾಯಾಲಯ ರಚಿಸುವಂತೆ ಕೋರಿದ್ದ ಎಂ.ಎಂ.ಕಲ್ಬುರ್ಗಿ ಪತ್ನಿ ಉಮಾದೇವಿ

ಕನ್ನಡದ ಹಿರಿಯ ಸಾಹಿತಿ ಹಾಗೂ ಕನ್ನಡ ಸಂಶೋಧನಾ ಕ್ಷೇತ್ರದ ದಿಗ್ಗಜ ಡಾ. ಎಂ.ಎಂ. ಕಲ್ಬುರ್ಗಿ ಅವರನ್ನು 2015ರ ಆಗಸ್ಟ್ 31ರಂದು ಧಾರವಾಡದ ಅವರ ಸ್ವಗೃಹದಲ್ಲಿ ಗುಂಡಿಟ್ಟು ಹತ್ಯೆಗೈಯ್ಯಲಾಗಿತ್ತು. ಈ ಘಟನೆ ನಡೆದು ಏಳು ವರ್ಷಗಳು ಪೂರ್ಣಗೊಂಡಿವೆ.

ಪ್ರಕರಣದ ಸಂಬಂಧ 2018-19ರಲ್ಲಿ ನ್ಯಾಯಾಲಯಕ್ಕೆ ಚಾರ್ಜ್‌ಶೀಟ್ ಸಲ್ಲಿಕೆಯಾಗಿದ್ದು, ಮೃತರ ಕುಟುಂಬದವರ ವಿಚಾರಣೆಗಳು ಪೂರ್ಣಗೊಂಡಿದ್ದರೂ ನ್ಯಾಯಾಲಯದಲ್ಲಿ ವಿಚಾರಣೆಗಳು ಮುಂದುವರೆದಿವೆ. ಈಗಾಗಲೇ ಸಾಕಷ್ಟು ಸಮಯ ಆಗಿರುವುದರಿಂದ ವಿಶೇಷ ನ್ಯಾಯಾಲಯ ರಚಿಸುವಂತೆ ಮೃತರ ಪತ್ನಿ ಶ್ರೀಮತಿ ಉಮಾದೇವಿ ಎಂ. ಎಂ. ಕಲಬುರ್ಗಿ ರವರು ಸಿಎಂ ಸಿದ್ದರಾಮಯ್ಯ ಅವರನ್ನು ಕೋರಿದ್ದರು. ಈ ಮನವಿಗೆ ಸ್ಪಂದಿಸಿರುವ ಮುಖ್ಯಮಂತ್ರಿ ಈ ಬಗ್ಗೆ ತುರ್ತಾಗಿ ಅಗತ್ಯ ಕ್ರಮ ವಹಿಸಲು ಸೂಚಿಸಿದ್ದಾರೆ.

ಆ ಮೂಲಕ ಕಲಬುರ್ಗಿ ಮತ್ತು ಗೌರಿ ಲಂಕೇಶ್ ಹತ್ಯೆ ಸೇರಿ ಎರಡೂ ಪ್ರಕರಣದ ವಿಚಾರಣೆಗೆ ವಿಶೇಷ ನ್ಯಾಯಾಲಯ ರಚನೆಗೆ ಆದೇಶ ನೀಡಿದ್ದಾರೆ.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!