ಕರ್ನಾಟಕದ 16ನೇ ಮುಖ್ಯಮಂತ್ರಿಯಾಗಿ, ದೇಶದ ವಿದೇಶಾಂಗ ಸಚಿವರಾಗಿ, ಮಾಹಾರಾಷ್ಟ್ರದ ರಾಜ್ಯಪಾಲರಾಗಿ ಮತ್ತು ಭಾರತದ ರಾಜಕಾರಣದಲ್ಲಿ ಇನ್ನೂ ಅನೇಕ ಜವಾಬ್ದಾರಿಗಳನ್ನು ವಹಿಸಿ ಛಾಪು ಮೂಡಿಸಿದ್ದ ಎಸ್ಎಂ ಕೃಷ್ಣ ಬೆಂಗಳೂರಿನಲ್ಲಿ ಸದಾಶಿವನಗರದ ನಿವಾಸದಲ್ಲಿ ಇಂದು (ಡಿಸೆಂಬರ್ 10) ನಸುಕಿನ ಜಾವ 2:30ರ ಸುಮಾರಿಗೆ ನಿಧನರಾದರು. ಅವರಿಗೆ 92 ವರ್ಷ ವಯಸ್ಸಾಗಿತ್ತು.
ಮಂಡ್ಯ ಜಿಲ್ಲೆಯ ಮದ್ದೂರು ತಾಲೂಕಿನ ಸೋಮನಹಳ್ಳಿ ಎಂಬ ಗ್ರಾಮದಲ್ಲಿ 1932 ರ ಮೇ 1ರಂದು ಒಕ್ಕಲಿಗ ಕುಟುಂಬದಲ್ಲಿ ಜನಿಸಿದ ಎಸ್ಎಂ ಕೃಷ್ಣ ಪೂರ್ತಿ ಹೆಸರು ಸೋಮನಹಳ್ಳಿ ಮಲ್ಲಯ್ಯ ಕೃಷ್ಣ. ಹುಟ್ಟೂರಿನಲ್ಲಿ ಪ್ರಾಥಮಿಕ ಶಿಕ್ಷಣ ಮುಗಿಸಿದ ಅವರು, ಮೈಸೂರಿನ ಶ್ರೀ ರಾಮಕೃಷ್ಣ ವಿದ್ಯಾಶಾಲೆಯಲ್ಲಿ ಪ್ರೌಢ ಶಿಕ್ಷಣ, ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ತಮ್ಮ ಬ್ಯಾಚುಲರ್ ಆಫ್ ಆರ್ಟ್ಸ್, ಯೂನಿವರ್ಸಿಟಿ ಕಾನೂನು ಕಾಲೇಜಿನಲ್ಲಿ ಕಾನೂನು ಪದವಿ ಪಡೆದಿದ್ದರು. ಅಮೆರಿಕದ ಟೆಕ್ಸಾಸ್ನ ಡಲ್ಲಾಸ್ನಲ್ಲಿರುವ ಸದರ್ನ್ ಮೆಥೋಡಿಸ್ಟ್ ವಿಶ್ವವಿದ್ಯಾಲಯ ಮತ್ತು ವಾಷಿಂಗ್ಟನ್ ಡಿಸಿಯ ಜಾರ್ಜ್ ವಾಷಿಂಗ್ಟನ್ ವಿಶ್ವವಿದ್ಯಾಲಯದ ಲಾ ಸ್ಕೂಲ್ನಿಂದಲೂ ಪದವಿ ಪಡೆದಿದ್ದರು.
ವಾಷಿಂಗ್ಟನ್ ನಲ್ಲಿರುವ ಜಾರ್ಜ್ ವಾಷಿಂಗ್ಟನ್ ವಿಶ್ವವಿದ್ಯಾಲಯದಲ್ಲಿ ಪ್ರತಿಷ್ಠಿತ ಫುಲ್ಬ್ರೈಟ್ ವಿದ್ಯಾರ್ಥಿ ವೇತನವನ್ನು ಎಸ್.ಎಂ.ಕೃಷ್ಣ ಪಡೆದುಕೊಂಡಿದ್ದರು
ಎಸ್ಎಂ ಕೃಷ್ಣ ಅವರು 1999 ರಿಂದ 2004ರವರೆಗೆ ಕರ್ನಾಟಕದ 16ನೇ ಮುಖ್ಯಮಂತ್ರಿಗಳಾಗಿದ್ದರು. ನಂತರ 2004 ರಿಂದ 2008ರವರೆಗೆ ಮಹಾರಾಷ್ಟ್ರದ ರಾಜ್ಯಪಾಲರಾಗಿ, ಕೇಂದ್ರ ವಿದೇಶಾಂಗ ಸಚಿವರಾಗಿಯೂ ಕಾರ್ಯ ನಿರ್ವಹಿಸಿದ್ದಾರೆ. ಬಹುಕಾಲ ಕಾಂಗ್ರೆಸ್ನಲ್ಲಿಯೇ ಗುರುತಿಸಿಕೊಂಡಿದ್ದ ಎಸ್.ಎಂ.ಕೃಷ್ಣ ಅವರು ಬದಲಾದ ರಾಜಕೀಯ ಸನ್ನಿವೇಶಗಳಿಂದಾಗಿ ಮಾರ್ಚ್ 2017ರಲ್ಲಿ ಬಿಜೆಪಿ ಸೇರ್ಪಡೆಯಾಗಿದ್ದರು.
ಆರು ದಶಕಗಳ ಕಾಲದ ಅವರ ರಾಜಕೀಯ ವೃತ್ತಿಜೀವನವನ್ನು ಗುರುತಿಸಿ ಕಳೆದ ವರ್ಷ ಕೃಷ್ಣ ಅವರಿಗೆ ಭಾರತದ ಎರಡನೇ ಅತ್ಯುನ್ನತ ನಾಗರಿಕ ಗೌರವವಾದ ಪದ್ಮವಿಭೂಷಣ ಪ್ರಶಸ್ತಿಯನ್ನು ನೀಡಲಾಗಿತ್ತು.
ಡಿಸೆಂಬರ್ 1989ರಿಂದ ಜನವರಿ 1993ರವರೆಗೆ ಕರ್ನಾಟಕ ವಿಧಾನಸಭೆಯ ಸ್ಪೀಕರ್ ಆಗಿಯೂ ಸೇವೆ ಸಲ್ಲಿಸಿದ್ದರು. 1971 ರಿಂದ 2014ರವರೆಗೆ ವಿವಿಧ ಕಾಲಘಟ್ಟದಲ್ಲಿ ಲೋಕಸಭೆ ಮತ್ತು ರಾಜ್ಯಸಭೆಯ ಸದಸ್ಯರು ಆಗಿದ್ದರು.
ಮುಖ್ಯಮಂತ್ರಿ ಸಿದ್ದರಾಮಯ್ಯ ಸಂತಾಪ
ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ ಅವರ ಸಾವಿನಿಂದ ಆಘಾತಕ್ಕೀಡಾಗಿದ್ದೇನೆ. ರಾಜ್ಯ ಮತ್ತು ಕೇಂದ್ರ ಸಚಿವರಾಗಿ ಹಾಗೂ ಮುಖ್ಯಮಂತ್ರಿಯಾಗಿ ಕೃಷ್ಣ ಅವರು ಸಲ್ಲಿಸಿರುವ ಸೇವೆ ಅನುಪಮವಾದುದು. ವಿಶೇಷವಾಗಿ ಮುಖ್ಯಮಂತ್ರಿಯಾಗಿ ಐಟಿ-ಬಿಟಿ ಕ್ಷೇತ್ರದ ಬೆಳವಣಿಗೆಗೆ ಅವರು ನೀಡಿರುವ ಕೊಡುಗೆಗಾಗಿ ಕರ್ನಾಟಕ ಸದಾ ಋಣಿಯಾಗಿರುತ್ತದೆ ಎಂದು ಸಿಎಂ ಸಿದ್ದರಾಮಯ್ಯ ಸಂತಾಪ ಸೂಚಿಸಿದ್ದಾರೆ.
ಮುತ್ಸದ್ದಿ ರಾಜಕಾರಣಿಯಾಗಿದ್ದ ಕೃಷ್ಣ ಅವರು ಅಜಾತಶತ್ರುಗಳಾಗಿದ್ದರು. ನಾನು ಕಾಂಗ್ರೆಸ್ ಪಕ್ಷಕ್ಕೆ ಸೇರಿದ ಪ್ರಾರಂಭದ ದಿನಗಳಲ್ಲಿ ನನಗೆ ಮಾರ್ಗದರ್ಶಕರಾಗಿದ್ದ ಕೃಷ್ಣ ಅವರು ಸದಾ ನನ್ನ ಹಿತೈಷಿಗಳಾಗಿದ್ದರು.
ಕೃಷ್ಣ ಅವರ ದೂರದರ್ಶಿತ್ವ, ಶಿಸ್ತುಬದ್ಧ ಜೀವನ, ಸಜ್ಜನಿಕೆಯ ನಡವಳಿಕೆ ಮತ್ತು ಅಧ್ಯಯನಶೀಲ ಪ್ರವೃತ್ತಿ ಉದಯೋನ್ಮುಖ ರಾಜಕಾರಣಿಗಳಿಗೆ ಮಾದರಿಯಾಗಿದೆ.
ಅವರ ಅಗಲಿಕೆಯಿಂದ ನೊಂದಿರುವ ಅವರ ಕುಟುಂಬವರ್ಗ ಮತ್ತು ಅಭಿಮಾನಿಗಳ ದು:ಖದಲ್ಲಿ ನಾನೂ ಭಾಗಿಯಾಗಿದ್ದೇನೆ. ಅವರ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಭಗವಂತನಲ್ಲಿ ಕೋರುತ್ತೇನೆ ಸಿಎಂ ತಿಳಿಸಿದ್ದಾರೆ.




