Thursday, September 19, 2024

ಪ್ರಾಯೋಗಿಕ ಆವೃತ್ತಿ

ಕಟೀಲ್ ಮಾನಸಿಕ ಸ್ಥಿಮಿತ ಕಳೆದು ಕೊಂಡಿದ್ದಾರೆ: ದಡದಪುರ ಶಿವಣ್ಣ

ಮುಖ್ಯಮಂತ್ರಿಯಾಗಿ ಐದು ವರ್ಷ ಜನಪರ ಆಡಳಿತ ನೀಡಿರುವ ಸಿದ್ದರಾಮಯ್ಯ ಅವರನ್ನು ಕಂಡರೆ ನಳಿನ್ ಕುಮಾರ್ ಕಟೀಲ್ ಅವರಿಗೆ ಭಯವಿದೆ. ಸಿದ್ದರಾಮಯ್ಯ ಸಿಂಡ್ರೋಮ್ ನಿಂದ ಬಳಲುತ್ತಿರುವ ಕಟೀಲು ಮಾನಸಿಕ ಸ್ಥಿಮಿತ ಕಳೆದುಕೊಂಡಿದ್ದು, ಅವರಿಗೆ ಚಿಕಿತ್ಸೆಯ ಅಗತ್ಯವಿದೆ ಎಂದು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಬಿ.ಎಸ್‌.ಶಿವಣ್ಣ ದಡದಪುರ ಲೇವಡಿ ಮಾಡಿದ್ದಾರೆ.

ಬಿಜೆಪಿ ಅಧ್ಯಕ್ಷ ಕಟೀಲು, ಸಿಎಂ ಬಸವರಾಜ ಬೊಮ್ಮಾಯಿ, ಮಾಜಿ ಸಿಎಂ ಯಡಿಯೂರಪ್ಪ ಸೇರಿದಂತೆ ಹಲವು ಬಿಜೆಪಿ ನಾಯಕರಿಗೆ ಸಿದ್ದರಾಮಯ್ಯ ಅವರ ವಿರುದ್ಧ ಟೀಕೆ ಮಾಡುವ ನೈತಿಕತೆಯಿಲ್ಲ. ಆಪರೇಷನ್ ಕಮಲದ ಮೂಲಕ ತೆಲಂಗಾಣದಲ್ಲಿ ಶಾಸಕರ ಖರೀದಿ ಮಾಡಲು ನೂರಾರು ಕೋಟಿ ಆಮಿಷ ಒಡ್ಡಿದ ಬಿಜೆಪಿ ನಾಯಕರು ಬಹಿರಂಗವಾಗಿ ಸಿಕ್ಕಿಬಿದ್ದಿದ್ದಾರೆ. ಇವರ ವಿರುದ್ಧ ಏಕೆ ಸಿಬಿಐ, ಐಟಿ, ಇಡಿ ಸುಮ್ಮನಿದೆ ಎಂದು ವಾಗ್ದಾಳಿ ನಡೆಸಿದ್ದಾರೆ.

ರಾಜ್ಯದಲ್ಲಿ ಆಪರೇಷನ್ ಕಮಲ ಎಂಬ ಪ್ರಜಾಪ್ರಭುತ್ವ ವಿರೋಧಿ ನಡೆಯ ಮೂಲಕ‌ ಬಿಜೆಪಿ ಅಧಿಕಾರ ಹಿಡಿದಿದೆ. ಕೇಂದ್ರ ಸಚಿವ ಅಮಿತ್ ಶಾ, ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸೇರಿದಂತೆ ಹಲವು ಬಿಜೆಪಿ ಮುಖಂಡರು ಜೈಲಿಗೆ ಹೋಗಿ ಬಂದಿದ್ದಾರೆ. ಆದರೂ ಕಟೀಲು,
ಸಿದ್ದರಾಮಯ್ಯ ಅವರು ಜೈಲಿಗೆ ಹೋಗುತ್ತಾರೆ ಎಂದು ಹೇಳಿಕೆ ನೀಡುವುದು ಹಾಸ್ಯಾಸ್ಪದ ಎಂದು ವ್ಯಂಗ್ಯವಾಡಿದ್ದಾರೆ.

ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿ ಐದು ವರ್ಷ ಜನಪರ ಆಡಳಿತ ನೀಡಿದ್ದಾರೆ. ಸಮಾಜದ ಎಲ್ಲ ವರ್ಗಕ್ಕೂ ಕಾರ್ಯಕ್ರಮಗಳನ್ನು ರೂಪಿಸಿದ ಸಿದ್ದರಾಮಯ್ಯ ಅವರು 13 ಬಜೆಟ್ ಮಂಡಿಸಿದ್ದಾರೆ. ಸದಾ ಬಡವರ ಪರ ಚಿಂತನೆ ಮಾಡುತ್ತಾ ದೇಶದಲ್ಲಿ ಪ್ರಬುದ್ಧ ರಾಜಕಾರಣ ಮಾಡುತ್ತಿದ್ದಾರೆ. ಮುಂಬರುವ ಚುನಾವಣೆಯಲ್ಲಿ ಸೋಲಿನ ಭೀತಿಯಿಂದ ಹತಾಶರಾಗಿರುವ ಕಟೀಲ್ ಬಾಯಿಗೆ ಬಂದಂತೆ ಮಾತನಾಡುತ್ತಿದ್ದಾರೆ ಎಂದು ಕಿಡಿಕಾರಿದರು.

‘ಸಿದ್ದರಾಮಯ್ಯ ನಿವೇಶನ ಖರೀದಿಗಾಗಿ ಸಾಲ ಪಡೆದಿದ್ದಾರೆ. ಈ ಕುರಿತು ದಾಖಲೆ ಇವೆ. ಮುಖ್ಯಮಂತ್ರಿ, ಉಪ ಮುಖ್ಯಮಂತ್ರಿಯಾಗಿ ಕೆಲಸ ಮಾಡಿದವರು ಸಾಲ ಮಾಡಿರುವುದು ಅವರ ಪ್ರಾಮಾಣಿಕತೆಗೆ ಹಿಡಿದ ಕನ್ನಡಿಯಾಗಿದೆ. 1.30 ಕೋಟಿ ರೂ.ಸಾಲ ಇರುವ ಬಗ್ಗೆ ಚುನಾವಣಾ ಆಯೋಗಕ್ಕೆ ನೀಡಿರುವ ಅರ್ಜಿಯಲ್ಲಿ ತಿಳಿಸಿದ್ದಾರೆ. ಇದನ್ನು ಲಂಚ ಎಂದು ಬಿಂಬಿಸುತ್ತಿರುವ ಬಿಜೆಪಿ ಮುಖಂಡರು ಇಲ್ಲಸಲ್ಲದ ಆರೋಪ ಮಾಡುತ್ತಿದ್ದಾರೆ. ಯೋಗ್ಯತೆ ಇದ್ದರೆ ತನಿಖೆ ಮಾಡಿಸಲಿ. ಅದನ್ನು ಬಿಟ್ಟು ಜೈಲಿಗೆ ಹೋಗುತ್ತಾರೆ ಎಂದು ಹೇಳುತ್ತಿರುವ ವಿದೂಷಕ ಕಟೀಲು ಅವರಿಗೆ ನೈತಿಕತೆ ಇದೆಯೇ ಎಂದು ಪ್ರಕಟಣೆಯ ಮೂಲಕ ಟೀಕಿಸಿದ್ದಾರೆ.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!