Friday, November 20, 2026

ಪ್ರಾಯೋಗಿಕ ಆವೃತ್ತಿ

ಮಂಡ್ಯ | ಜೂ.27 ರಂದು ಕೆಂಪೇಗೌಡ ಜಯಂತಿ – ಪ್ರಶಸ್ತಿ ಪ್ರದಾನ

ಮಂಡ್ಯ ಜಿಲ್ಲಾಡಳಿತ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ನಗರಸಭೆ ಸಹಯೋಗದಲ್ಲಿ ನಾಡಪ್ರಭು ಕೆಂಪೇಗೌಡರ ಜಯಂತಿಯನ್ನು ಜೂನ್ 27 ರಂದು ಬೆಳಿಗ್ಗೆ 11 ಗಂಟೆಗೆ ಕಲಾಮಂದಿರದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ನೇಗಿಲಯೋಗಿ ಟ್ರಸ್ಟ್ ಅಧ್ಯಕ್ಷ ರಮೇಶ್ ತಿಳಿಸಿದರು.

ಮಂಡ್ಯದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಆದಿಚುಂಚನಗಿರಿ ಶಿಕ್ಷಣ ಟ್ರಸ್ಟ್ ಪ್ರಧಾನ ಕಾರ್ಯದರ್ಶಿ ಶ್ರೀ ಪುರುಷೋತ್ತಮಾನಂದನಾಥ ಸ್ವಾಮೀಜಿ ಅವರು ಕಾರ್ಯಕ್ರಮದ ದಿವ್ಯ ಸಾನಿಧ್ಯ ವಹಿಸುವರು. ಕೃಷಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎನ್ ಚಲುವರಾಯಸ್ವಾಮಿ ಕಾರ್ಯಕ್ರಮ ಉದ್ಘಾಟಿಸುವರು. ಮಂಡ್ಯ ವಿಧಾನಸಭಾ ಕ್ಷೇತ್ರದ ಶಾಸಕರಾದ ಪಿ. ರವಿಕುಮಾರ್ ಅವರು ಅಧ್ಯಕ್ಷತೆ ವಹಿಸುವರು ಎಂದರು.

ಮುಖ್ಯ ಅತಿಥಿಗಳಾಗಿ ಸಂಸದೆ ಸುಮಲತಾ ಅಂಬರೀಶ್, ವಿಧಾನ ಪರಿಷತ್ ಶಾಸಕರಾದ ಮರಿತಿಬ್ಬೇಗೌಡ, ಮಧು ಜಿ ಮಾದೇಗೌಡ, ದಿನೇಶ್ ಗೂಳಿಗೌಡ, ವಿಧಾನಸಭಾ ಶಾಸಕರಾದ ಪಿ.ಎಂ ನರೇಂದ್ರಸ್ವಾಮಿ, ಎ.ಬಿ ರಮೇಶ್ ಬಂಡಿಸಿದ್ದೇಗೌಡ, ದರ್ಶನ್ ಪುಟ್ಟಣ್ಣಯ್ಯ, ಹೆಚ್ ಟಿ ಮಂಜು, ಕೆ.ಎಂ ಉದಯ್ ಭಾಗವಹಿಸಲಿದ್ದಾರೆ. ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ವಿಶೇಷ ಆಯುಕ್ತರಾದ ಜಯರಾಂ ರಾಯಪುರ ಅವರು ಕೇಂಪೆಗೌಡರ ಕುರಿತು ವಿಶೇಷ ಉಪನ್ಯಾಸ ನೀಡಲಿದ್ದಾರೆ ಎಂದರು.

ಪ್ರಶಸ್ತಿ ಪುರಸ್ಕೃತರು

ಬಿಬಿಎಂಪಿ ವಿಶೇಷ ಆಯುಕ್ತ ಜಯರಾಂ ರಾಯಪುರ, ಅಪರ ಜಿಲ್ಲಾಧಿಕಾರಿ ಡಾ.ಹೆಚ್.ಎಲ್. ನಾಗರಾಜು, ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ಎನ್.ಯತೀಶ್ ಹಾಗೂ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಟಿ.ಎಸ್.ಧನಂಜಯ ಅವರಿಗೆ ನಾಡಪ್ರಭು ಕೆಂಪೇಗೌಡ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದರು.

ಅದ್ದೂರಿ ಮೆರವಣಿಗೆ

ಕೆಂಪೇಗೌಡ ಜಯಂತಿ ಅಂಗವಾಗಿ ಮಂಡ್ಯ ಜಿಲ್ಲಾಧಿಕಾರಿ ಕಚೇರಿಯಿಂದ ವಿವಿಧ ಕಲಾತಂಡಗಳೊಂದಿಗೆ ಸಾರೋಟಿನಲ್ಲಿ ಕೆಂಪೇಗೌಡರ ಅಲಂಕೃತ ಭಾವಚಿತ್ರದ ಮೆರವಣಿಗೆ ಪ್ರಾರಂಭವಾಗಲಿದ್ದು, ಸಂಜಯ ವೃತ್ತ, ಮಹಾವೀರ ವೃತ್ತ ಹಾಗೂ ವಿವಿ ರಸ್ತೆ ಮೂಲಕ ಕಲಾಮಂದಿರದಲ್ಲಿ ಸಮಾವೇಶಗೊಳ್ಳಲಿದೆ ಎಂದರು.

ಅನುದಾನದ ವೆಚ್ಚ ಹೆಚ್ಚಿಸಲು ಆಗ್ರಹ

ಜಿಲ್ಲಾ ಮಂಡ್ಯದಲ್ಲಿ ಕೆಂಪೇಗೌಡ ಜಯಂತಿ ಆಚರಣೆಗೆ ಸರ್ಕಾರ ಕೇವಲ ₹50 ಸಾವಿರ ಅನುದಾನವನ್ನಷ್ಟೆ ನೀಡುತ್ತಿದೆ, ಇದು ಕಾರ್ಯಕ್ರಮವನ್ನು ಉತ್ತಮ ರೀತಿಯಲ್ಲಿ ಆಯೋಜಿಸಲು ಸಾಕಾಗುತ್ತಿಲ್ಲ, ಆದ್ದರಿಂದ ಈ ಅನುದಾನದ ಮೊತ್ತವನ್ನು ₹ 5 ಲಕ್ಷಕ್ಕೆ ಹೆಚ್ಚಿಸಬೇಕೆಂದು ಒತ್ತಾಯಿಸಿದರು. ಮಂಡ್ಯದಲ್ಲಿ ನಡೆಯುತ್ತಿರುವ ಕೆಂಪೇಗೌಡ ಜಯಂತಿ ಕಾರ್ಯಕ್ರಮದಲ್ಲಿ ಎಲ್ಲಾ ಜಾತಿ, ಜನಾಂಗದ ಮುಖಂಡರು ಒಗ್ಗೂಡಿ ಆಚರಣೆ ಮಾಡುತ್ತಿದ್ದೇವೆ ಎಂದು ಹೇಳಿದರು.

ಗೋಷ್ಠಿಯಲ್ಲಿ ಮುಖಂಡರಾದ ಅಪ್ಪಾಜಪ್ಪ, ಬೇಲೂರು ಸೋಮಶೇಖರ್, ತಮ್ಮಯ್ಯಣ್ಣ, ಕೃಷ್ಣೇಗೌಡ, ಸುಜಾತಕೃಷ್ಣ ಹಾಗೂ ಶಿವಶಂಕರ್ ಉಪಸ್ಥಿತರಿದ್ದರು.

ನಮ್ಮ ಸುದ್ದಿಗಳು ಇಷ್ಟವಾದರೆ ನುಡಿ ಕರ್ನಾಟಕ.ಕಾಂ (ಮಂಡ್ಯ ಡಿಜಿಟಲ್ ಮೀಡಿಯಾ) ಗೆ ದೇಣಿಗೆ ನೀಡಿ ಪ್ರೋತ್ಸಾಹಿಸಿ

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ