Thursday, November 19, 2026

ಪ್ರಾಯೋಗಿಕ ಆವೃತ್ತಿ

ಪಾಂಡವಪುರ | ವಿಜೃಂಭಣೆಯ ಕೆಂಪೇಗೌಡ ಜಯಂತಿ ಆಚರಣೆಗೆ ನಿರ್ಧಾರ

ನಾಡಪ್ರಭು ಕೆಂಪೇಗೌಡರ ಜಯಂತಿ ಕಾರ್ಯಕ್ರಮವನ್ನು ತಾಲೂಕು ಆಡಳಿತದ ಸಹಯೋಗದೊಂದಿಗೆ ಜೂ. 27ರಂದು ಬಹಳ ವಿಜೃಂಭಣೆಯಿಂದ ಯಶಸ್ವಿಯಾಗಿ ಆಚರಿಸಲು ಕೆಂಪೇಗೌಡ ಪತ್ತಿನ ಸೇವಾ ಸಹಕಾರ ಸಂಘ ಹಾಗೂ ಕರ್ನಾಟಕ ರಾಜ್ಯ ಒಕ್ಕಲಿಗರ ವಿಕಾಸ ವೇದಿಕೆ ಸಂಪೂರ್ಣ ಸಹಕಾರ ನೀಡಲಿದೆ ಎಂದು ವೇದಿಕೆ ರಾಜ್ಯಾಧ್ಯಕ್ಷೆ ಎಚ್.ಎಲ್.ಯಮುನಾ ತಿಳಿಸಿದರು.
ನಾಡಪ್ರಭು ಕೆಂಪೇಗೌಡರ ಜಯಂತಿ ಆಚರಣೆ ಕುರಿತು ತಹಸೀಲ್ದಾರ್ ಕೆ.ಸಿ.ಸೌಮ್ಯ ಅವರಿಗೆ ಮನವಿ ಪತ್ರ ನೀಡಿ ಮಾತನಾಡಿದ ಅವರು, ಕೆಂಪೇಗೌಡರ ಜಯಂತಿ ಕಾರ್ಯಕ್ರ‌ಮದ ಯಶಸ್ಸಿಗೆ ಸಾರ್ವಜನಿಕರು ಹಾಗೂ ವಿದ್ಯಾರ್ಥಿಗಳ ಪಾಲ್ಗೊಳ್ಳುವಿಕೆ ಅಗತ್ಯದಿಂದಾಗಿ ಶಾಲಾ ವಿದ್ಯಾರ್ಥಿಗಳಿಗೆ ವಿವಿಧ ಸ್ಪರ್ಧೆ ಆಯೋಜನೆಗೆ ಅವಕಾಶವನ್ನೂ ನೀಡುವಂತೆ ತಹಸೀಲ್ದಾರ್ ಅವರನ್ನು ಕೋರಿದರು.
ಇದಕ್ಕೆ ಪ್ರತಿಕ್ರಿಯಿಸಿದ ತಹಸೀಲ್ದಾರ್ ಕೆ.ಸಿ.ಸೌಮ್ಯ, ಜೂನ್ 20ರ ಒಳಗಾಗಿ ಶಾಸಕ ದರ್ಶನ್ ಪುಟ್ಟಣ್ಣಯ್ಯ ಅವರ ಅಧ್ಯಕ್ಷತೆಯಲ್ಲಿ ನಾಡಪ್ರಭು ಕೆಂಪೇಗೌಡರ ಜಯಂತಿ ಆಚರಣೆ ಕುರಿತು ಪೂರ್ವಭಾವಿ ಸಭೆ ಕರೆದು ಅಲ್ಲಿ ಕಾರ್ಯಕ್ರಮದ ಯಶಸ್ಸಿನ ಕುರಿತು ಚರ್ಚೆ ನಡೆಸೋಣ. ಕೆಂಪೇಗೌಡರ ಭಾವಚಿತ್ರದ ಮೆರವಣಿಗೆ ಸೇರಿದಂತೆ ಯಾವ ರೀತಿ ಕಾರ್ಯಕ್ರಮ ಆಯೋಜಿಸುವುದು ಎಂಬುದರ ಕುರಿತು ಸಭೆಯಲ್ಲಿ ಸುದೀರ್ಘ ಚರ್ಚೆ ನಡೆಸೋಣ. ಜತೆಗೆ ಶಾಲಾ ವಿದ್ಯಾರ್ಥಿಗಳಿಗೆ ವಿವಿಧ ಸ್ಪರ್ಧೆ ಕುರಿತು ಬಿಇಒ ಅವರನ್ನು ಸಭೆಗೆ ಆಹ್ವಾನಿಸಿ ತೀರ್ಮಾನ ಕೈಗೊಳ್ಳೋಣ ಎಂದು ತಿಳಿಸಿದರು.
ಜಯಂತಿ ಪ್ರಯುಕ್ತ ವಿದ್ಯಾರ್ಥಿಗಳಿಗೆ ವಿವಿಧ ಸ್ಪರ್ಧೆ
ನಾಡಪ್ರಭು ಕೆಂಪೇಗೌಡರ ಜಯಂತಿ ಪ್ರಯುಕ್ತ ಕರ್ನಾಟಕ ರಾಜ್ಯ ಒಕ್ಕಲಿಗರ ವಿಕಾಸ ವೇದಿಕೆ ತಾಲೂಕು ಸಮಿತಿ ಹಾಗೂ ಕೆಂಪೇಗೌಡ ಪತ್ತಿನ ಸೇವಾ ಸಹಕಾರ ಸಂಘದ ವತಿಯಿಂದ ಶಾಲಾ ವಿದ್ಯಾರ್ಥಿಗಳಿಗೆ ಪ್ರಬಂಧ ಸ್ಪರ್ಧೆ, ಆಶು ಭಾಷಣ ಸ್ಪರ್ಧೆ, ಭಾವಗೀತೆ ಸ್ಪರ್ಧೆ, ಕೆಂಪೇಗೌಡರ ಭಾವಚಿತ್ರ ಬಿಡಿಸುವ ಸ್ಪರ್ಧೆ ಸೇರಿದಂತೆ ವಿವಿಧ ಸ್ಪರ್ಧೆಗಳನ್ನು ಆಯಾಯಾ ಶಾಲೆಗಳಲ್ಲಿ ನಡೆಸಿ ವಿಜೇತ ವಿದ್ಯಾರ್ಥಿಗಳಿಗೆ ಜೂನ್ 27ರಂದು ನಡೆಯುವ ನಾಡಪ್ರಭು ಕೆಂಪೇಗೌಡರ ಜಯಂತಿ ಕಾರ್ಯಕ್ರಮದಲ್ಲಿ ಬಹುಮಾನ ವಿತರಿಸಲಾಗುವುದು ಎಂದು ಕರ್ನಾಟಕ ರಾಜ್ಯ ಒಕ್ಕಲಿಗರ ವಿಕಾಸ ವೇದಿಕೆ ರಾಜ್ಯಾಧ್ಯಕ್ಷೆ ಎಚ್.ಎಲ್.ಯಮುನಾ ಈ ವೇಳೆ ತಿಳಿಸಿದರು.
ಈ ಸಂದರ್ಭದಲ್ಲಿ ಕರ್ನಾಟಕ ರಾಜ್ಯ ಒಕ್ಕಲಿಗರ ವಿಕಾಸ ವೇದಿಕೆ ತಾಲೂಕು ಸಮಿತಿ ಅಧ್ಯಕ್ಷ ಜನತಾ ಭಂಡಾರ ಎಚ್.ಇ.ರಾಮಕೃಷ್ಣೇಗೌಡ, ಕೆಂಪೇಗೌಡ ಪತ್ತಿನ ಸೇವಾ ಸಹಕಾರ ಸಂಘದ ತಾಲೂಕು ಅಧ್ಯಕ್ಷ ಶ್ಯಾದನಹಳ್ಳಿ ವಿಶ್ವೇಶ್ವರ್ ಹುಚ್ಚೇಗೌಡ, ಒಕ್ಕಲಿಗರ ವಿಕಾಸ ವೇದಿಕೆ ತಾಲೂಕು ಉಪಾಧ್ಯಕ್ಷ ಕೆನ್ನಾಳು ಮಹೇಶ್, ಕಾರ್ಯದರ್ಶಿ ಕೆ.ಪಾಪೇಗೌಡ, ಗೌರವಾಧ್ಯಕ್ಷ ಸಿ.ನರಸಿಂಹೇಗೌಡ, ಜಿಲ್ಲಾ ಉಪಾಧ್ಯಕ್ಷ ಟಿ.ಬಿ.ಪ್ರಕಾಶ್, ನಿರ್ದೇಶಕರಾದ ಕನಗನಮರಡಿ ಎ.ನಾಗರಾಜು, ಅರಳಕುಪ್ಪೆ ಜೆ.ಇಂದ್ರೇಶ್, ಪ್ರಸನ್ನ ಇತರರಿದ್ದರು.

ನಮ್ಮ ಸುದ್ದಿಗಳು ಇಷ್ಟವಾದರೆ ನುಡಿ ಕರ್ನಾಟಕ.ಕಾಂ (ಮಂಡ್ಯ ಡಿಜಿಟಲ್ ಮೀಡಿಯಾ) ಗೆ ದೇಣಿಗೆ ನೀಡಿ ಪ್ರೋತ್ಸಾಹಿಸಿ

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ