Thursday, September 19, 2024

ಪ್ರಾಯೋಗಿಕ ಆವೃತ್ತಿ

ಕೆರಗೋಡು ಧ್ವಜ ವಿವಾದ| ಬೆಂಗಳೂರಿನಲ್ಲಿ ಪ್ರತಿಭಟಿಸಿದ ಬಿಜೆಪಿ ಕಾರ್ಯಕರ್ತರ ಬಂಧನ

ಮಂಡ್ಯ ತಾಲೂಕಿನ ಕೆರಗೋಡುವಿನಲ್ಲಿ ಹನುಮಧ್ವಜ ವಿವಾದವು ಈಗ ರಾಜಕೀಯ ವಿವಾದಕ್ಕೆ ಎಡೆಮಾಡಿಕೊಟ್ಟಿದೆ. ಕೆರಗೋಡು ಗ್ರಾಮದಲ್ಲಿ ಬೂದಿ ಮುಚ್ಚಿದ ಕೆಂಡದಂತಾಗಿದ್ದು, ರಾಜ್ಯಾದ್ಯಂತ ಎಲ್ಲ ಜಿಲ್ಲೆಗಳಲ್ಲಿ ಸರ್ಕಾರದ ವಿರುದ್ಧ ಹೋರಾಟ ನಡೆಸುವಂತೆ ಬಿಜೆಪಿ ಕರೆ ಕೊಟ್ಟಿದೆ.

ಈ ಹಿನ್ನೆಲೆಯಲ್ಲಿ ಬೆಂಗಳೂರಿನಲ್ಲೂ ಬಿಜೆಪಿಯು ಪ್ರತಿಭಟನೆ ಹಮ್ಮಿಕೊಂಡಿದೆ. ಪ್ರತಿಭಟನೆಯ ನೇತೃತ್ವವನ್ನು ವಿಪಕ್ಷ ನಾಯಕ ಆರ್ ಅಶೋಕ್ ವಹಿಸಿಕೊಂಡಿದ್ದಾರೆ.

ಮೈಸೂರು ಬ್ಯಾಂಕ್ ಸರ್ಕಲ್​ನಲ್ಲಿ ಪ್ರತಿಭಟನೆ ನಡೆಸಿದ ಹಿನ್ನೆಲೆಯಲ್ಲಿ ಬಿಜೆಪಿ ಕಾರ್ಯಕರ್ತರನ್ನು ಬೆಂಗಳೂರು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಕಾರ್ಯಕರ್ತರೊಂದಿಗೆ ಬೆಂಗಳೂರಿನ ಬಿಜೆಪಿ ಶಾಸಕರು ಪ್ರತಿಭಟನೆಯಲ್ಲಿ ಭಾಗಿಯಾಗಿದ್ದರು. ಸ್ಥಳಕ್ಕೆ ವಿಪಕ್ಷ ನಾಯಕ ಆರ್ ಅಶೋಕ್ ಬರುವ ಮುನ್ನವೇ ಕಾರ್ಯಕರ್ತರನ್ನು ವಶಕ್ಕೆ ಪಡೆಯಲಾಗಿದೆ.

ಬೆಂಗಳೂರಿನಲ್ಲಿ ಫ್ರೀಡಂ ಪಾರ್ಕಿನಲ್ಲಿ ಮಾತ್ರ ಪ್ರತಿಭಟನೆಗೆ ಅವಕಾಶವಿದೆ. ಆದರೆ, ಬಿಜೆಪಿ ಮೈಸೂರು ಬ್ಯಾಂಕ್ ಸರ್ಕಲ್‌ನಲ್ಲಿ ಪ್ರತಿಭಟನೆ ನಡೆಸುತ್ತಿದ್ದರಿಂದ ವಶಕ್ಕೆ ಪಡೆದಿದ್ದಾರೆ.

ಪ್ರತಿಭಟನೆಗೆ ಬಿಜೆಪಿ ರಾಜ್ಯಾಧ್ಯಕ್ಷ ಸೂಚನೆ

ಮಂಡ್ಯದ ಕೆರಗೋಡು ಹನುಮಧ್ವಜ ವಿವಾದವನ್ನೇ ಬಿಜೆಪಿ ಅಸ್ತ್ರ ಮಾಡಿಕೊಂಡಿದೆ. ಕಾಂಗ್ರೆಸ್ ಹನುಮ ಧ್ವಜಕ್ಕೆ ಅವಮಾನ ಮಾಡಿದೆ ಎಂದು ಆರೋಪಿಸಿ ಇಂದು(ಜ.29) ಎಲ್ಲ ಜಿಲ್ಲೆಗಳಲ್ಲಿ ಪ್ರತಿಭಟನೆ ನಡೆಸುವಂತೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಸೂಚನೆ ಕೊಟ್ಟಿದ್ದಾರೆ.

ಎಲ್ಲ ಜಿಲ್ಲೆಗಳ ಜಿಲ್ಲಾಧಿಕಾರಿ ಕಚೇರಿ ಮುಂಭಾಗದಲ್ಲಿ ಧರಣಿ ನಡೆಯಲಿದೆ. ಪ್ರತಿಭಟನೆ ಬಳಿಕ ಜಿಲ್ಲಾಧಿಕಾರಿ ಕಚೇರಿಗೆ ಬಿಜೆಪಿ ನಾಯಕರು ಮುತ್ತಿಗೆ ಹಾಕಲಿದ್ದಾರೆ ಎನ್ನಲಾಗುತ್ತಿದೆ. ಪ್ರತಿಭಟನೆಯಲ್ಲಿ ಶಾಸಕರು, ಮಾಜಿ ಶಾಸಕರು,ಮಾಜಿ ವಿಧಾನ ಪರಿಷತ್ತಿನ ಸದಸ್ಯರು ನಗರಪಾಲಿಕೆ ಮಾಜಿ ಸದಸ್ಯರು, ಬಿಜೆಪಿ ಮುಖಂಡರುಗಳು ಭಾಗಿಯಾಗುವಂತೆ ವಿಜಯೇಂದ್ರ ಸೂಚಿಸಿದ್ದಾರೆ.

“>

ಮಂಡ್ಯದಲ್ಲಿ ಪಾದಯಾತ್ರೆ

ಮಂಡ್ಯದಲ್ಲಿ ಇಂದು (ಜ.29) ರಾಜ್ಯ ಸರ್ಕಾರದ ವಿರುದ್ಧ ಬೃಹತ್ ಪಾದಯಾತ್ರೆ ಹಮ್ಮಿಕೊಂಡಿದ್ದು, ಕೆರಗೋಡು ಗ್ರಾಮದಿಂದ ಪಾದಯಾತ್ರೆ ಆರಂಭವಾಗಿದೆ.

ಗ್ರಾಮದ ಆಂಜನೇಯಸ್ವಾಮಿ ದೇವಾಲಯದಲ್ಲಿ ಪೂಜೆ ಸಲ್ಲಿಸಿ ಪಾಷದಯಾತ್ರೆಗೆ ಚಾಲನೆ ನೀಡಲಾಗಿದೆ. 15 ಕಿ.ಮೀ ಸಾಗಲಿರುವ ಪಾದಯಾತ್ರೆಯು ಹುಲಿವಾನ, ಸಾತನೂರು, ಚಿಕ್ಕಮಂಡ್ಯ ಮಾರ್ಗವಾಗಿ ಮಂಡ್ಯದ ಶ್ರೀಕಾಳಿಕಾಂಭ ದೇವಾಲಯ ಪ್ರವೇಶಿಸಲಿದೆ. ಅಲ್ಲಿಂದ ಜಿಲ್ಲಾಧಿಕಾರಿ ಕಚೇರಿಯವರೆಗೆ ಪಾದಯಾತ್ರೆ ಮುಂದುವರಿಯಲಿದೆ. ಡಿ.ಸಿ ಕಚೇರಿಗೆ ಮುತ್ತಿಗೆ ಹಾಕಿ, ಹನುಮ ಧ್ವಜ ಪುನರ್ ಸ್ಥಾಪನೆಗೆ ಆಗ್ರಹಿಸಲಾಗುವುದು ಎಂದು ಬಿಜೆಪಿ ನಾಯಕರು ತಿಳಿಸಿದ್ದಾರೆ.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!