Thursday, September 19, 2024

ಪ್ರಾಯೋಗಿಕ ಆವೃತ್ತಿ

ಪ್ರತಿಯೊಂದು ಪಟಾಕಿ ಲೈಸೆನ್ಸ್‌ದಾರರ ಸ್ಥಳ ಪರಿಶೀಲನೆಗೆ ಸಿಎಂ ಸಿದ್ದರಾಮಯ್ಯ ಖಡಕ್ ಸೂಚನೆ

ಬೆಂಗಳೂರಿನ ಅತ್ತಿಬೆಲೆಯಲ್ಲಿ ಕಳೆದ ಶನಿವಾರ ನಡೆದ ಪಟಾಕಿ ದುರಂತದ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಉನ್ನತಮಟ್ಟದ ಸಭೆ ನಡೆಸಿದ್ದು, ರಾಜ್ಯಾದ್ಯಂತ ಪ್ರತಿಯೊಂದು ಪಟಾಕಿ ಲೈಸೆನ್ಸ್‌ದಾರರ ಸ್ಥಳ ಪರಿಶೀಲನೆ ನಡೆಸಲು ಖಡಕ್ ಸೂಚನೆ ನೀಡಿದ್ದಾರೆ.

ಅತ್ತಿಬೆಲೆ ಘಟನೆಯನ್ನು ಸರ್ಕಾರ ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದೆ. ಅಧಿಕಾರಿಗಳೂ ಎಲ್ಲ ಮುನ್ನೆಚ್ಚರಿಕೆಯ ಕ್ರಮ ಕೈಗೊಳ್ಳಬೇಕು. ರಾಜ್ಯಾದ್ಯಂತ ಇರುವ ಪ್ರತಿಯೊಂದು ಪಟಾಕಿ ಲೈಸೆನ್ಸ್‌ದಾರರ ಸ್ಥಳ ಪರಿಶೀಲನೆ ನಡೆಸಬೇಕು. ಲೋಪಗಳಿದ್ದರೆ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಬೇಕು ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ಎಕ್ಸ್‌ಪ್ಲೋಸಿವ್‌ ಕಾಯ್ದೆಯ ಪ್ರಕಾರ ಲೈಸೆನ್ಸ್‌ ಕೊಡುವಾಗ ನೀವು ಎಚ್ಚರಿಕೆ ವಹಿಸಬೇಕು. ಹದಿನಾಲ್ಕು ಜನರ ಜೀವಕ್ಕೆ ಯಾರು ಹೊಣೆಗಾರರು. ಕಾಯ್ದೆ ಓದಿದ್ದೀರಾ? ಅವರು ಅದರಲ್ಲಿರುವ ಎಲ್ಲ ಮಾನದಂಡಗಳನ್ನು ಪೂರೈಸಿದ್ದಾರೆಯೇ ಎಂದು ನೋಡಬೇಕು. ತಳಹಂತದ ಅಧಿಕಾರಿಗಳು ಸಲ್ಲಿಸಿದ ವರದಿ ಸರಿಯಿದೆಯೇ ಎಂದು ಜಿಲ್ಲಾಧಿಕಾರಿಗಳು ಪರಿಶೀಲಿಸಬೇಕು ಎಂದು ತಾಕೀತು ಮಾಡಿದರು.

ಅಲ್ಲಿರುವ ಎಲ್ಲ ಮಳಿಗೆಗಳ ಸುರಕ್ಷತೆಯನ್ನೂ ತಪಾಸಣೆ ಮಾಡಲು ಸೂಚಿಸಿದರು. ಇನ್ನು ಮುಂದೆ ಲೈಸನ್ಸ್‌ ನೀಡುವಾಗ ಜಿಲ್ಲಾಧಿಕಾರಿಗಳು, ಪೊಲೀಸ್‌ ಅಧೀಕ್ಷಕರು ಹಾಗೂ ಅಗ್ನಿಶಾಮಕ ದಳದ ಅಧಿಕಾರಿಗಳು ಸ್ಥಳ ಪರಿಶೀಲನೆ ನಡೆಸಬೇಕು ಎಂದ ಸೂಚನೆ ನೀಡಿದರು.

ಸಭೆಯಲ್ಲಿ ಭಾಗವಹಿಸಿದ್ದ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಅವರು ಮಾತನಾಡಿ, ರಾಜಕೀಯ ಸಮಾವೇಶಗಳಲ್ಲಿ ಹಾಗೂ ವಿವಾಹ ಸಮಾರಂಭಗಳಲ್ಲಿ ಸುರಕ್ಷತೆಯ ದೃಷ್ಟಿಯಿಂದ ಪಟಾಕಿ ಬಳಕೆಯನ್ನು ನಿಷೇಧಿಸುವಂತೆ ಸಲಹೆ ನೀಡಿದರು.

ಸಭೆಯಲ್ಲಿ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮ, ಪೊಲೀಸ್‌ ಮಹಾನಿರ್ದೇಶಕ ಅಲೋಕ್‌ ಮೋಹನ್‌, ಮುಖ್ಯಮಂತ್ರಿಯವರ ಅಪರ ಮುಖ್ಯ ಕಾರ್ಯದರ್ಶಿ ಡಾ. ರಜನೀಶ್‌ ಗೋಯಲ್‌, ನಗರಾಭಿವೃದ್ಧಿ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಾಕೇಶ್‌ ಸಿಂಗ್‌, ಡಿಜಿಪಿ ಅಲೋಕ್‌ ಮೋಹನ್‌, ಬಿಬಿಎಂಪಿ ಆಯುಕ್ತ ತುಷಾರ್‌ ಗಿರಿನಾಥ್‌, ಬೆಂಗಳೂರು ನಗರ ಜಿಲ್ಲಾಧಿಕಾರಿ ಕೆ.ಎ. ದಯಾನಂದ, ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಡಾ. ಶಿವಶಂಕರ್‌ ಮತ್ತು ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿಗಳಾದ ಗೋವಿಂದರಾಜು, ನಸೀರ್ ಅಹಮದ್ ಮತ್ತು ಸರ್ಕಾರದ ಇತರ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!