ಕೊಡಗು ಜಿಲ್ಲೆಯ ಮಡಿಕೇರಿ ತಾಲೂಕಿನ ದೇವರಕೊಲ್ಲಿ ಗ್ರಾಮದ ಬಳಿ ಲಾರಿ ಹಾಗೂ ಕಾರಿನ ನಡುವೆ ಭೀಕರ ಅಪಘಾತ ಸಂಭವಿಸಿದ್ದು, ನಾಲ್ವರು ಮೃತಪಟ್ಟಿರುವ ಘಟನೆ ಶುಕ್ರವಾರ ಮಧ್ಯಾಹ್ನ ನಡೆದಿದೆ.
ಈ ದುರ್ಘಟನೆಯಲ್ಲಿ ಪೊನ್ನಂಪೇಟೆ ತಾಲೂಕಿನ ಗೋಣಿಕೊಪ್ಪ ನಿವಾಸಿಗಳು ಎನ್ನಲಾದ ರಿಜ್ವಾನ್, ನಹೀದ್, ರಾಕಿಬ್, ನಿಹಾದ್ ನಾಲ್ವರು ಸಾವಿಗೀಡಾಗಿದ್ದಾರೆ.
ಲಾರಿ ಗುದ್ದಿದ ರಭಸಕ್ಕೆ ಕಾರಿನಲ್ಲಿದ್ದ ನಾಲ್ವರ ಪೈಕಿ ಇಬ್ಬರು ಸ್ಥಳದಲ್ಲೇ ಪ್ರಾಣಬಿಟ್ಟಿದ್ದರೆ, ಇನ್ನಿಬ್ಬರು ಆಸ್ಪತ್ರೆಗೆ ಸಾಗಿಸುವ ಮಾರ್ಗ ಮಧ್ಯೆ ಕೊನೆಯುಸಿರೆಳೆದಿದ್ದಾರೆ.
ಕಾರು ಮಂಗಳೂರಿನಿಂದ ಮಡಿಕೇರಿ ಕಡೆಗೆ ತೆರಳುತ್ತಿತ್ತು. ಕಾರಿನಲ್ಲಿದ್ದ ನಾಲ್ಕು ಮಂದಿ ಗುರುವಾರ ಉಳ್ಳಾಲಕ್ಕೆ ಹೋಗಿ ಹಿಂತಿರುಗುವಾಗ ಎದುರಿಗೆ ಬರುತ್ತಿದ್ದ ಲಾರಿ ಕಾರಿಗೆ ಡಿಕ್ಕಿ ಹೊಡೆದಿದೆ. ಕಾರಿನ ಮುಂಭಾಗ ಸಂಪೂರ್ಣ ನಜ್ಜುಗುಜ್ಜಾಗಿದೆ. ಸ್ಥಳಕ್ಕೆ ಮಡಿಕೇರಿ ಗ್ರಾಮಾಂತರ ಠಾಣೆ ಪೊಲೀಸರು ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.




