Thursday, November 19, 2026

ಪ್ರಾಯೋಗಿಕ ಆವೃತ್ತಿ

ಮುಂಗಾರು ಮಳೆಯ ಅಬ್ಬರ : ಕೆ.ಆರ್.ಎಸ್ ಒಳಹರಿವು ಹೆಚ್ಚಳ

ರಾಜ್ಯಕ್ಕೆ ಮುಂಗಾರು ಪ್ರವೇಶದಿಂದಾಗಿ ಕಾವೇರಿ ನದಿ ಪಾತ್ರದಲ್ಲಿ ಎಡೆಬಿಡದೇ ಮಳೆ ಸುರಿಯುತ್ತಿದೆ. ಇದರಿಂದಾಗಿ ಕಾವೇರಿ ನದಿಗೆ ಜೀವಕಳೆ ಬಂದಿದ್ದು, ಮೈದುಂಬಿ ಹರಿಯುತ್ತಿದೆ. ಇದರಿಂದಾಗಿ ಸಹಜವಾಗಿಯೇ ಕೃಷ್ಣರಾಜ ಸಾಗರ ಅಣೆಕಟ್ಟೆ (ಕೆಆರ್’ಎಸ್)ಯ ಒಳಹರಿವಿನಲ್ಲಿ ಗಣನೀಯ ಹೆಚ್ಚಳವಾಗಿದೆ.

ಗರಿಷ್ಟ 124.80 ಎತ್ತರದ ಅಣೆಕಟ್ಟೆಯಲ್ಲಿ ಪ್ರಸ್ತುತ 89.35 ಅಡಿ ನೀರಿನ ಸಂಗ್ರಹವಿದೆ, ಶನಿವಾರ 150 ಕ್ಯೂಸೆಕ್ ಇದ್ದ ಒಳಹರಿವು, ಭಾನುವಾರ 650 ಕ್ಯೂಸೆಕ್ ಗೆ ತಲುಪಿತ್ತು. ಇಂದು ಸೋಮವಾರ (ಮೇ 26) ಬೆಳಿಗ್ಗೆ ಎಂಟು ಗಂಟೆಯ ವೇಳೆಗೆ ಒಳ ಹರಿವಿನ ಪ್ರಮಾಣ 2,053 ಕ್ಯೂಸೆಕ್ ಹೆಚ್ಚಳವಾಗಿದೆ. ಹವಾಮಾನ ವರದಿಯ ಪ್ರಕಾರ ಇಂದು ಕೂಡ ಭಾರಿ ಪ್ರಮಾಣದ ಮಳೆ ಸುರಿಯುತ್ತಿದ್ದು, ಒಳಹರಿವಿನ ಪ್ರಮಾಣ ಇನ್ನಷ್ಟು ಹೆಚ್ಚಳ ಕಾಣಲಿದೆ.

ರೆಡ್ ಅಲರ್ಟ್ ಘೋಷಣೆ

ವಿಶೇಷವಾಗಿ ಕರಾವಳಿ ಜಿಲ್ಲೆಗಳಲ್ಲಿ ಅತಿಯಾದ ಮಳೆಯಾಗುತ್ತಿದೆ. ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲಿ ನಿರಂತರ ಮಳೆಯ ಜೊತೆ ಜೋರಾದ ಗಾಳಿಯೂ ಬೀಸುತ್ತಿದೆ. ಇದರಿಂದ ಜನ ಜೀವನ ಅಸ್ತವ್ಯಸ್ತವಾಗಿದೆ. ನದಿ, ಹಳ್ಳಕೊಳ್ಳಗಳು ತುಂಬಿ ಹರಿಯುತ್ತಿವೆ.

ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡದಲ್ಲಿ ಇಂದು ಭಾರಿ ಮಳೆಯಾಗಲಿದ್ದು ರೆಡ್ ಅಲರ್ಟ್ ಘೋಷಿಸಲಾಗಿದೆ. ಗಾಳಿಯ ವೇಗವೂ ಹೆಚ್ಚಾಗಲಿದೆ. ಮೇ 31ರವರೆಗೆ ಜೋರಾಗಿ ಗಾಳಿ  ಬೀಸಲಿದ್ದು, ಸಾರ್ವಜನಿಕರು ಎಚ್ಚರ ವಹಿಸಬೇಕು ಎಂದು ಹವಾಮಾನ ಇಲಾಖೆ ತಿಳಿಸಿದೆ.

ಉತ್ತರ ಒಳನಾಡಿನ ಕೆಲವು ಜಿಲ್ಲೆಗಳಲ್ಲೂ ಮಳೆಯಾಗುವ ಸಾಧ್ಯತೆ ಇದೆ. ಉತ್ತರ ಒಳನಾಡಿನ ಜಿಲ್ಲೆಗಳಾದ ಬಾಗಲಕೋಟೆ, ಗದಗ, ವಿಜಯಪುರದಲ್ಲಿ ಮಳೆ ಜೋರಾಗಿ ಅಬ್ಬರಿಸಲಿದ್ದು, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಬೆಳಗಾವಿ, ಧಾರವಾಡದಲ್ಲೂ ಮಳೆ ಬೀಳುವ ಸಾಧ್ಯತೆ ಇದೆ. ಬೀದರ್‌, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ಯಾದಗಿರಿ ಜಿಲ್ಲೆಗಳಲ್ಲಿ ಒಣಹವೆ ಮುಂದುವರಿಯಲಿದೆ. ಉತ್ತರ ಒಳನಾಡಿ ಜಿಲ್ಲೆಗಳಲ್ಲೂ ಜೋರಾಗಿ ಗಾಳಿ ಬೀಸಲಿದೆ.

ದಕ್ಷಿಣ ಒಳನಾಡಿನ ಕೆಲವು ಜಿಲ್ಲೆಗಳಲ್ಲೂ ಮಳೆಯ ಅಬ್ಬರ ಜೋರಾಗಲಿದ್ದು, ಈ ಜಿಲ್ಲೆಗಳಲ್ಲಿ ಸತತವಾಗಿ ಮಳೆ ಸುರಿಯುತ್ತಿದೆ. ಇಂದೂ ಕೂಡ ಮಳೆ ಮುಂದುವರಿಯಲಿದ್ದು ರೆಡ್ ಅಲರ್ಟ್ ಘೋಷಿಸಲಾಗಿದೆ. ದಕ್ಷಿಣ ಒಳನಾಡಿನ ಜಿಲ್ಲೆಗಳಾದ ಚಿಕ್ಕಮಗಳೂರು, ಕೊಡಗು, ಶಿವಮೊಗ್ಗದಲ್ಲಿ ವರುಣನ ಆರ್ಭಟ ಜೋರಾಗಲಿದ್ದು, ರೆಡ್ ಅಲರ್ಟ್ ಘೋಷಿಸಲಾಗಿದೆ. ಹಾಸನ, ಮಂಡ್ಯ, ಮೈಸೂರು, ಚಾಮರಾಜನಗರ ಜಿಲ್ಲೆಗಳಲ್ಲೂ ಮಳೆ ಮುಂದುವರೆಯಲಿದ್ದು, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಚಿತ್ರದುರ್ಗ, ದಾವಣಗೆರೆ, ಕೋಲಾರ, ರಾಮನಗರ, ತುಮಕೂರು, ವಿಜಯನಗರ, ಬಳ್ಳಾರಿ ಜಿಲ್ಲೆಗಳಲ್ಲಿ ಒಣಹವೆ ಮುಂದುವರಿಯಲಿದೆ.

ನಮ್ಮ ಸುದ್ದಿಗಳು ಇಷ್ಟವಾದರೆ ನುಡಿ ಕರ್ನಾಟಕ.ಕಾಂ (ಮಂಡ್ಯ ಡಿಜಿಟಲ್ ಮೀಡಿಯಾ) ಗೆ ದೇಣಿಗೆ ನೀಡಿ ಪ್ರೋತ್ಸಾಹಿಸಿ

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ