Thursday, November 19, 2026

ಪ್ರಾಯೋಗಿಕ ಆವೃತ್ತಿ

ಸೌಜನ್ಯ ಪ್ರಕರಣ ಮರುತನಿಖೆಗೆ ಆಗ್ರಹಿಸಿ ಬೆಳ್ತಂಗಡಿಯಿಂದ ಬೆಂಗಳೂರಿಗೆ ಪಾದಯಾತ್ರೆ

ಧರ್ಮಸ್ಥಳದ ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣವನ್ನು ವಿಶೇಷ ಪ್ರಕರಣವೆಂದು ಪರಿಗಣಿಸಿ ತಕ್ಷಣವೇ ಮರು ತನಿಖೆ ನಡೆಸುವುದು ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಆಗಸ್ಟ್ 26ರಿಂದ ಬೆಳ್ತಂಗಡಿಯಿಂದ ಬೆಂಗಳೂರಿನವರೆಗೆ ಪಾದಯಾತ್ರೆ ಹಮ್ಮಿಕೊಳ್ಳಲಾಗುವುದು ಎಂದು ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷದ ಉಪಾಧ್ಯಕ್ಷ ಲಿಂಗೇಗೌಡ ತಿಳಿಸಿದರು.

ಮಂಡ್ಯದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸುಮಾರು 14 ದಿನಗಳ ಕಾಲ ನಡೆಯಲಿರುವ ಪಾದಯಾತ್ರೆಯೂ ಸುಮಾರು 330 ಕಿಲೋ ಮೀಟ‌ರ್ ಕ್ರಮಮಿಸಲಿದೆ. ಸೆ.7ರಂದು ಬೆಂಗಳೂರು ತಲುಪಲಿದ್ದು, ಸೆ.8ರಂದು ವಿಧಾನಸೌಧ ತಲುಪಲಿದೆ. ಈ ಪಾದಯಾತ್ರೆಯಲ್ಲಿ ಕೇವಲ KRS ಪಕ್ಷದ ಕಾರ್ಯಕರ್ತರು ಮಾತ್ರವಲ್ಲದೆ, ರಾಜ್ಯದ ಎಲ್ಲಾ ಪ್ರಜ್ಞಾವಂತ ಸಾರ್ವಜನಿಕರು ಭಾಗವಹಿಸಬೇಕೆಂದು ಮನವಿ ಮಾಡಿದರು.

ಸೌಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಶೇಷ ಪೊಲೀಸ್ ತನಿಖಾ ತಂಡ ರಚಿಸಿ, ಪರ್ಯಾಯವಾಗಿ ಈಗಾಗಲೇ ತನಿಖೆ ಮಾಡಿರುವ ತನಿಖಾಧಿಕಾರಿಗಳು ಸಮರ್ಪಕವಾಗಿ ಮತ್ತು ವೃತ್ತಿಪರವಾಗಿ ತನಿಖೆ ನಡೆಸಿಲ್ಲ ಎನ್ನುವ ಆರೋಪಗಳ ಹಿನ್ನೆಲೆಯಲ್ಲಿ ಅವರನ್ನೂ ತನಿಖೆಗೆ ಒಳಪಡಿಸಬೇಕು. ರಾಜ್ಯದಲ್ಲಿ ಮಕ್ಕಳ ಮತ್ತು ಮಹಿಳೆಯರ ಮೇಲೆ ನಡೆಯುವ ಅತ್ಯಾಚಾರ ಮತ್ತು ಕೊಲೆ ಪ್ರಕರಣಗಳ ಶೀಘ್ರ ವಿಲೇವಾರಿಗೆ ವಿಶೇಷ ತ್ವರಿತ ನ್ಯಾಯಾಲಯಗಳನ್ನು (Fast Track Courts) ಸ್ಥಾಪಿಸಬೇಕೆಂದು ಆಗ್ರಹಿಸಿದರು.

ಮಕ್ಕಳ ಮುತ್ತು ಮಹಿಳೆಯರ ಮೇಲೆ ನಡೆಯುವ ಅತ್ಯಾಚಾರ ಮತ್ತು ಕೊಲೆ ಪ್ರಕರಣಗಳಲ್ಲಿ ಸಂತ್ರಸ್ತರಿಗೆ ಮತ್ತು ಅವರ ಕುಟುಂಬದವರಿಗೆ ಮಾನಸಿಕ ಮತ್ತು ಆರ್ಥಿಕ ಸಹಾಯ ನೀಡುವ ನಿಟ್ಟಿನಲ್ಲಿ ಮತ್ತು ತನಿಖೆಯ ಮತ್ತು ನ್ಯಾಯಲಯದಲ್ಲಿಯ ವಿಚಾರಣೆಯ ಪ್ರಗತಿಯನ್ನು ಕಾಲಕಾಲಕ್ಕೆ ಪರಿಶೀಲಿಸುವಂತಹ ವ್ಯವಸ್ಥೆಗಾಗಿ ರಾಜ್ಯದಲ್ಲಿ ಸೌಜನ್ಯ ಮಹಿಳಾ ಸುರಕ್ಷ ಆಯೋಗ ಸ್ಥಾಪಿಸಬೇಕು, ಸಾರ್ವಜನಿಕ ಸ್ಥಳಗಳಲ್ಲಿ ಮತ್ತು ಕೆಲಸದ ಸ್ಥಳಗಳಲ್ಲಿ ಮಕ್ಕಳ ಮತ್ತು ಮಹಿಳೆಯರ ಸುರಕ್ಷೆಗಾಗಿ ಸರ್ಕಾರ ಮತ್ತು ಖಾಸಗಿ ಸಂಸ್ಥೆಗಳು ಕೈಗೊಳ್ಳಬೇಕಾದ ಕ್ರಮಗಳನ್ನು ಜಾರಿ ಮಾಡಿಸುವ ಮತ್ತು ಖಾತ್ರಿಪಡಿಸುವ ಅಧಿಕಾರವನ್ನು ಮತ್ತು ಅಯೋಗದ ಆದೇಶಗಳನ್ನು ಉಲ್ಲಂಘಿಸುವವರಿಗೆ ದಂಡ ಶಿಕ್ಷೆ ವಿಧಿಸುವ ಆರೆನ್ಯಾಯಿಕ ಅಧಿಕಾರವನ್ನು ಈ ಆಯೋಗಕ್ಕೆ ನೀಡಬೇಕು, ಇದಕ್ಕಾಗಿ ಸರ್ಕಾರ ಆಗತ್ಯ ಕಾನೂನುಗಳನ್ನು ರೂಪಿಸಬೇಕು ಎಂದು ಒತ್ತಾಯಿಸಿದರು.

ಮಕ್ಕಳನ್ನು ಮತ್ತು ಮಹಿಳೆಯರನ್ನು ಲೈಂಗಿಕ ಶೋಷಣೆಗೆ ಒಳಪಡಿಸಲು ಮತ್ತು ವೇಶ್ಯಾವಾಟಿಕೆಗೆ ತಳ್ಳಲು ಮಾಡುವ ಅಪಹರಣ ಮತ್ತು ಆಮಿಷಗಳನ್ನು ಒಡ್ಡಿ ವಂಚಿಸುವ ಮಾನವ ಕಳ್ಳಸಾಗಾಣಿಕೆ ಕಾಳದಂಧೆಯ ಕರಾಳಜಾಲ (Human Trafficking) ರಾಜ್ಯದಲ್ಲಿ ಸಕ್ರಿಯವಾಗಿದೆ, ಕಳೆದ ಮೂರೇ ವರ್ಷಗಳ ಅವಧಿಯಲ್ಲಿ ರಾಜ್ಯದಲ್ಲಿ 40000 ಮಹಿಳೆಯರು ನಾಪತ್ತೆ ಆಗಿದ್ದಾರೆ ಎಂದು ಇತ್ತೀಚೆಗೆ ಕೇಂದ್ರ ಗೃಹ ಸಚಿವಾಲಯ ಮಾಹಿತಿ ನೀಡಿದೆ. ಇದನ್ನು ತಡೆಗಟ್ಟಲು ಮತ್ತು ಮಕ್ಕಳ ಹಾಗೂ ಮಹಿಳೆಯರ ಮೇಲಿನ ಅತ್ಯಾಚಾರ ಹಾಗೂ ಕೂಲೆ ಪ್ರಕರಣಗಳ ತನಿಖೆಗೆ ರಾಜ್ಯದ ಸಿಐಡಿ ಇಲಾಖೆ ಮಾದರಿಯಲ್ಲಿ ವಿಶೇಷ ಪೊಲೀಸ್‌ ಪಡೆ/ಇಲಾಖೆಯನ್ನು ಸೃಜಿಸಬೇಕು ಮತ್ತುಆ ರೀತಿಯ ಎಲ್ಲಾ ಪ್ರಕರಣಗಳು ಈ ಇಲಾಖೆಯ ವ್ಯಾಪ್ತಿಗೆ ಬರಬೇಕು.

ಧರ್ಮಸ್ಥಳದ ಸುತ್ತಮುತ್ತ ಹಲವಾರು ದಶಕಗಳಿಂದ ಆತ್ಮಹತ್ಯೆಗಳೂ ಸೇರಿದಂತೆ ನೂರಾರು ಅಸಹಜ ಸಾವಿನ ಪ್ರಕರಣಗಳು ನಡೆದಿವೆ ಎಂಬ ಆರೋಪಗಳು ಕೇಳಿ ಬರುತ್ತಿರುವ ಹಿನ್ನೆಲೆಯಲ್ಲಿ ರಾಜ್ಯ ಉಚ್ಚ ನ್ಯಾಯಾಲಯದ ನಿವೃತ್ತ ನಾಯಮೂರ್ತಿಗಳ ನೇತೃತ್ವದಲ್ಲಿ ನ್ಯಾಯಾಂಗ ತನಿಖೆ ನಡೆಸಬೇಕೆಂದು ಆಗ್ರಹಿಸಿದರು.

ಗೋಷ್ಠಿಯಲ್ಲಿ ಜಿಲ್ಲಾಧ್ಯಕ್ಷ ರಮೇಶ್ ಗೌಡ, ಪ್ರಧಾನ ಕಾರ್ಯದರ್ಶಿ ಕೀಲಾರ ಚಂದ್ರು, ಮುಖಂಡರಾದ ಜಗದೀಶ್, ಪುಟ್ಟರಾಜು ಹಾಗೂ ರವೀಂದ್ರ ಉಪಸ್ಥಿತರಿದ್ದರು.

ನಮ್ಮ ಸುದ್ದಿಗಳು ಇಷ್ಟವಾದರೆ ನುಡಿ ಕರ್ನಾಟಕ.ಕಾಂ (ಮಂಡ್ಯ ಡಿಜಿಟಲ್ ಮೀಡಿಯಾ) ಗೆ ದೇಣಿಗೆ ನೀಡಿ ಪ್ರೋತ್ಸಾಹಿಸಿ

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ