Friday, November 20, 2026

ಪ್ರಾಯೋಗಿಕ ಆವೃತ್ತಿ

ಮಂಡ್ಯಕ್ಕೆ ಸಿಎಂ ಸಿದ್ದರಾಮಯ್ಯ ; ಕುರುಬರ ವಿದ್ಯಾರ್ಥಿ ನಿಲಯಕ್ಕೆ ಶಂಕುಸ್ಥಾಪನೆ – ಸುರೇಶ್

ಮಂಡ್ಯ ಜಿಲ್ಲಾ ಕುರುಬರ ಸಂಘದ ವತಿಯಿಂದ ನಿರ್ಮಾಣ ಮಾಡುತ್ತಿರುವ ವಿದ್ಯಾರ್ಥಿ ನಿಲಯದ ಕಟ್ಟಡದ ಶಂಕುಸ್ಥಾಪನ ಸಮಾರಂಭಕ್ಕೆ ಮೇ.8 ರಂದು ಮಂಡ್ಯ ನಗರಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಆಗಮಿಸುತ್ತಿದ್ದು ಈ ನಿಟ್ಟಿನಲ್ಲಿ ಎಲ್ಲರೂ ಸೇರಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಲು ಮುಂದಾಗಬೇಕು ಎಂದು ಎಂದು ಮಂಡ್ಯ ಜಿಲ್ಲಾ ಕುರುಬರ ಸಂಘದ ಅಧ್ಯಕ್ಷ ಎಂ.ಎಲ್.ಸುರೇಶ್ ತಿಳಿಸಿದರು.

ಮಂಡ್ಯನಗರದ ಕನಕ ಸಮುದಾಯ ಭವನದಲ್ಲಿ ಕಾರ್ಯಕ್ರಮದ ರೂಪರೇಷೆ ಕುರಿತು ಕರೆದಿದ್ದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜಿಲ್ಲೆಗೆ ಕೊಟ್ಟಿರುವ ಕೊಡುಗೆ ಅಪಾರವಾಗಿದ್ದು, ಎಲ್ಲಾ ವರ್ಗದ ಜನರಿಗೂ ಸಹಾಯ ಮಾಡಿದ್ದಾರೆ ಎಂದು ಹೇಳಿದರು.

ಪ್ರತಿಯೊಂದು ಜಿಲ್ಲೆಯಲ್ಲಿ ಹಾಸ್ಟೆಲ್ ಗಳಿದ್ದರೆ ಹಿಂದುಳಿದ ವರ್ಗಗಳ ಸಮಾಜದ ಮಕ್ಕಳಿಗೆ ಶಿಕ್ಷಣ ಸಿಗುತ್ತದೆ.ಹಾಸ್ಟೆಲ್ ನಿರ್ಮಾಣದಿಂದ ಶೋಷಿತ ಸಮುದಾಯಗಳಿಗೆ ಶಿಕ್ಷಣ ಪಡೆಯಲು ಅನುಕೂಲವಾಗುತ್ತದೆ. ಈ ಹಾಸ್ಟೆಲ್ ಗೆ ‘ಸಿದ್ದರಾಮಯ್ಯ ವಿದ್ಯಾರ್ಥಿ ಭವನ’ ಎಂದು ಹೆಸರು ಇಡಲು ನಿರ್ಧಾರ ಮಾಡಲಾಗಿದೆ ಎಂದು ಹೇಳಿದರು.

ಏಪ್ರಿಲ್ 28ರಿಂದ 30 ರವರೆಗೆ ಜಿಲ್ಲೆಯ ವಿವಿಧ ತಾಲೂಕುಗಳಲ್ಲಿ ಪ್ರವಾಸ ಮಾಡಿ ಕಾರ್ಯಕ್ರಮದ ಯಶಸ್ಸಿಗೆ ಹೆಚ್ಚಿನ ಸಂಖ್ಯೆಯಲ್ಲಿ ಜನರು ಭಾಗವಹಿಸಬೇಕು ಎಂದು ಪೂರ್ವಭಾವಿ ಸಭೆ ಮಾಡಲಾಗು ವುದು ಎಂದರು
ಕಾರ್ಯಕ್ರಮಕ್ಕೆ ಭಾಗವಹಿಸು ವವರಿಗೆ ಊಟ ವ್ಯವಸ್ಥೆ ಕಲ್ಪಿಸಲಾಗಿದೆ.ಯಾರಿಗೂ ತೊಂದರೆಯಾಗದ ರೀತಿ ಕಾರ್ಯಕ್ರಮವನ್ನು ರೂಪಿಸ ಲಾಗುವುದು ಆದ್ದರಿಂದ ಪ್ರತಿಯೊಬ್ಬರೂ ಜವಾಬ್ದಾರಿ ತೆಗೆದುಕೊಂಡು ಅಚ್ಚುಕಟ್ಟಾಗಿ ನಿರ್ವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕೆಂದು ಮನವಿ ಮಾಡಿದರು.

ಮೈಷುಗರ್ ಅಧ್ಯಕ್ಷ ಸಿ.ಡಿ.ಗಂಗಾಧರ್ ಮಾತನಾಡಿ, ಮೇ.8ರಂದು ಮೈಶುಗರ್ ಸಕ್ಕರೆ ಕಾರ್ಖಾನೆ ಆವರಣದಲ್ಲಿ ನೂತನವಾಗಿ ನಿರ್ಮಿಸಿರುವ ನಾಲ್ವಡಿ ಕೃಷ್ಣರಾಜ ಒಡೆಯರ್ ಕಂಚಿನ ಪುತ್ತಳಿಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅನಾವರಣಗೊಳಿಸುವರು. ಜೊತೆಗೆ ವಿದ್ಯುತ್ ಯೂನಿಟ್ ಘಟಕವನ್ನು ಉದ್ಘಾಟಿಸುವರು ಎಂದು ತಿಳಿಸಿದರು.

ಮೈಷುಗರ್ ಸಕ್ಕರೆ ಕಾರ್ಖಾನೆಗೆ 103 ಕೋಟಿ ಆರ್ಥಿಕ ಸಹಕಾರ ನೀಡಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯ ಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಚಲುವರಾಯಸ್ವಾಮಿ ಅವರು ಶಕ್ತಿ ತುಂಬಿದ್ದಾರೆ ಅವರ ವಿಶ್ವಾಸ ಉಳಿಸುವ ಕೆಲಸವನ್ನು ಮಾಡುತ್ತೇವೆ ಎಂದು ಹೇಳಿದರು.

ಜಿಲ್ಲಾ ಹಿಂದುಳಿದ ಜಾತಿಗಳ ಒಕ್ಕೂಟದ ಅಧ್ಯಕ್ಷ ಕೆ ಎಚ್. ನಾಗರಾಜು ಮಾತನಾಡಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಎಲ್ಲರಿಗೂ ಸಾಮಾಜಿಕ ನ್ಯಾಯ ಒದಗಿಸುವಕೆಲಸ ಮಾಡಿದ್ದಾರೆ. ಬಹಳ ದಿನಗಳ ನಂತರ ಜಿಲ್ಲಾ ಕೇಂದ್ರ ಮಂಡ್ಯ ನಗರಕ್ಕೆ ಮೇ 8ರಂದು ಮಂಡ್ಯ ಜಿಲ್ಲಾ ಕುರುಬರ ಸಂಘಕ್ಕೆ ಸಾರ್ವಜನಿಕ ವಿದ್ಯಾರ್ಥಿ ನಿಲಯ ಶಂಕು ಸ್ಥಾಪನೆಗೆ ಆಗಮಿಸುತ್ತಿದ್ದಾರೆ. ಅವರನ್ನು ಪೂರ್ಣ ಕುಂಭ ಸ್ವಾಗತದೊಂದಿಗೆ ಬರಮಾಡಿಕೊಳ್ಳಬೇಕು ಎಂದು ತಿಳಿಸಿದರು.

ಮಂಡ್ಯ ಜಿಲ್ಲಾ ಕುರುಬರ ಸಂಘದ ವಿದ್ಯಾರ್ಥಿನಿಲಯದಲ್ಲಿ ಶೇಕಡ 90ರಷ್ಟು ಅನ್ಯ ಜಾತಿಯ ವಿದ್ಯಾರ್ಥಿಗಳು ವ್ಯಾಸಂಗ ಮಾಡಿ ಉನ್ನತ ಸ್ಥಾನ ಪಡೆದುಕೊಂಡಿದ್ದಾರೆ. ಈಗ ಶಂಕುಸ್ಥಾಪನೆಗೊಳ್ಳುತ್ತಿರುವ ಸಾರ್ವಜನಿಕ ವಿದ್ಯಾರ್ಥಿ ನಿಲಯಕ್ಕೆ ಹಿರಿಯರು ಹಾಗೂ ಕಾನೂನು ತಜ್ಞರ ಸಲಹೆ ಪಡೆದು ಸಿದ್ದರಾಮಯ್ಯ ಅವರ ಹೆಸರಿಡುವುದು ಸೂಕ್ತ ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಹಿಂದುಳಿದ ವರ್ಗದ ಮುಖಂಡರಾದ ಎಲ್.ಸಂದೇಶ್, ವಿಜಯಲಕ್ಷ್ಮಿ ರಘುನಂದನ್, ಅಮ್ಜದ್ ಪಾಷ, ಸಿ.ಡಿ.ವಿಜಯಕುಮಾರ್, ಬೀರಪ್ಪ, ಸಾತನೂರು ಕೃಷ್ಣ, ಡಿ ರಮೇಶ್, ವೆಂಕಟೇಶ್, ಸೋಮಶೇಖರ್, ಸತೀಶ್, ರಾಜು, ಮರಿ ಹೆಗ್ಗಡೆ, ಎನ್. ದೊಡ್ಡಯ್ಯ, ಸೇರಿದಂತೆ ಇತರರು ಭಾಗವಹಿಸಿದರು.

ನಮ್ಮ ಸುದ್ದಿಗಳು ಇಷ್ಟವಾದರೆ ನುಡಿ ಕರ್ನಾಟಕ.ಕಾಂ (ಮಂಡ್ಯ ಡಿಜಿಟಲ್ ಮೀಡಿಯಾ) ಗೆ ದೇಣಿಗೆ ನೀಡಿ ಪ್ರೋತ್ಸಾಹಿಸಿ

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ