ಕೇಂದ್ರ ಸರ್ಕಾರದ ಕಾರ್ಮಿಕ ವಿರೋಧಿ ನೀತಿಗಳಿಂದಾಗಿ ವಿವಿಧ ಕ್ಷೇತ್ರಗಳಲ್ಲಿ ದುಡಿಯುತ್ತಿರುವ ಕಾರ್ಮಿಕರು ತೀವ್ರ ತೊಂದರೆ ಅನುಭವವಿಸುತ್ತಿದ್ದು, ಕೂಡಲೇ ಎಲ್ಲಾ ಕಾರ್ಮಿಕ ನೀತಿಗಳನ್ನು ಹಿಂಪಡೆಯಬೇಕೆಂದು ಆಗ್ರಹಿಸಿ ಮಂಡ್ಯ ಜಿಲ್ಲಾಧಿಕಾರಿ ಕಚೇರಿ ಎದುರು ಬುಧವಾರ ಪ್ರತಿಭಟನೆ ನಡೆಸಿದರು.
ಸಿಐಟಿಯು, ಎಐಎಡಬ್ಲ್ಯೂಯು, ಕೆಪಿಆರ್’ಎಸ್ ಸಂಘಟನೆಗಳ ಕಾರ್ಯಕರ್ತರು ಮಂಡ್ಯದಲ್ಲಿ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನಾ ಧರಣಿ ನಡೆಸಿ, ಕೇಂದ್ರ ಸರ್ಕಾರದ ವಿರುದ್ಧ ಧಿಕ್ಕಾರದ ಘೋಷಣೆಗಳನ್ನು ಮೊಗಳಗಿಸಿದರು.
ಕೂಲಿಕಾರರ ರಕ್ಷಣೆಗೆ ಸಮಗ್ರ ಕಾನೂನು ರೂಪಿಸಬೇಕು. ಕಾರ್ಮಿಕರ ಹಿತ ರಕ್ಷಣೆಗಾಗಿ ಕೈಗಾರಿಕಾ ತಿದ್ದುಪಡಿ ಕಾನೂನು ವಾಪಸ್ ಪಡೆಯಬೇಕು, ಕೆಲಸದ ಅವಧಿಯನ್ನು 12 ಗಂಟೆಗೆ ಹೆಚ್ಚಳ ಮಾಡಿರುವ ಆದೇಶ ವಾಪಸ್ ಪಡೆಯಬೇಕು, ಕನಿಷ್ಠ ವೇತನ 31.500 ರೂ ಗೆ ಹೆಚ್ಚಿಸಬೇಕು,ಕಾರ್ಮಿಕ ವಿರೋಧಿ ಲೇಬರ್ ಕೋಡ್ ರದ್ದಾಗಬೇಕು, ಸಾರ್ವಜನಿಕ ಪಿಂಚಣಿ ವ್ಯವಸ್ಥೆ ಜಾರಿಗೊಳಿಸಿ ಕನಿಷ್ಠ 8,000 ಪಿಂಚಣಿ ನೀಡಬೇಕು,ಸಾರ್ವಜನಿಕ ಉದ್ದಿಮೆಗಳ ಖಾಸಗಿಕರಣ, ನಗದೀಕರಣ ನಿಲ್ಲಿಸಬೇಕು ಎಂದು ಒತ್ತಾಯಿಸಿದರು
ಉದ್ಯೋಗ ಖಾತ್ರಿ ಯೋಜನೆ ದುಡಿತದ ದಿನಗಳನ್ನು 200 ದಿನಕ್ಕೆ ಹೆಚ್ಚಿಸಿ, ಪ್ರತಿದಿನ 600 ರೂ ಕೂಲಿ ನೀಡಬೇಕು, ಆಶಾ ಅಂಗನವಾಡಿ,ಬಿಸಿಯೂಟ ನೌಕರರನ್ನು ಕನಿಷ್ಠ ವೇತನ ವ್ಯಾಪ್ತಿಗೆ ಒಳಪಡಿಸಬೇಕು, ವಲಸೆ ಕಾರ್ಮಿಕರಿಗೆ ಸೇವಾ ಭದ್ರತೆ ಜೊತೆಗೆ ಸಾರ್ವತ್ರಿಕ ಪಡಿತರ ವ್ಯವಸ್ಥೆ ಜಾರಿ ಮಾಡಬೇಕು, ಅಸಂಘಟಿತ ವಲಯದ ಕಾರ್ಮಿಕರಿಗೆ ಕಲ್ಯಾಣ ಕಾರ್ಯಕ್ರಮ ರೂಪಿಸಿ ಸಾಮಾಜಿಕ ಸುರಕ್ಷೆ ಖಾತ್ರಿ ಮಾಡಬೇಕು ಎಂದು ಆಗ್ರಹಿಸಿದರು.
ಕೃಷಿ ಉತ್ಪನ್ನಗಳಿಗೆ ಕನಿಷ್ಠ ಬೆಂಬಲ ಬೆಲೆ ಖಾತ್ರಿಗೊಳಿಸಿ.ಜಿ ಎಸ್ ಟಿ ತೆರಿಗೆ ವ್ಯಾಪ್ತಿಯಿಂದ ಹೊರಗಿಡಬೇಕು, ವಿದ್ಯುತ್ ಶಕ್ತಿ ಮಸೂದೆ ಹಿಂಪಡೆಯಬೇಕು, ಡಾ. ಸ್ವಾಮಿನಾಥನ್ ವರದಿಜಾರಿಗೊಳಿಸಬೇಕು, ಶೇ 8.5 ಸಕ್ಕರೆ ಇಳುವರಿ ಆಧಾರದಲ್ಲಿ ಪ್ರತಿ ಟನ್ ಕಬ್ಬಿಗೆ 5000 ರೂ ದರ ನಿಗದಿ ಮಾಡಬೇಕು ಪಡಿತರ ವಿತರಣಾ ವ್ಯವಸ್ಥೆಯಲ್ಲಿ ನಗದು ಪಾವತಿ ಬದಲಿಗೆ ಆಹಾರದ ನೀಡಬೇಕು ಎಂದರು.
ನಗರ ಮತ್ತು ಗ್ರಾಮೀಣ ಪ್ರದೇಶದಲ್ಲಿ ಸಾರ್ವಜನಿಕ ಸ್ಮಶಾನಕ್ಕೆ ಜಾಗ ಮೀಸಲಿರಿಸಬೇಕು, ಬಗರ್ ಹುಕುಂ ಸಾಗುವಳಿದಾರರಿಗೆ ಹಕ್ಕುಪತ್ರ ನೀಡಬೇಕು, ಕಾಡು ಪ್ರಾಣಿಗಳಿಂದ ಬೆಳೆಹಾನಿಯಾದ ರೈತರಿಗೆ ಸೂಕ್ತ ಪರಿಹಾರ ನೀಡಬೇಕು, ಸರ್ಕಾರಿ ಜಾಗದಲ್ಲಿ ವಾಸಿಸುತ್ತಿರುವ ಜನತೆಗೆ ಹಕ್ಕು ಪತ್ರ ನೀಡಬೇಕು, ನಿವೇಶನ ಮತ್ತು ವಸತಿ ರಹಿತರಿಗೆ ನಿವೇಶನ ಸೌಲಭ್ಯ ಕಲ್ಪಿಸಿ ವಸತಿ ನಿರ್ಮಿಸಿ ಕೊಡಬೇಕು, ಮಹಿಳೆಯರು ಮತ್ತು ಮಕ್ಕಳ ಮೇಲಿನ ದೌರ್ಜನ್ಯ ನಿಯಂತ್ರಿಸಬೇಕು, ಅಂಗವಿಕಲ, ವಿಧವಾ, ವೃದ್ಧಾಪ್ತ ವೇತನ ಹೆಚ್ಚಿಸಬೇಕು, ಅಗತ್ಯ ವಸ್ತುಗಳ ಬೆಲೆ ಇಳಿಕೆಗೆ ತುರ್ತು ಕ್ರಮ ವಹಿಸಬೇಕು ಎಂದು ಆಗ್ರಹಿಸಿದರು.
ಕೆಪಿಆರ್’ಎಸ್ ರಾಜ್ಯಾಧ್ಯಕ್ಷ ಎಂ.ಪುಟ್ಟಮಾದು, ಸಿಐಟಿಯು ಪ್ರಧಾನ ಕಾರ್ಯದರ್ಶಿ ಸಿ ಕುಮಾರಿ, ಮಹದೇವಮ್ಮ, ಚಂದ್ರಶೇಖರ್, ಕರ್ನಾಟಕ ಪ್ರಾಂತ ರೈತ ಸಂಘದ ಟಿ.ಎಲ್.ಕೃಷ್ಣೇಗೌಡ, ಎನ್ ಎಲ್ ಭರತರಾಜ್, ಪ್ರಧಾನ ಕಾರ್ಯದರ್ಶಿ ಬಿ.ಹನುಮೇಶ್ ಪ್ರತಿಭಟನೆ ನೇತೃತ್ವ ವಹಿಸಿದ್ದರು.




