ಸಮಾಜದಲ್ಲಿ ಪ್ರತಿಯೊಬ್ಬ ವ್ಯಕ್ತಿಗೂ ಜೀವಿಸುವ ಹಕ್ಕನ್ನು ಸಂವಿಧಾನ ನೀಡಿದ್ದು,ಕಾನೂನು ಸೇವೆಗಳ ಪ್ರಾಧಿಕಾರ ನೀಡುವ ಸೌಲಭ್ಯಗಳನ್ನು ಸದುಪಯೋಗಪಡಿಸಿಕೊಳ್ಳಿ ಎಂದು ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಎ.ಎಂ.ನಳಿನಿಕುಮಾರಿ ಸಲಹೆ ನೀಡಿದರು.
ಮಂಡ್ಯ ನಗರದ ಡಾ.ಜವರೇಗೌಡ ಸಭಾಂಗಣದಲ್ಲಿ ನಡೆದ ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ ಬೆಂಗಳೂರು, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಮಂಡ್ಯ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ಜಿಲ್ಲಾ ಪ್ರತಿಬಂದಕ ಮತ್ತು ನಿಯಂತ್ರಣ ಘಟಕ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮದ ಸಂಯುಕ್ತಾಶ್ರಯದಲ್ಲಿ ಕಾನೂನು ಅರಿವು ಕಾರ್ಯಗಾರ,ದಮನಿತ ಮಹಿಳೆಯರಿಗೆ ಮತ್ತು ಲಿಂಗತ್ವ ಅಲ್ಪಸಂಖ್ಯಾತರಿಗೆ ಕಾನೂನು ಅರಿವು ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ಪ್ರತಿಯೊಬ್ಬ ವ್ಯಕ್ತಿಗೂ ಸಹ ವ್ಯಕ್ತಿ ಸ್ವಾತಂತ್ರ್ಯ ಇರುತ್ತದೆ. ಎಲ್ಲಾ ಸಂದರ್ಭಗಳಲ್ಲೂ ಸಹ ಜೀವಿಸುವ ಹಕ್ಕು ಮಾನವನಿಗೆ ಶಾಶ್ವತವಾದ ಹಕ್ಕಾಗಿದೆ ಎಂದರು.
ಕಾನೂನು ಅರಿವು ಮೂಡಿಸುವುದು, ಹಕ್ಕುಗಳ ಬಗ್ಗೆ ತಿಳಿಸುವುದು ಕಾನೂನು ಸೇವಾ ಪ್ರಾಧಿಕಾರದ ಕೆಲಸ. ಕಾನೂನು ಸೇವಾ ಸಮಿತಿಗಳು, ಪ್ರಾಧಿಕಾರಗಳು ಹಾಗೂ ಕಾನೂನು ಸೇವಾ ಸಮಿತಿಗಳು ಪ್ರತಿ ತಾಲೂಕುಗಳಲ್ಲಿಯೂ ಇದ್ದು,ಸಾರ್ವಜನಿಕರು ತಮ್ಮ ಹಕ್ಕುಗಳಿಗೆ ತೊಂದರೆಯಾದರೆ ಕಾನೂನು ಸೇವಾ ಪ್ರಾಧಿಕಾರದ ಸಹಾಯ ಪಡೆಯಬಹುದು ಎಂದರು.
ರಾಜ್ಯದಲ್ಲಿ ಹಾಗೂ ಸುಪ್ರೀಂ ಕೋರ್ಟ್ ನಲ್ಲಿ ಕಾನೂನು ಸೇವಾ ಸಮಿತಿಗಳಿವೆ. ಅದರ ಟೋಲ್ ಫ್ರೀ ನಂಬರ್ ಗೆ ಕರೆ ಮಾಡಿ ಸಹಾಯದ ನೆರವನ್ನು ಕೇಳಬಹುದು. ಕಾನೂನಿಗೆ ಸಂಬಂಧಿಸಿದ ಸಮಸ್ಯೆಗಳಿದ್ದಲ್ಲಿ ಅದನ್ನು ಸಂಪರ್ಕಿಸಿ ಸಮಸ್ಯೆಗಳನ್ನು ಬಗೆಹರಿಸಿಕೊಳ್ಳಬಹುದು ಎಂದರು.
ಕಾರ್ಯಕ್ರಮದಲ್ಲಿ ಎಸ್ ರಾಜಮೂರ್ತಿ, ನಂದೀಶ್, ತಾಲ್ಲೂಕು ಆರೋಗ್ಯಾಧಿಕಾರಿ ಬಾ.ಜವರೇಗೌಡ, .ಎಂ ಎನ್.ಆಶಾಲತಾ, ಮಹದೇವಮ್ಮ, ಪದಾಧಿಕಾರಿಗಳಾದ ಚೇತನ್ ಕುಮಾರ್ ಹಾಗೂ ಇನ್ನಿತರರು ಉಪಸ್ಥಿತರಿದ್ದರು.