ಕಾವೇರಿ ವಿಚಾರದಲ್ಲಿ ರಾಜ್ಯಕ್ಕಾಗಿರುವ ಅನ್ಯಾಯವನ್ನು ಖಂಡಿಸಿ ನಾಗಮಂಗಲ ಬ್ಲಾಕ್ ಕಾಂಗ್ರೆಸ್ ವತಿಯಿಂದ ಸಾಂಕೇತಿಕ ಪ್ರತಿಭಟನೆ ನಡೆಸಿ,ರಾಷ್ಟ್ರಪತಿಗಳಿಗೆ ನಾಗಮಂಗಲ ತಾಲೂಕು ದಂಡಾಧಿಕಾರಿ ಮೂಲಕ ಮನವಿ ಪತ್ರ ರವಾನೆ ಮಾಡಿದರು.
ಈ ಸಂದರ್ಭದಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎನ್.ಜೆ. ರಾಜೇಶ್ ಮಾತನಾಡಿ, ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಸುಪ್ರೀಂ ಕೋರ್ಟ್ ನೀಡಿರುವ ಆದೇಶದಿಂದ ಕಾವೇರಿ ಕೊಳ್ಳದ ರೈತರಿಗೆ ಅನ್ಯಾಯವಾಗುತ್ತಿದೆ. ಕಾವೇರಿ ನೀರಿನ ವಿಚಾರದಲ್ಲಿ ಕೇಂದ್ರ ಸರ್ಕಾರ ಮೌನ ವಹಿಸಿದ್ದು, ರಾಜ್ಯದ ಜನತೆಗೆ ಅನ್ಯಾಯ ಮಾಡಿದೆ. ಈ ಸಂಬಂಧ ಗೌರವಾನ್ವಿತ ರಾಷ್ಟ್ರಪತಿಗಳು ಮಧ್ಯೆ ಪ್ರವೇಶ ಮಾಡಿ ಕರ್ನಾಟಕ ಸರ್ಕಾರಕ್ಕೆ ನ್ಯಾಯ ಕೊಡಿಸಬೇಕೆಂದು ಆಗ್ರಹಿಸಿದರು.

ಕಾಂಗ್ರೆಸ್ ನ ರಾಜ್ಯ ಪ್ರಧಾನ ಕಾರ್ಯದರ್ಶಿ ಗೀತಾ ದಾಸೇಗೌಡ ಮಾತನಾಡಿ, ಬರದ ನಡುವೆ ರೈತರು ಅತಂತ್ರದ ಸ್ಥಿತಿಯಲ್ಲಿದ್ದಾರೆ. ರಾಷ್ಟ್ರಪತಿಗಳು ಮಧ್ಯ ಪ್ರವೇಶ ಮಾಡಿ ರೈತರಿಗೆ ನ್ಯಾಯ ಒದಗಿಸಬೇಕೆಂದರು.
ಮಾಜಿ ತಾಲೂಕು ಪಂಚಾಯಿತಿ ಅಧ್ಯಕ್ಷ ಕೃಷ್ಣೇಗೌಡ ಮಾತನಾಡಿ, ಕಾವೇರಿ ವಿಚಾರದಲ್ಲಿ ಪದೇ ಪದೇ ರಾಜ್ಯಕ್ಕೆ ಅನ್ಯಾಯವಾಗುತ್ತಿದ್ದು, ಕೇಂದ್ರ ಸರ್ಕಾರವೇ ಇದಕ್ಕೆ ನೇರವಾಗಿ ಹೊಣೆಯಾಗುತ್ತದೆ ಎಂದರು.
ಪ್ರತಿಭಟನೆಯಲ್ಲಿ ಟಿ.ಎ.ಪಿ.ಸಿ.ಎಂ.ಎಸ್.ಅಧ್ಯಕ್ಷ ಸಾಮಕಹಳ್ಳಿ ಚೇತನ್, ಉಪಾಧ್ಯಕ್ಷ ರಾಚಯ್ಯ, ಗೀತಾರಾಜು,ಕಾಂಗ್ರೆಸ್ ಮುಖಂಡರಾದ ಎಸ್. ಬಿ. ರಮೇಶ್,ರಾಮಕೃಷ್ಣ ಸೇರಿದಂತೆ ನೂರಾರು ಕಾಂಗ್ರೆಸ್ ಕಾರ್ಯಕರ್ತರು ಭಾಗವಹಿಸಿದ್ದರು.




