ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷದ ಕಾರ್ಯಾಧ್ಯಕ್ಷ ಲಿಂಗೇಗೌಡ ಎಸ್.ಹೆಚ್ ಅವರು ಅಪಘಾತದಿಂದ ಸಾವನ್ನಪ್ಪಿದ್ದು, ಅವರಿಗೆ ಶ್ರದ್ಧಾಂಜಲಿ ಹಾಗೂ ನುಡಿನಮನ ಕಾರ್ಯಕ್ರಮವನ್ನು ಡಿ.29ರಂದು ಬೆಳಿಗ್ಗೆ 10.30ಕ್ಕೆ ನಗರದ ರೈತ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಪಕ್ಷದ ರಾಜ್ಯ ಸಂಘಟನಾ ಕಾರ್ಯದರ್ಶಿ ಹಾಗೂ ಮಂಡ್ಯ ಜಿಲ್ಲಾ ಉಸ್ತುವಾರಿ ರಮೇಶ್‌ಗೌಡ ತಿಳಿಸಿದರು.

ಮಂಡ್ಯದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಲಿಂಗೇಗೌಡ ಅವರು ಮಹಿಳೆಯರ ಮೇಲೆ ಅತ್ಯಾಚಾರ ಪ್ರಕರಣಗಳನ್ನು ತ್ವರಿತಗತಿಯಲ್ಲಿ ವಿಚಾರಣೆ ಮಾಡಿ, ತಪ್ಪಿತಸ್ಥರಿಗೆ ಉಗ್ರ ಶಿಕ್ಷೆ ನೀಡುವಂತೆ ಒತ್ತಾಯಿಸಿ ಪ್ರಧಾನ ಮಂತ್ರಿ ಹಾಗೂ ರಾಷ್ಟ್ರಪತಿಗಳಿಗೆ ಮನವಿ ಸಲ್ಲಿಸುವ ಸಲುವಾಗಿ ನಡೆಯುತ್ತಿದ್ದ ಪಾದಯಾತ್ರೆಗೆ ನೈತಿಕ ಬೆಂಬಲ ನೀಡುವ ಸಲುವಾಗಿ ಅಪಘಾತಕ್ಕೀಡಾಗಿ ಸಾವನ್ನಪ್ಪಿದ್ದರು ಎಂದರು.
ಅವರಿಗೆ ಶ್ರದ್ಧಾಂಜಲಿ ಸಲ್ಲಿಸಲು ಸದರಿ ಕಾರ್ಯಕ್ರಮ ಆಯೋಜಿಸಿದ್ದು, ಪಕ್ಷದ ರಾಜ್ಯಾಧ್ಯಕ್ಷ ರವಿ ಕೃಷ್ಣಾರೆಡ್ಡಿ, ಪಕ್ಷದ ಕಾರ್ಯಕಾರಿ ಸಮಿತಿಯ ಪದಾಧಿಕಾರಿಗಳೂ, ರಾಜ್ಯದ ಎಲ್ಲಾ ಜಿಲ್ಲಾ ಹಾಗೂ ತಾಲೂಕು ಮಟ್ಟದ ಪದಾಧಿಕಾರಿಗಳು ಮತ್ತು ಕಾರ್ಯಕರ್ತರು ಭಾಗವಹಿಸಲಿದ್ದು, ಲಿಂಗೇಗೌಡ ಅವರ ಕುಟುಂಬವೂ ಪಾಲ್ಗೊಳ್ಳಲಿದೆ ಎಂದು ಹೇಳಿದರು.
ಈ ಕಾರ್ಯಕ್ರಮಕ್ಕೆ ಜಿಲ್ಲೆಯ ಹಾಗೂ ರಾಜ್ಯದ ಜನರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಲಿಂಗೇಗೌಡ ಎಸ್.ಹೆಚ್.ಅವರಿಗೆ ಶ್ರದ್ಧಾಂಜಲಿ ಸಲ್ಲಿಸಬೇಕು ಎಂದು ಮನವಿ ಮಾಡಿದರು.
ಗೋಷ್ಠಿಯಲ್ಲಿ ಜಿಲ್ಲಾಧ್ಯಕ್ಷ ನಾಗರಾಜ್ ಡಿ.ಜಿ, ಉಪಾಧ್ಯಕ್ಷ ಮಲ್ಲೇಶ್, ಜಿಲ್ಲಾ ಕಾರ್ಯದರ್ಶಿ ಶಶಿಧರ್ ವೈ.ಕೆ, ತಾ.ಉಪಾಧ್ಯಕ್ಷ ಜಗದೀಶ ಇದ್ದರು.




