87 ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಸ್ಮರಣ ಸಂಚಿಕೆಯನ್ನು ಆಗಸ್ಟ್ 24 ರಂದು ಮಧ್ಯಾಹ್ನ 3 ಗಂಟೆಗೆ ಅಂಬೇಡ್ಕರ್ ಭವನದಲ್ಲಿ ವಿಜೃಂಭಣೆಯಿಂದ ಬಿಡುಗಡೆ ಮಾಡಲು ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ಡಾ.ಕುಮಾರ ಅವರು ತಿಳಿಸಿದರು.
ಮಂಡ್ಯ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಗುರುವಾರ ನಡೆದ ಸಭೆಯಲ್ಲಿ ಮಾತನಾಡಿದ ಅವರು 87 ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಯಶಸ್ವಿಯಾಗಿ ಸಂಘಟಿಸಲಾಗಿದ್ದು, ಸ್ಮರಣ ಸಂಚಿಕೆ ಬೆಲ್ಲದಾರತಿ ಬಿಡುಗಡೆ ಕಾರ್ಯಕ್ರಮವನ್ನು ಅರ್ಥಪೂರ್ಣವಾಗಿ ಕೈಗೊಳ್ಳಲು ಎಲ್ಲರೂ ಕೈ ಜೋಡಿಸಿ ಎಂದರು.
ಬೆಲ್ಲದಾರತಿ ಸ್ಮರಣ ಸಂಚಿಕೆ ಬಿಡುಗಡೆ ಮಾಡುವ ವೇದಿಕೆಯಲ್ಲಿ ಸ್ಮರಣ ಸಂಚಿಕೆಯ ವಿನ್ಯಾಸವನ್ನು ಬ್ಯಾಕ್ ಡ್ರಾಪ್ ನಲ್ಲಿ ಹಾಗೂ ಮುಖ್ಯ ಸ್ಥಳಗಳಲ್ಲಿ ಪ್ರಚಾರ ಪಡಿಸಿ ಎಂದರು.
ಸ್ಮರಣಾ ಸಂಚಿಕೆ ಕಾರ್ಯಕ್ರಮದಲ್ಲಿ ಕನ್ನಡ , ರೈತ ಹಾಗೂ ವಿವಿಧ ಸಂಘಟನೆಗಳು ಸೇರಿದಂತೆ ಶಾಲೆಗಳ ಕನ್ನಡ ಶಿಕ್ಷಕರು, ಪದವಿ ಹಾಗೂ ಸ್ನಾತಕೋತ್ತರ ಪದವಿಯ ಕನ್ನಡ ವಿದ್ಯಾರ್ಥಿಗಳು ಭಾಗವಹಿಸುವಂತೆ ಕೋರಿ ಆಹ್ವಾನಿಸಲಾಗಿದೆ. ಇದು ಜಿಲ್ಲೆಯ ಹಿರಿಮೆಯ ಕಾರ್ಯಕ್ರಮವಾಗಿದ್ದು,ಎಲ್ಲರೂ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಎಂದರು.
ಸ್ವಾಗತ ಸಮಿತಿಯ ಅಧ್ಯಕ್ಷರು ಸೇರಿದಂತೆ ಎಲ್ಲಾ ಸದಸ್ಯರು, ಸಮ್ಮೇಳನದ ಅಧ್ಯಕ್ಷರು, ತಾಲ್ಲೂಕು ಹಾಗೂ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಎಲ್ಲಾ ಸದಸ್ಯರು, ವಿವಿಧ ಸಮಿತಿಗಳ ಸದಸ್ಯರನ್ನು ಕಾರ್ಯಕ್ತಮಕ್ಕೆ ಆಹ್ವಾನಿಸಿ ಎಂದರು.
ಬೆಲ್ಲದಾರತಿ ಸ್ಮರಣ ಸಂಚಿಕೆಯ ಬಗ್ಗೆ ಸಂಕ್ಷಿಪ್ತವಾಗಿ ಮಾತನಾಡಲು ಸ್ಮರಣ ಸಂಚಿಕೆ ಸಮಿತಿ ಅವರು ಸಭೆ ನಡೆಸಿ ಉತ್ತಮ ಸಾಹಿತಿಯನ್ನು ಆಯ್ಕೆ ಮಾಡುವಂತೆ ತಿಳಿಸಿದರು.
ಅಪರ ಜಿಲ್ಲಾಧಿಕಾರಿ ಬಿ.ಸಿ ಶಿವಾನಂದಮೂರ್ತಿ ಅವರು ಮಾತನಾಡಿ ಕಾರ್ಯಕ್ರಮದಲ್ಲಿ ಕನ್ನಡ ನಾಡು ನುಡಿಯನ್ನು ಬಿಂಬಿಸುವ ಕಾರ್ಯಕ್ರಮ ಇದಾಗಿದ್ದು, ಕಾರ್ಯಕ್ರಮದಲ್ಲಿ ಯಾವುದೇ ಲೋಪ ಉಂಟಾಗದಂತೆ ಸಂಘಟಿಸಿ ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.
ಸಭೆಯಲ್ಲಿ ಸಾಹಿತಿಗಳಾದ ತೈಲೂರು ವೆಂಕಟಕೃಷ್ಣ, ಡಾ.ಚಿಕ್ಕಮರಳಿ ಬೋರೇಗೌಡ, ಧರಣೇಂದ್ರಯ್ಯ, ಮೃತ್ಯುಂಜಯ, ಪ್ರದೀಪ್ ಕುಮಾರ್ ಹೆಬ್ರಿ, ಕನ್ನಡ ಸಾಹಿತ್ಯ ಪರಿಷತ್ತಿನ ವಿ.ಹರ್ಷ, ಗ್ರಂಥಾಲಯ ಇಲಾಖೆ ಉಪನಿರ್ದೇಶಕ ಕೃಷ್ಣಮೂರ್ತಿ ಸೇರಿದಂತೆ ಇನ್ನಿತರೆ ಗಣ್ಯರು ಉಪಸ್ಥಿತರಿದ್ದರು.




