ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಕೆ.ಆರ್.ಪೇಟೆ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗೆ ಬಹುಮತ ಕೊಡಿಸುವ ನಿಟ್ಟಿನಲ್ಲಿ ಕಾರ್ಯಕರ್ತರು ಕೆಲಸ ಮಾಡಬೇಕು ಎಂದು ಕಾಂಗ್ರೆಸ್ ಜಿಲ್ಲಾಧ್ಯಕ್ಷ ಸಿ.ಡಿ.ಗಂಗಾಧರ್ ಹೇಳಿದರು.
ಕೆ.ಆರ್.ಪೇಟೆ ಪಟ್ಟಣದ ಪ್ರವಾಸಿ ಮಂದಿರದಲ್ಲಿ ಕಾಂಗ್ರೆಸ್ ಸರ್ಕಾರದ ಐದು ಗ್ಯಾರಂಟಿ ಯೋಜನೆಗಳನ್ನು ಸಮರ್ಪಕವಾಗಿ ಅನುಷ್ಠಾನಗೊಳಿಸುವ ಉದ್ದೇಶದಿಂದ ಅನುಷ್ಠಾನ ಸಮಿತಿ ರಚನೆಗಾಗಿ ನಡೆದ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದರು.
ಕೆ.ಆರ್.ಪೇಟೆಯಲ್ಲಿ ಕಾಂಗ್ರೆಸ್ ಶಾಸಕರಿಲ್ಲ. ಹೀಗಾಗಿ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದಿಂದ ಸ್ಪರ್ಧೆ ಮಾಡುವ ಅಭ್ಯರ್ಥಿಗೆ ಲೀಡ್ ಕೊಡಿಸುವ ಕೆಲಸವಾಗಬೇಕಿದೆ. ಜಿಲ್ಲಾಧ್ಯಕ್ಷನಾಗಿ ನಾನು ವಾರಕ್ಕೊಮ್ಮೆ ಲಭ್ಯವಿರುತ್ತೇನೆ. ಪಕ್ಷ ಸಂಘಟನೆಗಾಗಿ ಯಾವುದೇ ಗ್ರಾಮಕ್ಕೆ ಬೇಕಾದರೂ ಬರಲು ಸಿದ್ದನಿದ್ದೇನೆ. ಹೀಗಾಗಿ ಕಾರ್ಯಕರ್ತರು ಎದೆಗುಂದದೆ ಪಕ್ಷದ ಅಭ್ಯರ್ಥಿ ಗೆಲುವಿಗೆ ಶ್ರಮಿಸಬೇಕು ಎಂದರು.
ಕಾಂಗ್ರೆಸ್ ಸರ್ಕಾರ ರಾಜ್ಯದ ಜನತೆಗೆ ಐದು ಗ್ಯಾರಂಟಿ ಯೋಜನೆಗಳನ್ನು ಜಾರಿಗೊಳಿಸಿದೆ. ಈ ಯೋಜನೆಗಳು ಜನರಿಗೆ ಪ್ರಾಮಾಣಿಕವಾಗಿ ತಲುಪಿದೆಯೇ, ಇಲ್ಲ ಏನಾದರೂ ಲೋಪದೋಷವಾಗಿದೆಯೇ ಎಂಬುದನ್ನು ಮನೆ ಮನೆಗೆ ತೆರಳಿ ಪರಿಶೀಲಿಸುವ ಉದ್ದೇಶದಿಂದ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ನೇತೃತ್ವದಲ್ಲಿ ಗ್ಯಾರಂಟಿ ಯೋಜನೆಯ ಅನುಷ್ಠಾನ ಸಮಿತಿ ರಚಿಸಲು ತೀರ್ಮಾನ ಮಾಡಲಾಗಿದ್ದು, ಪ್ರತಿ ವಿಧಾನಸಭಾ ಕ್ಷೇತ್ರದಲ್ಲೂ ಹೋಬಳಿವಾರು ನಿಷ್ಠಾವಂತ ಕಾರ್ಯಕರ್ತರನ್ನು ಸಮಿತಿಗೆ ಗುರುತಿಸಿ ಪಟ್ಟಿ ಸಿದ್ದಪಡಿಸಿಕೊಡಬೇಕು ಎಂದು ತಿಳಿಸಿದರು.
ಮಾಜಿ ಶಾಸಕ ಕೆ.ಬಿ.ಚಂದ್ರಶೇಖರ್ ಮಾತನಾಡಿ, ಕೆ.ಆರ್.ಪೇಟೆಯಲ್ಲಿ ಕಾಂಗ್ರೆಸ್ ಶಾಸಕರಿಲ್ಲದ ಕಾರಣ ಕ್ಷೇತ್ರ ತಬ್ಬಲಿಯಾಗಿದೆ. ಹೀಗಾಗಿ ಇಲ್ಲಿಂದ ಅನುಷ್ಠಾನ ಸಮಿತಿಗೆ ರಾಜ್ಯ ಮಟ್ಟದಲ್ಲಿ ಅವಕಾಶ ಕಲ್ಪಿಸಬೇಕು ಎಂದರು.
ಸಭೆಯಲ್ಲಿ ಮಾಜಿ ಶಾಸಕ ಬಿ.ಪ್ರಕಾಶ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ವಿಶ್ವನಾಥ್, ನಾಗೇಂದ್ರ,
ಕಾಂಗ್ರೆಸ್ ಮುಖಂಡರಾದ ಬಿ.ಎಲ್.ದೇವರಾಜು, ಕಿಕ್ಕೇರಿ ಸುರೇಶ್, ಬಸ್ ಕೃಷ್ಣೇಗೌಡ, ಕೆ.ಆರ್.ಪೇಟೆ ಉಸ್ತುವಾರಿಗಳಾದ ಸಿ.ಆರ್.ರಮೇಶ್, ಕೋ.ಪು.ಗುಣಶೇಖರ್, ಜಿಲ್ಲಾ ಕಾಂಗ್ರೆಸ್ ಮಾಧ್ಯಮ ಸಂಯೋಜಕ ಎನ್.ಕೃಷ್ಣೇಗೌಡ, ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಅಂತನಹಳ್ಳಿ ಬಸವರಾಜು ಇತರರಿದ್ದರು.




