ಬೆಂಗಳೂರು ಸೇರಿದಂತೆ ರಾಜ್ಯದ 7 ಜಿಲ್ಲೆಗಳಲ್ಲಿ ಗುರುವಾರ ಬೆಳಗ್ಗೆ ಲೋಕಾಯುಕ್ತ ಪೊಲೀಸರು ಭ್ರಷ್ಟ ಅಧಿಕಾರಿಗಳ ನಿವಾಸ, ಕಚೇರಿಗಳ ಮೇಲೆ ದಾಳಿ ನಡೆಸಿ ಶೋಧ ನಡೆಸಿದ್ದಾರೆ.ಬೆಂಗಳೂರು, ಕೋಲಾರ, ಕಲಬುರಗಿ, ದಾವಣಗೆರೆ, ತುಮಕೂರು, ಬಾಗಲಕೋಟೆ ಹಾಗೂ ವಿಜಯಪುರ ಜಿಲ್ಲೆಗಳಲ್ಲಿ ಲೋಕಾಯುಕ್ತ ದಾಳಿ ನಡೆದಿದೆ.
8 ಮಂದಿ ಭ್ರಷ್ಟ ಅಧಿಕಾರಿಗಳ ನಿವಾಸ, ಕಚೇರಿಗಳಲ್ಲಿ ದಾಳಿ ನಡೆಸಿ ಪರಿಶೀಲನೆ ನಡೆಸಲಾಗುತ್ತಿದೆ. ಬೆಂಗಳೂರಿನ ಡಿಪಿಎಆರ್ ಚೀಫ್ ಇಂಜಿನಿಯರ್ ಟಿ.ಡಿ.ನಂಜುಡಪ್ಪ, ಬಿಬಿಎಂಪಿಯ ಎಕ್ಸಿಕ್ಯೂಟಿವ್ ಇಂಜಿನಿಯರ್ ಹೆಚ್.ಬಿ.ಕಲ್ಲೇಶಪ್ಪ ಮನೆಗಳ ಮೇಲೆ ದಾಳಿ ನಡೆಸಲಾಗಿದೆ.
ಕೋಲಾರದಲ್ಲಿರುವ ಬೆಸ್ಕಾಂ ಎಇಇ ಜಿ.ನಾಗರಾಜ್, ಕಲಬುರಗಿ ಲೋಕೋಪಯೋಗಿ ಚೀಫ್ ಇಂಜಿನಿಯರ್ ಜಗನ್ನಾಥ್, ದಾವಣಗೆರೆಯಲ್ಲಿ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ವಿಭಾಗದ ಜಿಲ್ಲಾ ಸಂಖ್ಯಾಶಾಸ್ತ್ರೀಯ ಅಧಿಕಾರಿ ಜಿ.ಎಸ್. ನಾಗರಾಜು, ತುಮಕೂರಿನಲ್ಲಿ ತಾವರೆಕೆರೆ ಪ್ರಾಥಮಿಕ ಆರೋಗ್ಯ ಕೇಂದ್ರದ ಮುಖ್ಯ ವೈದ್ಯಾಧಿಕಾರಿ ಡಾ. ಜಗದೀಶ್ ಅವರ ಮನೆಗಳ ಮೇಲೆ ಲೋಕಾಯುಕ್ತ ದಾಳಿ ನಡೆದಿದೆ.
ಕೋಲಾರದಲ್ಲಿ ಬೆಸ್ಕಾಂ ಎಇಇ ಜಿ.ನಾಗರಾಜ್ ಮನೆ ಹಾಗೂ ಅವರಿಗೆ ಸೇರಿದ ಮೂರು ಕಡೆ ದಾಳಿ ನಡೆದಿದೆ. ನಾಗರಾಜ್ ಪ್ರಸ್ತುತ ಬೆಂಗಳೂರು ರಾಜಾಜಿನಗರ ಎಇಇ ಬೆಸ್ಕಾಂ ಆಗಿ ಕಾರ್ಯನಿರ್ವಹಿಸುತ್ತಿದ್ದಾರೆ. ನಾಗರಾಜ್ ಅವರ ನಿವಾಸ, ಕೆ.ಆರ್.ಪುರಂ ಬಳಿಯ ಪ್ರಿಯದರ್ಶಿನಿ ಬಡಾವಣೆಯಲ್ಲಿನ ಮನೆ, ರಾಜಾಜಿನಗರ ಬೆಸ್ಕಾಂ ಕಚೇರಿ, ಅವರ ಸಂಬಂಧಿಕರೊಬ್ಬರ ಮನೆ ಮೇಲೆ ದಾಳಿ ನಡೆದಿದೆ.
ಬಾಗಲಕೋಟೆಯಲ್ಲಿ ಪಂಚಾಯತ್ ರಾಜ್ ಇಲಾಖೆ ಅಕೌಂಟೆಂಟ್ ಮಲ್ಲೇಶ್ ಅವರ ಬಾಗಲಕೋಟೆ ಕಚೇರಿ, ಬೀಳಗಿ ತಾಲೂಕಿನ ತಳ್ಳಿಕೇರಿ ಮನೆಯಲ್ಲಿ ಲೋಕಾಯುಕ್ತ ಅಧಿಕಾರಿಗಳ ಪರಿಶೀಲನೆ ನಡೆಯುತ್ತಿದೆ. ಆದಾಯಕ್ಕಿಂತ ಅಧಿಕ ಆಸ್ತಿ ಗಳಿಕೆ ಆರೋಪ ಹಿನ್ನೆಲೆ ಲೋಕಾಯುಕ್ತ ಡಿವೈಎಸ್ಪಿ ಸಿದ್ದೇಶ್ ನೇತೃತ್ವದಲ್ಲಿ ದಾಳಿ ನಡೆಸಲಾಗಿದ್ದು, ದಾಖಲೆಗಳ ಪರಿಶೀಲನೆ ನಡೆಯುತ್ತಿದೆ




