ನಿವೃತ್ತ ಗ್ರಾಮ ಲೆಕ್ಕಾಧಿಕಾರಿ ಡಿ.ಮಹಾಲಿಂಗೇಗೌಡ(ಮುದ್ದೇಗೌಡ) (೭೩) ಮಂಗಳವಾರ ಮುಂಜಾನೆ ನಿಧನರಾದರು.
ಮಂಡ್ಯ ತಾಲ್ಲೂಕಿನ ಚಿಕ್ಕಮಂಡ್ಯ ಗ್ರಾಮದ ದಿ.ದೊಳ್ಳೇಗೌಡರ ಪುತ್ರ ಡಿ.ಮಹಾಲಿಂಗೇಗೌಡ ಅವರು ಕೆಲದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದು, ಇಂದು ಮುಂಜಾನೆ ವಿಧಿವಶರಾದರು.
ಗ್ರಾಮ ಲೆಕ್ಕಾಧಿಕಾರಿಗಳಾಗಿ ಹನಗನಹಳ್ಳಿ, ಹೊಡಾಘಟ್ಟ, ಮುತ್ತೇಗೆರೆ, ಚೀರನಹಳ್ಳಿ ವ್ಯಾಪ್ತಿಯಲ್ಲಿ ಸುಮಾರು 35 ವರ್ಷಗಳ ಕಾಲ ಕಾರ್ಯನಿರ್ವಹಿಸಿ, ಜನಮನ್ನಣೆ ಗಳಿಸಿದ್ದರು. ಜೊತೆಗೆ ಚಿಕ್ಕಮಂಡ್ಯ ಗ್ರಾಮದಲ್ಲಿ ಸುಮಾರು 20 ವರ್ಷಗಳ ಕಾಲ ಶ್ವೇತ ಮೆಡಿಕಲ್ಸ್ ಔಷಧಿ ಅಂಗಡಿಯನ್ನು ಯಶಸ್ವಿಯಾಗಿ ನಡೆಸುವ ಮೂಲಕ ಗ್ರಾಮೀಣ ಪ್ರದೇಶದಲ್ಲಿ ಜನತೆಗೆ ಉತ್ತಮ ಸೇವೆ ಒದಗಿಸುವ ಮೂಲಕ ಪ್ರಶಂಸೆಗೆ ಪಾತ್ರರಾಗಿದ್ದರು.
ಮೃತರು ಓರ್ವ ಪುತ್ರ, ಇಬ್ಬರು ಪುತ್ರಿಯರು, ಇಬ್ಬರು ಸಹೋದರಿಯರು ಸೇರಿದಂತೆ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ. ಮೃತರ ಪುತ್ರಿ ಶ್ವೇತ ಲಂಡನ್ನಲ್ಲಿ ಉದ್ಯೋಗದಲ್ಲಿದ್ದು, ಅವರು ಬುಧವಾರ ಆಗಮಿಸುವ ಹಿನ್ನೆಲೆಯಲ್ಲಿ ಅಂತ್ಯಕ್ರಿಯೆಯನ್ನು ಬುಧವಾರ ಮಧ್ಯಾಹ್ನ 12 ಗಂಟೆಗೆ ಸ್ವಗ್ರಾಮದಲ್ಲಿ ನಡೆಸಲಾಗುವುದು ಎಂದು ಕುಟುಂಬ ಮೂಲಗಳು ತಿಳಿಸಿವೆ.




