ಕನ್ನಡ ಸಾಹಿತ್ಯ ಪರಿಷತ್ತಿನ 2023-24ನೇ ಸಾಲಿನ ವಾರ್ಷಿಕ ಸರ್ವ ಸದಸ್ಯರ ಸಭೆ ರದ್ದುಪಡಿಸಿದ ಆದೇಶ ಹಾಗೂ ಪದಾಧಿಕಾರಿಗಳ ಕಾರ್ಯವೈಖರಿ, ಅನುದಾನ ಮತ್ತು ಖರ್ಚು-ವೆಚ್ಚಗಳ ಕುರಿತ ವಿಚಾರಣೆ ನಡೆಸುವ ಸಹಕಾರ ಸಂಘಗಳ ಉಪ ನಿಬಂಧಕರ ಕ್ರಮವನ್ನು ವಿರೋಧಿಸಿ ಕಸಾಪ ಅಧ್ಯಕ್ಷ ಮಹೇಶ್ ಜೋಶಿ ಕರ್ನಾಟಕ ಹೈಕೋರ್ಟ್ ಮೆಟ್ಟಿಲೇರಿದ್ದಾರೆ.
ಸಹಕಾರ ಸಂಘಗಳ ಉಪ ನಿಬಂಧಕರು ಹಾಗೂ ಸಂಘಗಳ ನೋಂದಣಾಧಿಕಾರಿ 2ನೇ ವಲಯ ಬೆಂಗಳೂರು ನಗರ ಜಿಲ್ಲಾ ಇವರು 2025ರ ಜೂನ್ 26 ಹಾಗೂ 30ರಂದು ಹೊರಡಿಸಿರುವ ಆದೇಶಗಳನ್ನು ರದ್ದುಪಡಿಸುವಂತೆ ಕೋರಿ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಡಾ. ಮಹೇಶ್ ಜೋಷಿ ಸಲ್ಲಿಸಿರುವ ಅರ್ಜಿ ವಿಚಾರಣೆಯನ್ನು ನ್ಯಾಯಮೂರ್ತಿ ಎಸ್ ಸುನೀಲ್ ದತ್ ಯಾದವ್ ಅವರ ಏಕಸದಸ್ಯ ಪೀಠ ನಡೆಸಿತು.
ಅರ್ಜಿದಾರರ ಪರ ಹಿರಿಯ ವಕೀಲ ಅರುಣ್ ಶ್ಯಾಮ್ ಅವರು “ಸ್ವಾಯತ್ತ ಮತ್ತು ಪ್ರಾತಿನಿಧಿಕ ಸಂಸ್ಥೆ ವಿರುದ್ಧ ಅಧಿಕಾರ ವ್ಯಾಪ್ತಿ ಮೀರಿ ಸಹಕಾರ ಸಂಘಗಳ ಉಪ ನಿಬಂಧಕರು ಕ್ರಮ ಕೈಗೊಂಡಿದ್ದಾರೆ. ಅರ್ಜಿಯನ್ನು ತುರ್ತು ವಿಚಾರಣೆ ನಡೆಸಬೇಕು ಎಂದರು. ಆಗ ಪೀಠವು ಸೋಮವಾರ ಅರ್ಜಿಯನ್ನು ವಿಚಾರಣೆಗೆ ಪರಿಗಣಿಸುವುದಾಗಿ ಹೇಳಿ ವಿಚಾರಣೆ ಮುಂದೂಡಿತು.
ಅಲ್ಲದೇ ಎನ್ ಹನುಮೇಗೌಡ ಹಾಗೂ ಇತರರು ನೀಡಿದ ದೂರಿನ ಹಿನ್ನೆಲೆಯಲ್ಲಿ 2023-24ರಿಂದ ಇಲ್ಲಿವರೆಗೆ ಪರಿಷತ್ತು ಅನುಮೋದಿಸಿರುವ ತಿದ್ದುಪಡಿಗಳು, ಆಡಳಿತ ಮಂಡಳಿ ಪದಾಧಿಕಾರಿಗಳಿಗೆ ಪರಿಷತ್ತಿನ ಅಧ್ಯಕ್ಷರು ನಿಯಮಬಾಹಿರವಾಗಿ ನೀಡಿರುವ ನೋಟಿಸ್‌ಗಳು, 2023-24ನೇ ಸಾಲಿನಲ್ಲಿ ಪರಿಷತ್ತಿಗೆ ಸಂಗ್ರಹವಾಗಿರುವ ಆದಾಯವನ್ನು ದುರುಪಯೋಗಪಡಿಸಿಕೊಂಡಿರುವುದು, ಈ ಅವಧಿಯಲ್ಲಿನ ಖರೀದಿ ಮತ್ತು ಮಾರಾಟದಲ್ಲಿ ಆಗಿರುವ ಅವ್ಯವಹಾರ ಮತ್ತಿತರ ವಿಷಯಗಳನ್ನು ಪರಿಶೀಲಿಸಿ ಸೂಕ್ತ ವಿಚಾರಣೆ ನಡೆಸಲು ತನಿಖಾಧಿಕಾರಿಯನ್ನು ನೇಮಕ ಮಾಡಿ ಜೂನನ್ 30ರಂದು ಹೊರಡಿಸಲಾಗಿತ್ತು. ಈ ಆದೇಶಗಳನ್ನು ರದ್ದುಪಡಿಸಬೇಕು ಎಂದು ಅರ್ಜಿಯಲ್ಲಿ ಕೋರಲಾಗಿದೆ.
ಕೃಪೆ : ಬಾರ್ & ಬೆಂಚ್




