ಮಳವಳ್ಳಿ ಪ್ರಭಾವಿ ಮುಖಂಡ ಕಾಡುಮನೆ ಪ್ರಸನ್ನ ಇಂದು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಂಡರು.
ಮಳವಳ್ಳಿ ಪಟ್ಟಣದ ಪ್ರವಾಸಿ ಮಂದಿರದ ಆವರಣದಲ್ಲಿರುವ ಡಾ. ಬಿ.ಆರ್.ಅಂಬೇಡ್ಕರ್‌ರವರ ಪುತ್ಥಳಿಗೆ ಮಾಲಾರ್ಪಣೆ ಮಾಡುವುದರ ಮೂಲಕ ಕಾಂಗ್ರೆಸ್ ಅಭ್ಯರ್ಥಿ ಪಿ.ಎಂ ನರೇಂದ್ರಸ್ವಾಮಿ ಅವರ ಪರವಾಗಿ ಚುನಾವಣಾ ಪ್ರಚಾರವನ್ನು ಆರಂಭಿಸಿದರು.
ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಕಾಡುಮನೆ ಪ್ರಸನ್ನ ಅವರು, ಸಂವಿಧಾನ ವಿರೋಧಿ ಆಡಳಿತ ನಡೆಸುತ್ತಿರುವ ಬಿಜೆಪಿ ಸರ್ಕಾರವನ್ನು ತೊಡೆದು ಹಾಕಲು ಕಾಂಗ್ರೆಸ್ ಪಕ್ಷಕ್ಕೆ ಸಂಪೂರ್ಣ ಬೆಂಬಲ ನೀಡುವುದರ ಜೊತೆಗೆ ಕಾಂಗ್ರೆಸ್ ಪಕ್ಷ ಅಧಿಕಾರ ಹಿಡಿಯಬೇಕೆಂಬುವುದು ನನ್ನ ಆಶಯವಾಗಿದೆ ಎಂದರು.
ಬಿಎಸ್‌ಪಿ ಅಭ್ಯರ್ಥಿಯಾಗಿದ್ದ ನನಗೆ ನಿರೀಕ್ಷೆಗೂ ಮೀರಿ ಇಲ್ಲಿನ ಜನರು ಬೆಂಬಲಿಸಿದ್ದರು, ಮಳವಳ್ಳಿ ಜನರ ಬಗ್ಗೆ ಬಹಳ ಪ್ರೀತಿಯನ್ನು ಹೊಂದಿದ್ದೇನೆ.ಹೋಟಲ್ ಉದ್ಯಮ ನಡೆಸುತ್ತಿರುವ ನಾನು ನೂರಾರು ಮಂದಿಗೆ ನೌಕರಿ ಕೊಟ್ಟಿರುವ ತೃಪ್ತಿ ಇದೆ ಎಂದರು.
ಬಿಜೆಪಿ ಸರ್ಕಾರದ ದುರಾಡಳಿತದಿಂದಾಗಿ ಜನಸಾಮಾನ್ಯರು ಸಂಕಷ್ಟ ಪಡುತ್ತಿರುವ ಪ್ರಸ್ತುತ ಸಂದರ್ಭದಲ್ಲಿ ಬಿಜೆಪಿಯನ್ನು ತೊಡೆದು ಹಾಕಲು ಕಾಂಗ್ರೆಸ್ ನಿಂದ ಮಾತ್ರ ಸಾಧ್ಯ ಎಂದು ಅರಿತು ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ, ಜಿ.ಪರಮೇಶ್ವರ್, ಪ್ರಿಯಾಂಕ ಖರ್ಗೆಯವರ ನಾಯಕತ್ವವನ್ನು ಮೆಚ್ಚಿ ಕಾಂಗ್ರೆಸ್ ಪಕ್ಷಕ್ಕೆ ಸೆರ್ಪಡೆಗೊಂಡಿದ್ದೇನೆಂದು ಹೇಳಿದರು.
ಕಾಂಗ್ರೆಸ್ ಅಭ್ಯರ್ಥಿ ನರೇಂದ್ರಸ್ವಾಮಿ ಅವರು ನೇರ ನಡೆ ನುಡಿಗೆ ಹೆಸರಾಗಿರುವುದರ ಜೊತೆಗೆ ದಕ್ಷ ಆಡಳಿತಗಾರರಾಗಿ ದ್ದಾರೆ. ಶಾಸಕರಾಗಿ ವಿಧಾನಸಭೆಯಲ್ಲಿ ಮಳವಳ್ಳಿ ಸೇರಿದಂತೆ ನಾಡಿನ ಜನರ ಸಮಸ್ಯೆಗಳ ಬಗ್ಗೆ ಚರ್ಚೆ ನಡೆಸಿ ಪರಿಹಾರ ಕೊಡಿಸುವಂತಾಗಲಿ ಎನ್ನುವ ಹಿನ್ನೆಲೆಯಲ್ಲಿ ತಾಲ್ಲೂಕಿನಾಧ್ಯಂತ ಪಿ.ಎಂ ನರೇಂದ್ರಸ್ವಾಮಿ ಅವರ ಪರವಾಗಿ ಚುನಾವಣಾ ಪ್ರಚಾರ ನಡೆಸಲಾಗುವುದು ಎಂದರು.
ಪಿ.ಎಂ ನರೇಂದ್ರಸ್ವಾಮಿ ಅವರು ಅಧಿಕಾರದಲ್ಲಿದ್ದ ಅವಧಿಯಲ್ಲಿ ಸಾವಿರಾರು ಕೋಟಿ ಅನುದಾನ ತಂದು ಕ್ಷೇತ್ರವನ್ನು ಸಮಗ್ರವಾಗಿ ಅಭಿವೃದ್ದಿಪಡಿಸಿದ್ದಾರೆ. ಮಾದರಿ ಕ್ಷೇತ್ರವನ್ನಾಗಿಸಲು ಪಿ.ಎಂ. ನರೇಂದ್ರಸ್ವಾಮಿ ಅವರಿಗೆ ವಿಧಾನಸಭಾ ಚುನಾವಣೆಯಲ್ಲಿ ಮತವನ್ನು ನೀಡಿ ಜಯಶೀಲರನ್ನಾಗಿ ಮಾಡುವುದರ ಮೂಲಕ ಸೇವೆ ಮಾಡಲು ಅವಕಾಶ ಮಾಡಿಕೊಡಬೇಕೆಂದು ಕೋರಿದರು.
ಇದೇ ಸಂದರ್ಭದಲ್ಲಿ ಜಿಲ್ಲಾ ಪರಿಷತ್ ಮಾಜಿ ಸದಸ್ಯ ಜಯರಾಜು, ಮಹೇಶ್, ಬಂಡೂರು ಗ್ರಾ,ಪಂ ಸದಸ್ಯ ದೇವು, ಅಂಬೇಡ್ಕರ್ ಸೇನೆಯ ಜಿಲ್ಲಾಧ್ಯಕ್ಷ ಸಿದ್ದರಾಜು, ದ್ಯಾವಪಟ್ಟಣ ಜಗದೀಶ್, ಮಲ್ಲಿಯೂರು ಮಲ್ಲು ಸೇರಿದಂತೆ ಇತರರಿದ್ದರು.




