Friday, September 20, 2024

ಪ್ರಾಯೋಗಿಕ ಆವೃತ್ತಿ

ವಾಯು ಮಾಲಿನ್ಯ ನಿಯಂತ್ರಣಕ್ಕೆ ಮುಂದಾಗಿ- ಮಲ್ಲಿಕಾರ್ಜುನ

ದ್ವಿಚಕ್ರ ವಾಹನಗಳು ಸೇರಿದಂತೆ ಪೆಟ್ರೋಲ್, ಡೀಸೆಲ್ ಆಧಾರಿತ ವಾಹನಗಳನ್ನು ಸುಸ್ಥಿತಿಯಲ್ಲಿಟ್ಟುಕೊಂಡು ದಟ್ಟವಾದ ಹೊಗೆ ಬರದಂತೆ ಎಚ್ಚರ ವಹಿಸುವ ಮೂಲಕ ವಾಯು ಮಾಲಿನ್ಯವನ್ನು ನಿಯಂತ್ರಣ ಮಾಡಲು ನಾಗರೀಕ ಸಮಾಜದ ಪ್ರತಿಯೊಬ್ಬರೂ ಮುಂದಾಗಬೇಕು ಎಂದು ನಾಗಮಂಗಲ ಪ್ರಾದೇಶಿಕ ಸಾರಿಗೆ ಅಧಿಕಾರಿ ಆಲಂಬಾಡಿಕಾವಲು ಮಲ್ಲಿಕಾರ್ಜುನ ಮನವಿ ಮಾಡಿದರು.

ಕೆ.ಆರ್.ಪೇಟೆ ಪಟ್ಟಣದ ನಂದಿ ವಾಯುಮಾಲಿನ್ಯ ತಪಾಸಣಾ ಕೇಂದ್ರ, ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಬಸ್ ಡಿಪೋ ಹಾಗೂ ಮಹಿಳಾ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ವಾಯುಮಾಲಿನ್ಯ ನಿಯಂತ್ರಣ ಜಾಗೃತಿ ಮಾಸಾಚರಣೆಯ ಅಂಗವಾಗಿ ಹಮ್ಮಿಕೊಂಡಿದ್ದ ಅರಿವು ಕಾರ್ಯಕ್ರಮವನ್ನು ಸಸಿಗೆ ನೀರೆರೆಯುವ ಮೂಲಕ ಉದ್ಘಾಟಿಸಿ ಮಾತನಾಡಿದರು.

ನಾವು ಉಸಿರಾಡುವ ಗಾಳಿ, ತಿನ್ನುವ ಆಹಾರ ಹಾಗೂ ಕುಡಿಯುವ ನೀರು ಸೇರಿದಂತೆ ಇಡೀ ವಾತಾವರಣವೇ ಮಾಲಿನ್ಯದಿಂದಾಗಿ ಕಲುಷಿತವಾಗುತ್ತಿದೆ. ಅನಾಹುತವು ಸಂಭವಿಸುವ ಮುನ್ನ ಎಚ್ಚೆತ್ತುಕೊಳ್ಳಲು ಇದು ಸಕಾಲವಾಗಿದ್ದು ಪರಿಸರಕ್ಕೆ ಹಾನಿ ಮಾಡುವ ವಾಹನಗಳನ್ನು ರಿಪೇರಿ ಮಾಡಿಸಿ ಸುಸ್ಥಿತಿಯಲ್ಲಿಟ್ಟುಕೊಳ್ಳುವ ಮೂಲಕ ಪರಿಸರ ಸಂರಕ್ಷಣೆಗೆ ಮುಂದಾಗ ಬೇಕಿದೆ ಎಂದರು.

ಸರ್ಕಲ್ ಇನ್ಸ್ಪೆಕ್ಟರ್ ಸುಮಾರಾಣಿ ಮಾತನಾಡಿ, ವಿದ್ಯಾರ್ಥಿಗಳು ಹಾಗೂ ಯುವಜನರು ಕಡ್ಡಾಯವಾಗಿ ಸಂಚಾರಿ ಸುರಕ್ಷತಾ ನಿಯಮಗಳನ್ನು ಪಾಲಿಸಬೇಕು. ದ್ವಿಚಕ್ರ ವಾಹನವನ್ನು ಓಡಿಸುವಾಗ ಕಡ್ಡಾಯವಾಗಿ ಹೆಲ್ಮೆಟ್ ಧರಿಸಬೇಕು, ವಾಹನ ಚಾಲನೆ ಮಾಡಿಕೊಂಡು ಮೊಬೈಲ್ ಫೋನಿನಲ್ಲಿ ಮಾತನಾಡುವುದರಿಂದ ಅಪಘಾತಗಳು ಸಂಭವಿಸಿ ಅಮೂಲ್ಯವಾದ ಜೀವವನ್ನು ಕಳೆದುಕೊಂಡು ಇಡೀ ಜೀವನವೇ ಸರ್ವನಾಶವಾಗುತ್ತದೆ ಎಂದು ಎಚ್ಚರಿಸಿದರು.

ಹಿರಿಯ ಸಂಚಾರಿ ನಿರೀಕ್ಷಕರಾದ ಸತೀಶ್, ಕಚೇರಿಯ ಅಧೀಕ್ಷಕ ಸತೀಶ್, ಅಗ್ನಿಶಾಮಕ ಠಾಣೆಯ ಅಧಿಕಾರಿ ಶಿವಣ್ಣ, ಪ್ರಾಂಶುಪಾಲ ಧನಂಜಯ, ವಲಯ ಅರಣ್ಯಾಧಿಕಾರಿ ಅನಿತಾ ಪ್ರವೀಣ್, ಬಸ್ ಡಿಪೋ ವ್ಯವಸ್ಥಾಪಕ ಕುಮಾರ್, ಪತ್ರಕರ್ತರಾದ ಎಂ ಕೆ ಹರಿಚರಣ ತಿಲಕ್, ಕೆ.ಆರ್. ನೀಲಕಂಠ, ಸೈಯದ್ ಖಲೀಲ್, ಚಾಲನಾ ತರಬೇತಿ ಶಾಲೆಯ ಪ್ರಾಂಶುಪಾಲ ನಂದೀಶ್ ಮತ್ತಿತರರಿದ್ದರು.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!