Thursday, September 19, 2024

ಪ್ರಾಯೋಗಿಕ ಆವೃತ್ತಿ

ಮಲ್ಲಿಕಾರ್ಜುನ ಖರ್ಗೆ ಆಯ್ಕೆಯಿಂದ ಕಾಂಗ್ರೆಸ್ ಪಕ್ಷಕ್ಕೆ ಭೀಮ ಬಲ

ಅಖಿಲ ಭಾರತ ರಾಷ್ಟ್ರೀಯ ಕಾಂಗ್ರೆಸ್ ಸಮಿತಿಯ ನೂತನ ಅಧ್ಯಕ್ಷರಾಗಿ ಮಲ್ಲಿಕಾರ್ಜುನ ಖರ್ಗೆ ಆಯ್ಕೆಯಾಗಿದ್ದು,ಕಾಂಗ್ರೆಸ್ ಪಕ್ಷಕ್ಕೆ ರಾಷ್ಟ್ರದಲ್ಲಿ ಭೀಮ ಬಲ ಬಂದಂತಾಗಿದೆ ಎಂದು ಕಾಂಗ್ರೆಸ್ ಮುಖಂಡರು ಅಭಿಪ್ರಾಯ ವ್ಯಕ್ತಪಡಿಸಿದರು.

ಮಂಡ್ಯ ನಗರದ ಜೆ.ಸಿ. ವೃತ್ತದಲ್ಲಿ ಕಾಂಗ್ರೆಸ್ ಮುಖಂಡರು ಹಾಗೂ ಕಾರ್ಯಕರ್ತರು,ಮಲ್ಲಿಕಾರ್ಜುನ ಖರ್ಗೆ ಅಭಿಮಾನಿಗಳು ಖರ್ಗೆಯವರ ಕಟೌಟಿಗೆ ಹಾಲಿನ ಅಭಿಷೇಕ ಮಾಡಿ,ಸಾರ್ವಜನಿಕರಿಗೆ ಸಿಹಿ ಹಂಚಿ,ಪಟಾಕಿ ಸಿಡಿಸಿ ಸಂಭ್ರಮಾಚರಣೆ ಮಾಡಿದರು.

ಮಾಜಿ ಸಚಿವ ಎಂ.ಎಸ್.ಆತ್ಮಾನಂದ ಮಾತನಾಡಿ, ಎಐಸಿಸಿ ಅಧ್ಯಕ್ಷರಾಗಿ ಮಲ್ಲಿಕಾರ್ಜುನ ಖರ್ಗೆ ಅವರು ಆಯ್ಕೆಯಾಗಿರುವುದು ಕಾಂಗ್ರೆಸ್ಸಿಗರಿಗೆ ಮಾತ್ರವಲ್ಲದೆ, ಕನ್ನಡಿಗರಿಗೂ ಹೆಮ್ಮೆಯ ವಿಷಯ. ಖರ್ಗೆಯವರಿಂದ ಕಾಂಗ್ರೆಸ್ ಪಕ್ಷದ ಸಂಘಟನೆ ಮತ್ತಷ್ಟು ಬಲಗೊಳ್ಳಲಿದೆ ಎಂದರು.

ಖರ್ಗೆ ಅವರು 9ಬಾರಿ ಶಾಸಕರಾಗಿ, 2 ಬಾರಿ ಸಂಸದರಾಗಿ ಕಾರ್ಯನಿರ್ವಹಿಸಿದ್ದಾರೆ.ಪಕ್ಷದ ನಿಷ್ಠಾವಂತ ಕಾರ್ಯಕರ್ತರಾಗಿ, ಶಿಸ್ತಿನ ಸಿಪಾಯಿ ಆಗಿ ಸಲ್ಲಿಸಿದ ಸುದೀರ್ಘ ಸೇವೆಗೆ ಪಕ್ಷದ ಅತ್ಯುನ್ನತ ಸ್ಥಾನವಾದ ಎಐಸಿಸಿ ಅಧ್ಯಕ್ಷ ಪಟ್ಟದೊರೆತಿದೆ. ಪಕ್ಷಕ್ಕಾಗಿ ನಿಷ್ಠೆಯಿಂದ ದುಡಿದರೆ ಎಲ್ಲರಿಗೂ ಒಂದಲ್ಲಾ ಒಂದು ಹುದ್ದೆ ಸಿಕ್ಕೇ ಸಿಗುತ್ತದೆ ಎನ್ನುವುದಕ್ಕೆ ಖರ್ಗೆ ಅವರೇ ಉದಾಹರಣೆ ಎಂದು ಹೇಳಿದರು.

ಎಪಿಎಂಸಿ ಮಾಜಿ ಅಧ್ಯಕ್ಷ ಎಂ.ಡಿ.ಜಯರಾಮ್ ಮಾತನಾಡಿ, ಎಐಸಿಸಿ ಅಧ್ಯಕ್ಷರ ಚುನಾವಣೆಯಲ್ಲಿ ನಮ್ಮ ರಾಜ್ಯದವರೇ ಆದ ಮಲ್ಲಿಕಾರ್ಜುನ ಖರ್ಗೆ ಆಯ್ಕೆಯಾಗಿರುವುದು ಸಂತಸ ತಂದಿದೆ.ಪ್ರಾಮಾಣಿಕತೆಗೆ ಹೆಸರಾದ ಖರ್ಗೆ ಅವರು ಆಯ್ಕೆಯಾಗಿರುವುದರಿಂದ ನಮ್ಮ ಪಕ್ಷಕ್ಕೆ ಇನ್ನಷ್ಟು ಬಲ ಬಂದಂತಾಗಿದೆ ಎಂದರು.

ಎಐಸಿಸಿ ಚುನಾವಣೆಯಲ್ಲಿ ಮಾಜಿ ಮುಖ್ಯಮಂತ್ರಿ ದಿ. ಎಸ್.ನಿಜಲಿಂಗಪ್ಪ ನಂತರ ಖರ್ಗೆ ಅವರು ಪಕ್ಷದ ರಾಷ್ಟ್ರೀಯ ಅಧ್ಯಕ್ಷರಾಗಿ ಆಯ್ಕೆಯಾದ ಎರಡನೇ ಕನ್ನಡಿಗ. ಖರ್ಗೆ ಸಾರಥ್ಯದಲ್ಲಿ ಪಕ್ಷ ಸಂಘಟನೆಗೆ ಇನ್ನೂ ಹೆಚ್ಚಿನ ಒತ್ತು ಸಿಗಲಿದೆ ಎಂದರು.ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹಾಗೂ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರಿಗೆ ಮತ್ತಷ್ಟು ಶಕ್ತಿ ಬಂದಿದೆ ಎಂದರು.

ಈ ಸಂದರ್ಭದಲ್ಲಿ ಕೆಪಿಸಿಸಿ ರಾಜ್ಯ ಸಂಯೋಜಕ ಸುಂಡಹಳ್ಳಿ ಮಂಜುನಾಥ್, ಕಾಂಗ್ರೆಸ್ ಮುಖಂಡರಾದ ಹಾಲಹಳ್ಳಿ ರಾಮಲಿಂಗಯ್ಯ, ಅಮರಾವತಿ ಚಂದ್ರಶೇಖರ್,ಬಿ.ಸಿ.ಶಿವಾನಂದ,ಸಿದ್ದರಾಮೇಗೌಡ,ಚಿದಂಬರ್,ನಗರಸಭಾ ಸದಸ್ಯ ಶ್ರೀಧರ್, ಮುಖಂಡರಾದ ಬಿ.ಪಿ.ಪ್ರಕಾಶ್, ಕೃಷ್ಣ ಸಾತನೂರು, ಕಾಂಗ್ರೆಸ್ ಪ.ಜಾತಿ ವಿಭಾಗದ ನಗರ ಘಟಕದ ಅದ್ಯಕ್ಷ ಸುರೇಶ್, ಪರಿಶಿಷ್ಟ ಜಾತಿ ಜಿಲ್ಲಾ ಕಾಂಗ್ರೆಸ್ ಮಾಜಿ ಅಧ್ಯಕ್ಷ ಸಿದ್ಧಲಿಂಗು,ಕಬ್ಬಾಳಯ್ಯ, ಹೊಂಬಯ್ಯ, ರಘು,
ಶಶಿಕಲಾ, ಗುರುರಾಜ್ ಸೇರಿದಂತೆ ಕಾಂಗ್ರೆಸ್ ಪಕ್ಷದ ಮುಖಂಡರುಗಳು ಹಾಗೂ ಕಾರ್ಯಕರ್ತರುಗಳು ಆಗಮಿಸಿದ್ದರು.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!