Thursday, November 19, 2026

ಪ್ರಾಯೋಗಿಕ ಆವೃತ್ತಿ

ಮಂಡ್ಯ- ಹಾಸನದ ಎಲ್ಲಾ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಪತಾಕೆ ಹಾರಿಸಬೇಕು

ಮಂಡ್ಯ ಮತ್ತು ಹಾಸನ ಜಿಲ್ಲೆಯಲ್ಲಿ ಕಾಂಗ್ರೆಸ್ ಪಕ್ಷದ ಶಾಸಕರಿಲ್ಲ.ಮುಂಬರುವ ವಿಧಾನ ಸಭಾ ಚುನಾವಣೆಯಲ್ಲಿ ಎರಡೂ ಜಿಲ್ಲೆಯ ಎಲ್ಲಾ ವಿಧಾನ ಸಭಾ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಪತಾಕೆ ಹಾರಿಸಬೇಕೆಂದು ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷವನ್ನ ಅಧಿಕಾರಕ್ಕೆ ತರಲು ಕಾರ್ಯಕರ್ತರು ಶ್ರಮಿಸಬೇಕು ಎಂದು ಕಾರ್ಯಕರ್ತರಿಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಕರೆ ನೀಡಿದರು.

ನಾಗಮಂಗಲ ಪಟ್ಟಣದ ಶ್ರೀ ಸೌಮ್ಯ ಕೇಶವ ಸ್ವಾಮಿ ದೇವಸ್ಥಾನದ ಅವರಣದಲ್ಲಿ ಕಾಂಗ್ರೆಸ್ ಪಕ್ಷ ಆಯೋಜಿಸಿದ್ದ ಕಾಂಗ್ರೆಸ್ ಪಕ್ಷದ ಸ್ವಾತಂತ್ರೋತ್ಸವದ ನಡಿಗೆ ಕಾರ್ಯಕ್ರಮದ ಪೂರ್ವ ಭಾವಿ ಸಭೆಯಲ್ಲಿ ಅವರು ಮಾತನಾಡಿದರು.

ಮಂಡ್ಯ ಮತ್ತು ಹಾಸನ ಜಿಲ್ಲೆಗಳಲ್ಲಿ ನಮ್ಮ ಪಕ್ಷದ ಶಾಸಕರಿಲ್ಲದಿದ್ದರೂ ಕಳೆದ ವಿಧಾನ ಪರಿಷತ್ ಹಾಗೂ ಪದವೀಧರ ಕ್ಷೇತ್ರದ ಚುನಾವಣೆಯಲ್ಲಿ ನಮ್ಮ ಪಕ್ಷದ ಅಭ್ಯರ್ಥಿಗಳನ್ನು ಗೆಲ್ಲಿಸುವ ಮೂಲಕ ನಮ್ಮ ಕೈ ಹಿಡಿದ್ದಿದ್ದೀರಿ.

ಮುಂದಿನ 2024 ರ ಚುನಾವಣೆಯಲ್ಲಿ ಮಂಡ್ಯ ಮತ್ತು ಹಾಸನ ಜಿಲ್ಲೆಯ ಎಲ್ಲಾ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳನ್ನು ಗೆಲ್ಲಿಸುವುದರೊಂದಿಗೆ ನನ್ನ ಹಾಗೂ ಸಿದ್ದರಾಮಯ್ಯ ಅವರ ನಾಯಕತ್ವಕ್ಕೆ ಅಧಿಕಾರ ಹಿಡಿಯುವ ಆಶೀರ್ವಾದ ಮಾಡಬೇಕು ಎಂದರು.

ನಾನು ಇನ್ನೂ ಹಲವು ಬಾರಿ ಮಂಡ್ಯ,ಹಾಸನ ಜಿಲ್ಲೆಗಳಿಗೆ ಆಗಮಿಸುತ್ತೇನೆ. ಇಲ್ಲಿನ ಮುಖಂಡರ ಮತ್ತು ಕಾರ್ಯಕರ್ತರ ಸಮಸ್ಯೆ ಗಳನ್ನು ಆಲಿಸುತ್ತೇನೆ. ಈ ಭಾಗದಲ್ಲಿ ನೀವುಗಳು ನಿಮ್ಮ ನಾಯಕರ ಕೈ ಬಲಪಡಿಸಬೇಕು, ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ 126 ಕ್ಷೇತ್ರಗಳಲ್ಲಿ ಗೆಲ್ಲಲಿದೆ ಎಂಬ ಸಮೀಕ್ಷೆ ಇದೆ.

ಮುಂದಿನ ದಿನಗಳಲ್ಲಿ ಹಾಸನ ಮತ್ತು ಮಂಡ್ಯ ಜಿಲ್ಲೆಯಲ್ಲಿ ನಮ್ಮ ನಾಯಕರಾದ ರಾಹುಲ್ ಗಾಂಧಿ ಭಾರತ್ ಜೋಡೋ ಕಾರ್ಯಕ್ರಮ ಇದೆ. ಇದಕ್ಕೆ ಎಲ್ಲರೂ ಬೆಂಬಲ ನೀಡಬೇಕು ಎಂದರು.

ಸುಳ್ಳಿಗೆ-ಕಣ್ಣೀರಿಗೆ ಮಾರುಹೋಗಬೇಡಿ

ಮಾಜಿ ಸಚಿವ ಎನ್.ಚಲುವರಾಯಸ್ವಾಮಿ ಮಾತನಾಡಿ, ರಾಜ್ಯದ ಜನತೆ ಬಿಜೆಪಿ ಪಕ್ಷದ ಸುಳ್ಳಿಗೆ ಹಾಗೂ ಜೆಡಿಎಸ್ ಪಕ್ಷದ ಕಣ್ಣೀರಿಗೆ ಮಾರು ಹೋಗದೆ ಕಾಂಗ್ರೆಸ್ ಪಕ್ಷವನ್ನು ಬೆಂಬಲಿಸಬೇಕು, ಕಾಂಗ್ರೆಸ್ ಪಕ್ಷ ರಾಜ್ಯದಲ್ಲಿ ಅಧಿಕಾರ ಹಿಡಿಯುವತನಕ ಕಾರ್ಯಕರ್ತರು ಶ್ರಮಿಸಬೇಕು ಎಂದು ಮನವಿ ಮಾಡಿದರು.

ಕಾಂಗ್ರೆಸ್ ಪಕ್ಷದ ಕಾರ್ಯಾ ಧ್ಯಕ್ಷ ಧ್ರುವನಾರಾಯಣ್, ಮಾಜಿ ಶಾಸಕರಾದ ಎನ್.ನರೇಂದ್ರಸ್ವಾಮಿ, ಪ್ರಕಾಶ್, ಜಿಲ್ಲಾಧ್ಯಕ್ಷ ಸಿ.ಡಿ.ಗಂಗಾಧರ್, ಮುಖಂಡರಾದ ಗಣಿಗ ರವಿಕುಮಾರ್, ಸಚ್ಚಿನ್ ಚಲುವರಾಯಸ್ವಾಮಿ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎನ್.ಜೆ.ರಾಜೇಶ್, ಹನುಮಂತು, ಹೆಚ್.ಟಿ.ಕೃಷ್ಣೇಗೌಡ, ನಾಗೇಂದ್ರ, ಸುನೀಲ್ ಲಕ್ಷ್ಮೀಕಾಂತ್, ತಿಮ್ಮರಾಯಿಗೌಡ, ಬಿ.ರಾಜೇಗೌಡ, ದಿವಾಕರ್ ಹಲವರು ಹಾಜರಿದ್ದರು.

ಸೌಮ್ಯಕೇಶವನಿಗೆ ಪೂಜೆ

ಕಾರ್ಯಕ್ರಮದ ಬಳಿಕ ಇತಿಹಾಸ ಪ್ರಸಿದ್ಧ ಶ್ರೀ ಸೌಮ್ಯ ಕೇಶವ ಸ್ವಾಮಿ ದೇವಾಲಯದಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಸೇರಿದಂತೆ ಎಲ್ಲಾ ನಾಯಕರು ವಿಶೇಷ ಪೂಜೆ ಸಲ್ಲಿಸಿದರು.

ನಮ್ಮ ಸುದ್ದಿಗಳು ಇಷ್ಟವಾದರೆ ನುಡಿ ಕರ್ನಾಟಕ.ಕಾಂ (ಮಂಡ್ಯ ಡಿಜಿಟಲ್ ಮೀಡಿಯಾ) ಗೆ ದೇಣಿಗೆ ನೀಡಿ ಪ್ರೋತ್ಸಾಹಿಸಿ

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ