Tuesday, November 24, 2026

ಪ್ರಾಯೋಗಿಕ ಆವೃತ್ತಿ

ಮಂಡ್ಯ ಕೃಷಿ ವಿ.ವಿ ಕುಲಪತಿಯಾಗಿ ಡಾ.ಕೆ.ಸಿ.ನಾರಾಯಣಸ್ವಾಮಿ ಅಧಿಕಾರ ಸ್ವೀಕಾರ

ಮಂಡ್ಯ ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯ ನೂತನ ಕುಲಪತಿಯಾಗಿ ಡಾ. ಕೆ. ಸಿ. ನಾರಾಯಣಸ್ವಾಮಿ ಅವರು ಇಂದು ಅಧಿಕೃತವಾಗಿ ಅಧಿಕಾರ ಸ್ವೀಕರಿಸಿದರು.

ಕೃಷಿ ಶಿಕ್ಷಣ, ಸಂಶೋಧನೆ ಹಾಗೂ ವಿಸ್ತರಣಾ ಕ್ಷೇತ್ರಗಳಲ್ಲಿ ಅಪಾರ ಅನುಭವ ಹೊಂದಿರುವ ಡಾ. ಕೆ. ಸಿ. ನರಾಯಣಸ್ವಾಮಿ ಅವರು ವಿವಿಧ ಜವಾಬ್ದಾರಿಗಳನ್ನು ಯಶಸ್ವಿಯಾಗಿ ನಿರ್ವಹಿಸಿದ ಅನುಭವವನ್ನು ಹೊಂದಿದ್ದಾರೆ. ಅವರ ನೇತೃತ್ವದಲ್ಲಿ ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯ, ಮಂಡ್ಯವು ಇನ್ನಷ್ಟು ಪ್ರಗತಿಯನ್ನು ಸಾಧಿಸಲಿದೆ ಎಂಬ ವಿಶ್ವಾಸವನ್ನು ವಿಶ್ವವಿದ್ಯಾಲಯದ ಅಧಿಕಾರಿಗಳು ಹಾಗೂ ಸಿಬ್ಬಂದಿ ವ್ಯಕ್ತಪಡಿಸಿದ್ದಾರೆ.

ಈ ಸಂದರ್ಭದಲ್ಲಿ ವಿಶ್ವವಿದ್ಯಾಲಯದ ಹಿರಿಯ ಅಧಿಕಾರಿಗಳು, ಅಧ್ಯಾಪಕರು, ವಿಜ್ಞಾನಿಗಳು ಮತ್ತು ಸಿಬ್ಬಂದಿ ವರ್ಗವು ಡಾ. ಕೆ. ಸಿ. ನರಾಯಣಸ್ವಾಮಿ ಅವರನ್ನು ಹಾರ್ದಿಕವಾಗಿ ಅಭಿನಂದಿಸಿ, ಅವರ ಅವಧಿಗೆ ಶುಭಾಶಯಗಳನ್ನು ಕೋರಿದರು.

ಡಾ.ಕೆ.ಸಿ.ನಾರಾಯಣಸ್ವಾಮಿ ಮಾತನಾಡಿ, ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯ, ಮಂಡ್ಯದ ಸರ್ವತೋಮುಖ ಅಭಿವೃದ್ಧಿಗೆ ಶ್ರಮಿಸುವುದಾಗಿ ಹಾಗೂ ರೈತಕೇಂದ್ರಿತ ಸಂಶೋಧನೆ, ಗುಣಮಟ್ಟದ ಶಿಕ್ಷಣ ಮತ್ತು ಪರಿಣಾಮಕಾರಿ ವಿಸ್ತರಣಾ ಚಟುವಟಿಕೆಗಳಿಗೆ ಆದ್ಯತೆ ನೀಡುವುದಾಗಿ ತಿಳಿಸಿದರು.

ಈ ಸಂದರ್ಭದಲ್ಲಿ ಪೂರ್ವದಲ್ಲಿ ಮಾನ್ಯ ವಿಶೇಷಾಧಿಕಾರಿಯಾಗಿ ಸೇವೆ ಸಲ್ಲಿಸಿದ ಡಾ.ಕೆ.ಎಂ.ಹರಿಣಿಕುಮಾರ್ ಅವರ ಕೊಡುಗೆಯನ್ನು ವಿಶ್ವವಿದ್ಯಾಲಯದ ಎಲ್ಲಾ ಸಿಬ್ಬಂದಿ ಮನಪೂರ್ವಕವಾಗಿ ಸ್ಮರಿಸಿ ಪ್ರಶಂಸಿಸಿದರು.

ಡಾ. ಕೆ. ಎಂ. ಹರಿಣಿಕುಮಾರ್ ಅವರು ವಿಶೇಷಾಧಿಕಾರಿಯಾಗಿ ಕಾರ್ಯನಿರ್ವಹಿಸಿದ ಅವಧಿಯಲ್ಲಿ ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯ, ಮಂಡ್ಯದ ಸ್ಥಾಪನೆಗೆ ದೃಢವಾದ ಅಡಿಪಾಯವನ್ನು ಹಾಕಿದ್ದು, ಆಡಳಿತಾತ್ಮಕ ವ್ಯವಸ್ಥೆ, ಶೈಕ್ಷಣಿಕ ಚಟುವಟಿಕೆಗಳು, ಸಂಶೋಧನೆ ಹಾಗೂ ವಿಸ್ತರಣಾ ಕಾರ್ಯಗಳಿಗೆ ಸ್ಪಷ್ಟ ದಿಕ್ಕು ನೀಡಿದರು. ಅವರ ದೂರದೃಷ್ಟಿ, ಕಾರ್ಯಕ್ಷಮತೆ ಮತ್ತು ಸಮರ್ಪಣೆಯಿಂದ ವಿಶ್ವವಿದ್ಯಾಲಯವು ಸುಸಂಘಟಿತವಾಗಿ ರೂಪುಗೊಳ್ಳಲು ಸಾಧ್ಯವಾಯಿತು.

ಈ ಸಂದರ್ಭದಲ್ಲಿ ವಿಶ್ವವಿದ್ಯಾಲಯದ ಅಧ್ಯಾಪಕರು, ವಿಜ್ಞಾನಿಗಳು ಹಾಗೂ ಸಿಬ್ಬಂದಿ ವರ್ಗವು ಡಾ. ಕೆ. ಎಂ. ಹರಿಣಿಕುಮಾರ್ ಅವರ ಸೇವೆಯನ್ನು ಹೃದಯಪೂರ್ವಕವಾಗಿ ಶ್ಲಾಘಿಸಿ, ಅವರ ಮುಂದಿನ ಕಾರ್ಯಗಳಿಗೆ ಶುಭಾಶಯಗಳನ್ನು ಕೋರಿದರು.

ನಮ್ಮ ಸುದ್ದಿಗಳು ಇಷ್ಟವಾದರೆ ನುಡಿ ಕರ್ನಾಟಕ.ಕಾಂ (ಮಂಡ್ಯ ಡಿಜಿಟಲ್ ಮೀಡಿಯಾ) ಗೆ ದೇಣಿಗೆ ನೀಡಿ ಪ್ರೋತ್ಸಾಹಿಸಿ

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ