Tuesday, November 24, 2026

ಪ್ರಾಯೋಗಿಕ ಆವೃತ್ತಿ

ಮಂಡ್ಯ | ಮೇ 26 ರಿಂದ 29 ರವರೆಗೆ ಉಪ ಲೋಕಾಯುಕ್ತರ ಪ್ರವಾಸ : ದೂರು ಸ್ವೀಕಾರ

ನ್ಯಾಯಮೂರ್ತಿ ಹಾಗೂ‌ ಉಪಲೋಕಾಯುಕ್ತ ಬಿ.ವೀರಪ್ಪ ಅವರು ಮಂಡ್ಯ ಜಿಲ್ಲೆಯ ಪ್ರವಾಸ ಕಾರ್ಯಕ್ರಮವನ್ನು ಪರಿಷ್ಕರಿಸಿದ್ದು ಅವರು ಮೇ 26 ರಿಂದ 29 ರವರೆಗೆ ಮಂಡ್ಯ ಜಿಲ್ಲೆಯಲ್ಲಿ ಪ್ರವಾಸ ಕೈಗೊಂಡಿದ್ದಾರೆ ಎಂದು ಅಪರ ಜಿಲ್ಲಾಧಿಕಾರಿ ಬಿ.ಸಿ. ಶಿವಾನಂದಮೂರ್ತಿ ತಿಳಿಸಿದರು.

ಮಂಡ್ಯ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಅಧಿಕಾರಿಗಳ ಸಭೆ ನಡೆಸಿ ಮಾತನಾಡಿದ ಅವರು, ಉಪ ಲೋಕಾಯುಕ್ತರು ಸಾರ್ವಜನಿಕರಿಂದ ಮಂಡ್ಯದ ಅಂಬೇಡ್ಕರ್ ಭವನದಲ್ಲಿ ಮೇ 28 ರಂದು ದೂರು ಸ್ವೀಕರಿಸಲಿದ್ದಾರೆ. ಈ ಕುರಿತು ವ್ಯಾಪಕ ಪ್ರಚಾರವಾಗಬೇಕು ಎಂದರು.

ಎಲ್ಲಾ ಗ್ರಾಮ ಪಂಚಾಯಿತಿಯ ಪಿ.ಡಿ.ಓ.ಗಳು ಉಪಲೋಕಾಯುಕ್ತರು ಆಗಮಿಸುವ ಕುರಿತು ಸಾರ್ವಜನಿಕರಿಗೆ ಅರಿವು ಮೂಡಿಸಲು ಬ್ಯಾನರ್ ಗಳನ್ನು ಅಳವಡಿಸಬೇಕು. ಅಂಬೇಡ್ಕರ್ ಭವನದಲ್ಲಿ ಸಾರ್ವಜನಿಕರ ದೂರು ಸ್ವೀಕಾರ ಕಾರ್ಯಕ್ರಮ ಹಾಗೂ ಮಂಡ್ಯ ಜಿಲ್ಲೆಗೆ ಸಂಬಂಧಿಸಿದಂತೆ ತನಿಖೆಗೆ ಬಾಕಿ ಇರುವ ಪ್ರಕರಣಗಳ ವಿಚಾರಣೆ ನಡೆಸಲಿದ್ದಾರೆ ಹಾಗೂ ಸಾರ್ವಜನಿಕರಿಂದ ದೂರು ಸಹ ಸ್ವೀಕರಿಸಿ ವಿಚಾರಣೆ ನಡೆಸಲಿದ್ದಾರೆ. ಅಂಬೇಡ್ಕರ್ ಭವನದಲ್ಲಿ ಸಾರ್ವಜನಿಕರಿಗೆ ಕುಡಿಯುವ ನೀರು, ಕುಳಿತುಕೊಳ್ಳಲು ಆಸನದ ವ್ಯವಸ್ಥೆ ಕಲ್ಪಿಸುವಂತೆ ತಿಳಿಸಿದರು.

ಸಭೆಯಲ್ಲಿ ಉಪವಿಭಾಗಾಧಿಕಾರಿ ಶಿವಮೂರ್ತಿ, ತಹಶೀಲ್ದಾರ್ ಶಿವಕುಮಾರ್ ಬಿರಾದರ್ ಸೇರಿದಂತೆ ಇನ್ನಿತರೆ ಅಧಿಕಾರಿಗಳು ಉಪಸ್ಥಿತರಿದ್ದರು.

ಏಲ್ಲೆಲ್ಲಿ ಪ್ರವಾಸ ? 

ನ್ಯಾಯಮೂರ್ತಿ ಹಾಗೂ‌ ಉಪಲೋಕಾಯುಕ್ತರಾದ ಬಿ.ವೀರಪ್ಪ ಅವರು ಮೇ 26 ರಿಂದ 29 ರವರೆಗೆ ಜಿಲ್ಲೆಯಲ್ಲಿ ಪ್ರವಾಸ ಕೈಗೊಂಡಿದ್ದು, ಮೇ 26 ರಂದು ಸಂಜೆ 6.30 ಕ್ಕೆ ಮಂಡ್ಯ ಜಿಲ್ಲೆಗೆ ಆಗಮಿಸಿ ವಾಸ್ತವ್ಯ ಹೂಡಲಿದ್ದಾರೆ.

ಮೇ 27 ರಂದು ಬೆಳಿಗ್ಗೆ 6:30 ಗಂಟೆಗೆ, ಬೆಳಿಗ್ಗೆ 9:30 ರಿಂದ ಮಧ್ಯಾಹ್ನ 1:30 ರವರೆಗೆ, ಮಧ್ಯಾಹ್ನ 2.30 ಗಂಟೆಗೆ ಜಿಲ್ಲೆಯ ವಿವಿಧ ಸ್ಥಳಗಳಿಗೆ ಭೇಟಿ ನೀಡಲಿದ್ದಾರೆ.

ಮೇ 28 ರಂದು ಬೆಳಿಗ್ಗೆ 6:30 ಗಂಟೆಗೆ ಜಿಲ್ಲೆಯ ವಿವಿಧ ಸ್ಥಳಗಳಿಗೆ ಭೇಟಿ ನೀಡಲಿದ್ದಾರೆ. ಬೆಳಿಗ್ಗೆ 10:00 ಗಂಟೆಯಿಂದ ಸಂಜೆ 5:00 ರವರೆಗೆ ಮಂಡ್ಯನಗರದ ಸುಭಾಷ್ ನಗರದಲ್ಲಿರುವ ಬಿ.ಆರ್ ಅಂಬೇಡ್ಕರ್ ಭವನದಲ್ಲಿ ಸಾರ್ವಜನಿಕರಿಂದ ದೂರು ಮತ್ತು ಅಹವಾಲು ಸ್ವೀಕರಿಸಲಿದ್ದಾರೆ.

ಸಂಜೆ 5:00 ರಿಂದ 6:30 ರವರೆಗೆ ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ (ಡಿಎಲ್‌ಎಸ್‌ಎ) ಸಹಯೋಗದೊಂದಿಗೆ ಕರ್ನಾಟಕ ಲೋಕಾಯುಕ್ತ ಕಾಯ್ದೆಗೆ ಸಂಬಂಧಿಸಿದಂತೆ ಕಾನೂನು ಸಾಕ್ಷರತಾ ಕಾರ್ಯಕ್ರಮವನ್ನು ಮಂಡ್ಯನಗರದ ಡಾ. ಬಿ.ಆರ್. ಅಂಬೇಡ್ಕರ್ ಭವನದಲ್ಲಿ ನಡೆಸಲಿದ್ದಾರೆ.

ಈ ಕಾರ್ಯಕ್ರಮದಲ್ಲಿ ಕಂದಾಯ ಇಲಾಖೆ, ಆರ್‌ಡಿಪಿಆರ್ ಇಲಾಖೆ, ಶಿಕ್ಷಣ ಇಲಾಖೆ, ರೇಷ್ಮೆ ಇಲಾಖೆ, ಕೃಷಿ ಇಲಾಖೆ, ತೋಟಗಾರಿಕೆ ಇಲಾಖೆ ಮತ್ತು ಇತರ ತಾಲ್ಲೂಕು ಮಟ್ಟದ ಅಧಿಕಾರಿಗಳು (ಉಪ ನೋಂದಣಿದಾರರು, ಆರ್‌ಟಿಒಗಳು, ಸಮಾಜ ಕಲ್ಯಾಣ ಕಚೇರಿ, ಡಿಡಿಪಿಐ, ಎಇಒ ಮತ್ತು ಬಿಇಒ ಇಲಾಖೆ ಇತ್ಯಾದಿ) ಭಾಗವಹಿಸಲಿದ್ದಾರೆ.

ಮೇ 29 ರಂದು ಬೆಳಿಗ್ಗೆ 6:30 ಗಂಟೆಗೆ ಜಿಲ್ಲೆಯ ವಿವಿಧ ಸ್ಥಳಗಳಿಗೆ ಭೇಟಿ ನೀಡಲಿದ್ದಾರೆ. ಬೆಳಿಗ್ಗೆ 9:45 ಗಂಟೆಯಿಂದ 11:00 ಗಂಟೆಯವರೆಗೆ ಮಂಡ್ಯ ನಗರದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಜಿಲ್ಲೆಯ ನ್ಯಾಯಾಂಗ ಅಧಿಕಾರಿಗಳು, ವಕೀಲರು ಮತ್ತು ಲೋಕಾಯುಕ್ತ ಪೊಲೀಸ್ ಅಧಿಕಾರಿಗಳೊಂದಿಗೆ ಸಭೆ ನಡೆಸಲಿದ್ದಾರೆ.

ಬೆಳಿಗ್ಗೆ 11:00 ಗಂಟೆಯಿಂದ ಸಂಜೆ 6:00 ರವರೆಗೂ ಮಂಡ್ಯ ಜಿಲ್ಲೆಗೆ ಸಂಬಂಧಿಸಿದ ಬಾಕಿ ಇರುವ ದೂರುಗಳ ವಿಚಾರಣೆ ಮತ್ತು ವಿಲೇವಾರಿಯನ್ನು ದೂರುದಾರರ ಮತ್ತು ಪ್ರತಿವಾದಿಗಳ ಸಮ್ಮುಖದಲ್ಲಿ ಡಾ.ಬಿ.ಆರ್. ಅಂಬೇಡ್ಕರ್ ಭವನದಲ್ಲಿ ನಡೆಸಲಾಗುವುದು. ರಾತ್ರಿ 9 ಗಂಟೆಗೆ ರಸ್ತೆಯ ಮೂಲಕ ಕೇಂದ್ರ ಸ್ಥಾನ ಬೆಂಗಳೂರಿಗೆ ತೆರಳಲಿದ್ದಾರೆ ಎಂದು ಅವರ ಆಪ್ತ ಕಾರ್ಯದರ್ಶಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ನಮ್ಮ ಸುದ್ದಿಗಳು ಇಷ್ಟವಾದರೆ ನುಡಿ ಕರ್ನಾಟಕ.ಕಾಂ (ಮಂಡ್ಯ ಡಿಜಿಟಲ್ ಮೀಡಿಯಾ) ಗೆ ದೇಣಿಗೆ ನೀಡಿ ಪ್ರೋತ್ಸಾಹಿಸಿ

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ