Sunday, November 22, 2026

ಪ್ರಾಯೋಗಿಕ ಆವೃತ್ತಿ

ಮದ್ದೂರು | ಬಾಲಕಿಯರ ವಿದ್ಯಾರ್ಥಿನಿಲಯಕ್ಕೆ ಸಿಇಓ ನಂದಿನಿ ದಿಢೀರ್ ಭೇಟಿ : ವಾರ್ಡನ್ ಗೆ ನೋಟಿಸ್

ಮಂಡ್ಯ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ನಂದಿನಿ ಕೆ.ಆರ್ ಅವರು ಮದ್ದೂರು ತಾಲ್ಲೂಕಿನ ಅಣ್ಣೂರು ಮೆಟ್ರಿಕ್ ನಂತರದ ವಿದ್ಯಾರ್ಥಿನಿಲಯಕ್ಕೆ ಶುಕ್ರವಾರ ದಿಢೀರ್ ಭೇಟಿ ನೀಡಿ ಪರಿಶೀಲಿಸಿ ವಿದ್ಯಾರ್ಥಿನಿಲಯದಲ್ಲಿ ಅವ್ಯವಸ್ಥೆಗಳನ್ನು ಗಮನಿಸಿ ಕಾರಣ ಕೇಳಿ ನೋಟಿಸ್ ಜಾರಿ ಮಾಡುವಂತೆ ಸ್ಥಳದಲ್ಲೇ ಮದ್ದೂರು ತಾಲೂಕು ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕರಿಗೆ ಸೂಚನೆ ನೀಡಿದ್ದಾರೆ.

ವಿದ್ಯಾರ್ಥಿಗಳು ಯಾವುದೇ ತೊಂದರೆ ಇಲ್ಲದೆ ವಿದ್ಯಾಭ್ಯಾಸ ನಡೆಸಬೇಕು ಎಂದು ಸರ್ಕಾರ ಮೆಟ್ರಿಕ್ ಪೂರ್ವ, ನಂತರದ ವಿದ್ಯಾರ್ಥಿ ನಿಲಯಗಳನ್ನು ನಡೆಸುತ್ತಿದೆ. ವಿದ್ಯಾರ್ಥಿಗಳಿಗೆ ಸರಿಯಾದ ಸೌಲಭ್ಯ ನೀಡದೆ ಇದ್ದರೆ ಅವರ ಆರೋಗ್ಯ ಮತ್ತು ವಿದ್ಯಾಭ್ಯಾಸಕ್ಕೆ ತೊಂದರೆಯಾಗುತ್ತದೆ. ಈ ಹಿನ್ನೆಲೆಯಲ್ಲಿ ಜಿಲ್ಲೆಯ ವಿದ್ಯಾರ್ಥಿ ನಿಲಯಗಳಿಗೆ ಸಿಇಓ ದಿಢೀರ್ ಭೇಟಿ ನೀಡಿದ್ದರು.

ವಿದ್ಯಾರ್ಥಿ ನಿಲಯ ಅವ್ಯವಸ್ಥೆಗಳ ತಾಣ

ಅಣ್ಣೂರು ಮೆಟ್ರಿಕ್ ನಂತರ ಬಾಲಕಿಯರ ವಿದ್ಯಾರ್ಥಿನಿಲಯದಲ್ಲಿ ವಿದ್ಯಾರ್ಥಿನಿಯರಿಗೆ ನೀಡುವ ಆಹಾರ ಶುಚಿ ಹಾಗೂ ರುಚಿಕರವಾಗಿರುವುದಿಲ್ಲ. ಅವರಿಗೆ ನಿದ್ರೆ ಮಾಡಲು ಹಾಸಿಗೆ ವ್ಯವಸ್ಥೆ ಇರುವುದಿಲ್ಲ. ಸ್ನಾನದ ಕೊಠಡಿಗಳು ಅಶುಚಿತ್ವದಿಂದ ಕೂಡಿರುತ್ತವೆ. ವಿದ್ಯಾರ್ಥಿನಿಯರಿಗೆ ಸ್ಯಾನಿಟರಿ ಪ್ಯಾಡ್‌ಗಳನ್ನು ವಿಸರ್ಜಿಸಲು ನೀಡಿರುವ ಇನ್ಸಿನೇಟರ್ ಯಂತ್ರ ದುರಸ್ತಿಯಲ್ಲಿರುತ್ತದೆ. ಸ್ನಾನ ಮಾಡಲು ಸರಿಯಾದ ಸಮಯಕ್ಕೆ ನೀರಿನ ವ್ಯವಸ್ಥೆ ಇಲ್ಲದಿರುವುದನ್ನು ಕಂಡು ಬೇಸರ ವ್ಯಕ್ತಪಡಿಸಿದ ಸಿಇಒ ಅವರು, ತಾಲೂಕು ಸಮಾಜ ಕಲ್ಯಾಣ ಅಧಿಕಾರಿಗಳಿಗೆ ತಕ್ಷಣ ಎಲ್ಲಾ ಅವ್ಯವಸ್ಥೆಗಳನ್ನು 7 ದಿನದೊಳಗಾಗಿ ಸರಿಪಡಿಸಿ ವರದಿ ನೀಡುವಂತೆ ಸೂಚನೆ ನೀಡಿರುತ್ತಾರೆ. ಹಾಗೂ ಕೆಲವೇ ದಿನಗಳಲ್ಲಿ ಪುನಃ ವಿದ್ಯಾರ್ಥಿನಿಲಯಕ್ಕೆ ಭೇಟಿ ನೀಡಲಿದ್ದು, ಇಂತಹ ಅವ್ಯವಸ್ಥೆಗಳು ಕಂಡುಬಂದಲ್ಲಿ ಕಠಿಣ ಕ್ರಮ ಜರುಗಿಸುವುದಾಗಿ ಎಚ್ಚರಿಕೆ ನೀಡಿದ್ದಾರೆ.

ಎಲ್ಲ ವಿದ್ಯಾರ್ಥಿನಿಲಯಗಳಲ್ಲಿ ಸಹಾಯವಾಣಿ ಸಮಾಜ ಕಲ್ಯಾಣ, ಹಿಂದುಳಿದ ಹಾಗೂ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ವ್ಯಾಪ್ತಿಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ವಿದ್ಯಾರ್ಥಿ ನಿಲಯಗಳಲ್ಲಿ ಸಹಾಯವಾಣಿ ಸಂಖ್ಯೆಯನ್ನು ಅನಾವರಣಗೊಳಿಸಲಾಗುವುದು. ವಿದ್ಯಾರ್ಥಿಗಳು ಯಾವುದಾದರೂ ವ್ಯವಸ್ಥೆಯಲ್ಲಿ ತೊಂದರೆಯಿದ್ದಲ್ಲಿ ಕರೆ ಮಾಡಬಹುದು ಎಂದು ಸಿಇಓ ತಿಳಿಸಿದರು.

ಅಣ್ಣೂರು ಗ್ರಾಮದಲ್ಲಿ ಅಂಗನವಾಡಿಗೆ ಭೇಟಿ ನೀಡಿ ಅಂಗನವಾಡಿಗಳು ಹೈಟೆಕ್ ರೂಪದಲ್ಲಿ ಮಕ್ಕಳು ಹಾಗೂ ಪೋಷಕರನ್ನು ಆಕರ್ಷಿಸುವ ರೀತಿ ಇರಬೇಕು. ಮಕ್ಕಳಿಗೆ ಪೌಷ್ಟಿಕ ಆಹಾರ ನೀಡಿ ಮಕ್ಕಳ ಉತ್ತಮ ಬೆಳವಣಿಗೆಯ ಬಗ್ಗೆ ಸದಾ ನಿಗಾ ವಹಿಸಬೇಕು ಎಂದರು.

ಭಾರತೀನಗರದ ಮಣಿಗೆರೆ ಗ್ರಾಮ ಪಂಚಾಯಿತಿಗೆ ಭೇಟಿ ನೀಡಿ ಬೂದು ನೀರು ತ್ಯಜ್ಯ ನಿರ್ವಹಣೆಯನ್ನು ಪರಿಶೀಲಿಸಿ, ಕಾಮಗಾರಿಯನ್ನು ಶೀಘ್ರವಾಗಿ ಪೂರ್ಣಗೊಳಿಸುವಂತೆ ತಿಳಿಸಿದರು.

ಮನರೇಗಾ ಯೋಜನೆಯಡಿ ಕ್ರಿಯಾ ಯೋಜನೆ ರೂಪಿಸಲಾಗಿದ್ದು, ಗ್ರಾಮೀಣ ಭಾಗದ ಜನರಿಗೆ ವರದಾನವಾಗಿರುವ ಮನರೇಗಾ ಯೋಜನೆಯನ್ನು ಪರಿಣಾಮಕಾರಿಯಾಗಿ ಅಧಿಕಾರಿಗಳು ಅನುಷ್ಠಾನ ಮಾಡಬೇಕು. ಯಾರೂ ಕೂಡ ವಲಸೆ ಹೋಗದಂತೆ ನೋಡಿಕೊಳ್ಳಬೇಕು ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.

ಪರಿಶೀಲನೆ ವೇಳೆ ಮದ್ದೂರು ತಾಲ್ಲೂಕು ಕಾರ್ಯನಿರ್ವಾಹಕ ಅಧಿಕಾರಿ ರಾಮಲಿಂಗಯ್ಯ ಸೇರಿದಂತೆ ಇನ್ನಿತರೆ ಅಧಿಕಾರಿಗಳು ಉಪಸ್ಥಿತರಿದ್ದರು.

ನಮ್ಮ ಸುದ್ದಿಗಳು ಇಷ್ಟವಾದರೆ ನುಡಿ ಕರ್ನಾಟಕ.ಕಾಂ (ಮಂಡ್ಯ ಡಿಜಿಟಲ್ ಮೀಡಿಯಾ) ಗೆ ದೇಣಿಗೆ ನೀಡಿ ಪ್ರೋತ್ಸಾಹಿಸಿ

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ