ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ಜಿಲ್ಲಾ ಘಟಕದ 2022-23ನೇ ಸಾಲಿನ ನೂತನ ಆಡಳಿತ ಮಂಡಳಿಯ ಅಧಿಕಾರ ಸ್ವೀಕಾರ ಹಾಗೂ ಅಭಿನಂದನಾ ಕಾರ್ಯಕ್ರಮ ಮೇ 5 ರಂದು ನಗರದ ಕರ್ನಾಟಕ ಸಂಘದ ಆವರಣದಲ್ಲಿರುವ ಕೆ.ವಿ.ಶಂಕರಗೌಡ ಶತಮಾನೋತ್ಸವ ಭವನದಲ್ಲಿ ನಡೆಯಲಿದೆ ಎಂದು ಪತ್ರಕರ್ತರ ಸಂಘದ ರಾಜ್ಯ ಪ್ರಧಾನ ಕಾರ್ಯದರ್ಶಿ ಮತ್ತಿಕೆರೆ ಜಯರಾಮ್ ತಿಳಿಸಿದರು.
ಸುದ್ದಿ ಗೋಷ್ಠಿ ನಡೆಸಿ ಮಾತನಾಡಿದ ಅವರು, ಮಧ್ಯಾಹ್ನ 2.30ಕ್ಕೆ ಆಯೋಜಿಸಿರುವ ಕಾರ್ಯಕ್ರಮವನ್ನು ಜಿಲ್ಲಾ ಉಸ್ತುವಾರಿ ಸಚಿವ ಕೆ.ಗೋಪಾಲಯ್ಯ ಉದ್ಘಾಟಿಸುವರು. ರೇಷ್ಮೆ ಹಾಗೂ ಯುವ ಸಬಲೀಕರಣ ಮತ್ತು ಕ್ರೀಡಾ ಸಚಿವ ಕೆ.ಸಿ.ನಾರಾಯಣಗೌಡ ಉಪಸ್ಥಿತರಿರುವರು ಎಂದು ಹೇಳಿದರು.
ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ಅಧ್ಯಕ್ಷತೆ ವಹಿಸಲಿದ್ದು, ಶಾಸಕ ಸಿ.ಎಸ್.ಪುಟ್ಟರಾಜು ಅಭಿನಂದಿಸುವರು. ವಿಧಾನ ಪರಿಷತ್ ಸದಸ್ಯ ದಿನೇಶ್ ಗೂಳಿಗೌಡ, ವಿಧಾನ ಪರಿಷತ್ ಮಾಜಿ ಸದಸ್ಯ ಮಧು ಜಿ.ಮಾದೇಗೌಡ, ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ಅಧ್ಯಕ್ಷ ಸಿ.ಪಿ.ಉಮೇಶ್ ಪ್ರಮಾಣ ಪತ್ರ ವಿತರಣೆ ಮಾಡುವರು ಎಂದು ತಿಳಿಸಿದರು.
ಜಿಲ್ಲಾಧಿಕಾರಿ ಎಸ್.ಅಶ್ವತಿ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ದಿವ್ಯಪ್ರಭು, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎನ್.ಯತೀಶ್ ವಿಶೇಷ ಆಹ್ವಾನಿತರಾಗಿ ಭಾಗವಹಿಸುವರು ಎಂದರು.
ಇದೇ ಸಂದರ್ಭದಲ್ಲಿ ನಿರ್ಗಮಿತ ಅಧ್ಯಕ್ಷ ನವೀನ್ ಚಿಕ್ಕಮಂಡ್ಯ, ಪ್ರಧಾನ ಕಾರ್ಯದರ್ಶಿ ಎಂ.ಕೆ.ಮೋಹನ್‌ರಾಜ್ ಹಾಗೂ ಚುನಾವಣಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸಿದ ಕೆ.ಎನ್.ರವಿ, ಉಪಚುನಾವಣಾಧಿಕಾರಿ ಶೇಷಣ್ಣ ಇವರನ್ನು ಅಭಿನಂದಿಸಲಾಗುವುದು ಎಂದು ತಿಳಿಸಿದರು.
ಗೋಷ್ಠಿಯಲ್ಲಿ ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯ ಪ್ರಧಾನ ಕಾರ್ಯದರ್ಶಿ ಕೆರಗೋಡು ಸೋಮಶೇಖರ್, ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಉಪಾಧ್ಯಕ್ಷ ಬಿ.ಪಿ.ಪ್ರಕಾಶ್, ಪ್ರಧಾನ ಕಾರ್ಯದರ್ಶಿ ಕೆ.ಎನ್.ನವೀನ್ ಕುಮಾರ್, ಖಜಾಂಚಿ ನಂಜುಂಡ ಹಾಗೂ ಕಾರ್ಯದರ್ಶಿಗಳಾದ ಮಂಜುಳಾ ಕಿರುಗಾವಲು, ಆನಂದ ಹಾಜರಿದ್ದರು.