Friday, November 20, 2026

ಪ್ರಾಯೋಗಿಕ ಆವೃತ್ತಿ

ಮೈಕ್ರೋ ಫೈನಾನ್ಸ್ ಸಾಲ ವಸೂಲಿಗೆ ರೌಡಿಗಳನ್ನು ಬಳಸುತ್ತಿದ್ದೀರಾ…? ; ಸಿಎಂ ಸಿದ್ದರಾಮಯ್ಯ ಕಿಡಿ

ರಾಜ್ಯದಲ್ಲಿ ಮೈಕ್ರೋ ಫೈನಾನ್ಸ್ ಕಂಪನಿಗಳ ಕಾರ್ಯಾಚರಣೆ ಮತ್ತು ಪರಿಣಾಮಗಳ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಗೃಹ ಕಚೇರಿ ಕೃಷ್ಣದಲ್ಲಿ ಸಭೆ ನಡೆಯುತ್ತಿದ್ದು, ಈ ಸಭೆಯಲ್ಲಿ ಸಿದ್ದರಾಮಯ್ಯ ಅವರು ಮೈಕ್ರೋ ಫೈನಾನ್ಸ್ ಕಂಪನಿಗಳ ಅಧಿಕಾರಿಗಳಿಗೆ ಬಿಸಿ ಮುಟ್ಟಿಸಿದ್ದಾರೆ.

ನಿಮ್ಮ ಸಿಬ್ಬಂದಿ ನಿಯಮ ಬಾಹಿರವಾಗಿ ಸಾಲ ವಸೂಲಿಗೆ ಇಳಿಯುತ್ತಿರುವುದನ್ನು ನಿಯಂತ್ರಿಸಲು ಏನು ಮಾಡಿದ್ದೀರಿ? ಅಂಥಾ ಸಿಬ್ಬಂದಿ ವಿರುದ್ಧ ನಿಮ್ಮ ಸಂಸ್ಥೆಗಳಿಂದ ಏನು ಕ್ರಮ ಕೈಗೊಂಡಿದ್ದೀರಿ: ನೋಂದಣಿ ಆಗಿ ಪರವಾನಗಿ ಪಡೆದಿರುವ ಮೈಕ್ರೋ ಫೈನಾನ್ಸ್ ಕಂಪನಿಗಳ ಮುಖ್ಯಸ್ಥರನ್ನು ಸಿದ್ದರಾಮಯ್ಯ ಖಾರವಾಗಿ ಪ್ರಶ್ನಿಸಿದದರು.

ಸಾಲಗಾರರ ಮನೆ ಜಪ್ತಿ ಮಾಡುವ ಮೊದಲು ನೀವು ನ್ಯಾಯಾಲಯದಿಂದ ಅನುಮತಿ ಪಡೆದಿದ್ದೀರಾ? ಕಾನೂನು ಕೈಗೆತ್ತಿಕೊಳ್ಳಲು ನಿಮ್ಮ ಸಿಬ್ಬಂದಿಗೆ ಅನುಮತಿ ಕೊಟ್ಟವರು ಯಾರು? ಸಾಲ ವಸೂಲಿಗೆ ರೌಡಿಗಳನ್ನು ಬಳಸುತ್ತಿದ್ದೀರಾ ? ರಿಸರ್ವ್ ಬ್ಯಾಂಕಿನ ಷರತ್ತು ಮತ್ತು ನಿಬಂಧನೆಗಳನ್ನು ಸಾಲಗಾರರಿಗೆ ಅವರ ಆಡು ಭಾಷೆಯಲ್ಲಿ ಅರ್ಥ ಮಾಡಿಸಿದ್ದೀರಾ?, RBI ನಿಯಮ ಮೀರಿ ಸಾಲ ಕೊಡುತ್ತಿದ್ದೀರಾ ? ಮರುಪಾವತಿಯ ಕೆಪಾಸಿಟಿ ಗಮನಿಸದೆ ಒಬ್ಬರೇ ಸಾಲಗಾರರಿಗೆ ಪದೇ ಪದೇ ಸಾಲ ಕೊಡುತ್ತಿರುವುದು ಏಕೆ? ಎಂದು ಹೀಗೆ ಸಾಲು ಸಾಲು ಪ್ರಶ್ನೆಗಳನ್ನು ಹಾಕಿದರು.

ಸಾಲಗಾರರಿಗೆ ಸಾಲ ಕೊಡುವ ಮೊದಲು ಆಧಾರ್ KYC ಮಾಡಿಸುತ್ತಿಲ್ಲ ಏಕೆ ? ಇದನ್ನು ಮಾಡಿಸಿದ್ದರೆ ಒಬ್ಬರೇ ಸಾಲಗಾರರಿಗೆ ಪದೇ ಪದೇ ಸಾಲ ಕೊಡುವುದು ತಪ್ಪುತ್ತಿತ್ತು, ನಿಮ್ಮ ವ್ಯವಹಾರ ಹೆಚ್ಚಿಸಿಕೊಳ್ಳಲು ನಿಯಮ ಮೀರಿ ಒಬ್ಬರೇ ಸಾಲಗಾರರಿಗೆ ಮೇಲಿಂದ ಮೇಲೆ ಸಾಲ ಕೊಡುತ್ತಿದ್ದೀರಿ. ಸಾಲ ತೀರಿಸಲು ಸಾಧ್ಯವಾಗದಿದ್ದಾಗ ನಿಯಮ ಬಾಹಿರ ಕ್ರಮಕ್ಕೆ ಮುಂದಾಗುತ್ತಿದ್ದೀರಿ. ಇದನ್ನು ನಮ್ಮ ಸರ್ಕಾರ ಸಹಿಸುವುದಿಲ್ಲ ಎಂದು ಎಚ್ಚರಿಕೆ ನೀಡಿದರು.

ಆರ್ ಬಿ ಐ ನಿಯಮಗಳನ್ನು ಉಲ್ಲಂಘಿಸಿ ಸಾಲ ನೀಡಿದ ಮೈಕ್ರೋ ಫೈನಾನ್ಸ್ ಕಂಪನಿಗಳ ಪರವಾನಗಿ ರದ್ದುಗೊಳಿಸಲು ಏನು ಕ್ರಮ ಕೈಗೊಂಡಿದ್ದೀರಿ?: ಆರ್ ಬಿ ಐ ಅಧಿಕಾರಿಗಳಿಗೆ ಪ್ರಶ್ನಿಸಿದ ಅವರು, ಒಬ್ಬರೇ ಸಾಲಗಾರರು ಬೇರೆ ಬೇರೆ ಗುರುತಿನ ಚೀಟಿ ( ಐ ಡಿ ಕಾರ್ಡ್ ಗಳು) ಕೊಟ್ಟು ಸಾಲ ಪಡೆದಿರುವುದು ನಿಮ್ಮ ದಾಖಲೆಗಳಲ್ಲಿದೆ. ಆದರೆ ಸಾಲಗಾರರು ಈ ರೀತಿ ದುರುಪಯೋಗ ಪಡಿಸಿಕೊಳ್ಳುವುದನ್ನು ತಪ್ಪಿಸಲು ಯಾವ ಪದ್ಧತಿ ಪಾಲಿಸುತ್ತಿದ್ದೀರಿ? ಎಂದು ಗುಡುಗಿದರು.

ಆರ್ ಬಿ ಐ ಪರವಾನಗಿ ಪಡೆದಿರುವ ಕಂಪನಿಗಳು ನಿಯಮಬಾಹಿರ ವಸೂಲಿಗೆ ಇಳಿದಿಲ್ಲ, ಆ ರೀತಿ ಮಾಡುತ್ತಿರುವುದು ಪರವಾನಗಿ ಇಲ್ಲದ ಕಂಪನಿಗಳು ಎನ್ನುವ ಉತ್ತರ ಮೈಕ್ರೋ ಕಂಪನಿಯವರಿಂದ ಬಂದಾಗ ಸಚಿವ ಕೃಷ್ಣಬೈರೇಗೌಡ, ಎಚ್.ಕೆ.ಪಾಟೀಲ್, ಡಿಸಿಎಂ ಡಿ.ಕೆ.ಶಿವಕುಮಾರ್  ಅವರು ತಕರಾರು ವ್ಯಕ್ತಪಡಿಸಿ,  ಪರವಾನಗಿ ಇದ್ದವರೇ ಈ ರೀತಿ ಮಾಡುತ್ತಿದ್ದಾರೆ ಎನ್ನುವ ವರದಿ ನಮಗೆ ಗ್ರೌಂಡ್ ರಿಪೋರ್ಟ್ ನಲ್ಲಿ ಬಂದಿದೆ. ಆದ್ದರಿಂದ ಬಡ ಜನರ ಹಿತಕಾಯಲು ನಾವು  ನಿಯಮ ಉಲ್ಲಂಘಿಸುವ ಕಂಪನಿ ಎಂ.ಡಿ ಗಳ ವಿರುದ್ಧ ಕ್ರಮ ಕೈಗೊಳ್ಳುವುದು ಅನಿವಾರ್ಯವಾಗುತ್ತದೆ ಎಂದು ಗುಡುಗಿದರು.

ಮಹಿಳೆಯರ, ವೃದ್ಧರ ಮೇಲೆ ದಬ್ಬಾಳಿಕೆ ನಡೆಸಿರುವ ಪತ್ರಿಕಾ ವರದಿಗಳು ದಿನ ನಿತ್ಯ ಬರುತ್ತಿವೆ. ನಾವು ಇದನ್ನೆಲ್ಲಾ ಸಹಿಸುವುದಿಲ್ಲ. ನನ್ನ ಜನರ ರಕ್ಷಣೆಗೆ ನಾನು ಕಠಿಣ ಕ್ರಮ ಕೈಗೊಳ್ಳುತ್ತೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಭೆಯಲ್ಲೇ ಕಠಿಣ ಎಚ್ಚರಿಕೆ ನೀಡಿದರು.

ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಗೃಹ ಸಚಿವ ಜಿ.ಪರಮೇಶ್ವರ್, ಕಾನೂನು ಸಚಿವ ಎಚ್.ಕೆ. ಪಾಟೀಲ್, ಕಂದಾಯ ಸಚಿವ ಕೃಷ್ಣಬೈರೇಗೌಡ, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಗೋವಿಂದರಾಜು, ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್, ಎಸಿಎಸ್ ಅತೀಕ್ ಅಹಮದ್, ರಾಜ್ಯ ಪೊಲೀಸ್ ಮಹಾ ನಿರ್ದೇಶಕ ಅಲೋಕ್ ಮೋಹನ್ ಸೇರಿ ಗೃಹ ಇಲಾಖೆ, ಒಳಾಡಳಿತ, ಕಂದಾಯ, ಗುಪ್ತಚರ ಇಲಾಖೆಗಳ ಹಿರಿಯ ಅಧಿಕಾರಿಗಳು ಸಭೆಯಲ್ಲಿ ಉಪಸ್ಥಿತರಿದ್ದಾರೆ.

ನಮ್ಮ ಸುದ್ದಿಗಳು ಇಷ್ಟವಾದರೆ ನುಡಿ ಕರ್ನಾಟಕ.ಕಾಂ (ಮಂಡ್ಯ ಡಿಜಿಟಲ್ ಮೀಡಿಯಾ) ಗೆ ದೇಣಿಗೆ ನೀಡಿ ಪ್ರೋತ್ಸಾಹಿಸಿ

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ