ವರದಿ : ಪ್ರಭು ವಿ ಎಸ್
ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಕುರಿತು ಅವಹೇಳನಕಾರಿ ಹೇಳಿಕೆ ನೀಡಿರುವ ಉನ್ನತ ಶಿಕ್ಷಣ ಸಚಿವ ಅಶ್ವತ್ ನಾರಾಯಣ್ ಅವರನ್ನು ಪಕ್ಷದ ಹೈಕಮಾಂಡ್ ಕೂಡಲೇ ಸಚಿವ ಸ್ಥಾನದಿಂದ ವಜಾಗೊಳಿಸಿ ಕ್ರಿಮಿನಲ್ ಪ್ರಕರಣ ದಾಖಲಿಸಬೇಕೆಂದು ಮಾಜಿ ಸಚಿವ ಎನ್ ಚಲುವರಾಯಸ್ವಾಮಿ ಒತ್ತಾಯಿಸಿದರು.
ಮದ್ದೂರು ತಾಲೂಕಿನ ಕೊಪ್ಪ ಹೋಬಳಿಯ ಬೆಕ್ಕಳಲೆ ಗ್ರಾಮದಲ್ಲಿ ನಾಗಮಂಗಲ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ವಿವಿಧ ಗ್ರಾಮಗಳ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಅವರು, ವಿಪಕ್ಷ ನಾಯಕ ಸಿದ್ದರಾಮಯ್ಯ ಅವರ ವಿರುದ್ಧ ಸಚಿವ ಅಶ್ವತ್ ನಾರಾಯಣ್ ಮಾತನಾಡಿರುವುದು ಖಂಡನೀಯ. ಬಿಜೆಪಿ ಪಕ್ಷದ ಹೈಕಮಾಂಡ್ ಸೇರಿದಂತೆ ರಾಜ್ಯಪಾಲರು ಅಶ್ವತ್ ನಾರಾಯಣ್ ವಿರುದ್ಧ ಶಿಸ್ತಿನ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.

ಸದಾ ವಿರೋಧ ಪಕ್ಷಗಳ ತಪ್ಪುಗಳನ್ನು ಹುಡುಕಲು ಯತ್ನಿಸುವ ರಾಷ್ಟ್ರೀಯ ಬಿಜೆಪಿ ಪ್ರಧಾನ ಕಾರ್ಯದರ್ಶಿ ಸಿಟಿ ರವಿ, ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್, ಅಶ್ವತ್ ನಾರಾಯಣ್ ಹೇಳಿದ ಬಗ್ಗೆ ಯಾವುದೇ ಪ್ರತಿಕ್ರಿಯೆ ಮುಂದಾಗದೆ ಮೌನಕ್ಕೆ ಶರಣಾಗಿದ್ದಾರೆ ಎಂದು ಕಿಡಿಕಾರಿದರು.
ನಾಗಮಂಗಲ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಕಳೆದ ಐದು ವರ್ಷಗಳಿಂದ ಅಭಿವೃದ್ಧಿ ಕಾರ್ಯಗಳು ಕುಂಠಿತ ವಾಗಿದ್ದು, ಶಾಸಕರು ಕೇವಲ ಗುದ್ದಲಿ ಪೂಜೆಗಷ್ಟೆ ಸೀಮಿತವಾಗಿದ್ದಾರೆ ಎಂದು ಟೀಕಿಸಿದರು.
ನಿರಾಸದಾಯಕ ಬಜೆಟ್
ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಮಂಡಿಸಿದ ರಾಜ್ಯ ಬಜೆಟ್ ಕೇವಲ ಚುನಾವಣೆ ಬಜೆಟ್ ಆಗಿದ್ದು, ಕಳೆದ ಎರಡು ವರ್ಷಗಳಿಂದ ಅಧಿಕಾರದಲ್ಲಿರುವ ಬೊಮ್ಮಾಯಿ ಅವರು ಸಮರ್ಪಕ ಅನುದಾನ ಬಿಡುಗಡೆ ಮಾಡದೇ ಕೇವಲ ಚುನಾವಣೆ ಗಿಮಿಕ್ ಮಾಡುತ್ತಿದ್ದಾರೆಂದು ಟೀಕಿಸಿದರು.
ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದ ದಿನದಿಂದಲೂ ಶಾಶ್ವತ ಯೋಜನೆಗಳನ್ನು ಅನುಷ್ಠಾನಗೊಳಿಸಿದೆ ಕೇವಲ ಅಧಿಕಾರ ಉಳಿಸಿಕೊಳ್ಳುವುದರಲ್ಲಿ ದಿನದೊಡುತ್ತಿದೆ ಎಂದರು.
ನಾಯಕರು ನಿರ್ಧರಿಸುತ್ತಾರೆ
ಮದ್ದೂರು ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಆಯ್ಕೆ ಬಗ್ಗೆ ಹೈಕಮಾಂಡ್ ನಾಯಕರು ನಿರ್ಧಾರ ಕೈಗೊಳ್ಳುತ್ತಾರೆ. ಎಸ್.ಗುರುಚರಣ್ ಹಾಗೂ ಕದಲೂರು ಉದಯ್ ಇವರಲ್ಲಿ ಯಾರನ್ನು ಆಯ್ಕೆ ಮಾಡಬೇಕೆಂದು ನಾಯಕರೇ ನಿರ್ಧಾರ ಕೈಗೊಳ್ಳಲಿದ್ದಾರೆಂದರು.
ಸಭೆಯಲ್ಲಿ ಮುಖಂಡರಾದ ಬಿ ಎಂ ರಘು, ಡಿಸಿಸಿ ಬ್ಯಾಂಕ್ ನಿರ್ದೇಶಕ ಜೋಗಿಗೌಡ, ಯುವ ಮುಖಂಡ ಸಚಿನ್ ಚಲುವರಾಯಸ್ವಾಮಿ, ನಾಗಮಂಗಲ ಗ್ರಾಮಾಂತರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕೆ ದಿವಾಕರ್, ಮುಖಂಡರಾದ ಕುಮಾರ್ ಕೊಪ್ಪ, ಕರಿಯಪ್ಪ ಸೇರಿದಂತೆ ಇತರರು ಹಾಜರಿದ್ದರು




