Monday, May 20, 2024

ಪ್ರಾಯೋಗಿಕ ಆವೃತ್ತಿ

ಸಚಿವರಿಂದ ನೀತಿ ಸಂಹಿತೆ ಉಲ್ಲಂಘನೆ : ಜಿ.ಪಂ.ಸಿಇಓ ವರದಿ

ದಕ್ಷಿಣ ಪದವೀಧರರ ಕ್ಷೇತ್ರದ ಚುನಾವಣೆ ಸಂಬಂಧ ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್. ಅಶ್ವಥ್ ನಾರಾಯಣ್ ಅವರು ಮಾದರಿ ನೀತಿ ಸಂಹಿತೆ ಉಲ್ಲಂಘಿಸಿ ಪ್ರಚಾರ ನಡೆಸಿರುವುದು ಮೇಲ್ನೋಟಕ್ಕೆ ಕಂಡುಬಂದಿದ್ದು, ಮುಂದಿನ ಕ್ರಮಕ್ಕಾಗಿ ವಿಚಾರಣೆ ವೇಳೆ ಲಭ್ಯವಾದ ದಾಖಲೆಗಳ ಸಹಿತ ವರದಿಯನ್ನು ಜಿಲ್ಲಾ ಮಟ್ಟದ ಮಾದರಿ ನೀತಿ ಸಂಹಿತೆ ತಂಡದ ಮುಖ್ಯಸ್ಥರಾದ ಜಿ.ಪಂ.ಸಿಇಓ ಜಿಲ್ಲಾಧಿಕಾರಿಗಳಿಗೆ ಸಲ್ಲಿಸಿದ್ದಾರೆ.

ದಿನಾಂಕ:12-05-2022 ರಿಂದ ಮಾದರಿ ನೀತಿ ಸಂಹಿತೆ ಜಾರಿಯಾಗಿದ್ದು, ಈ ಸಂದರ್ಭದಲ್ಲಿ ದಿನಾಂಕ:16-05-2022 ರಂದು ಸರ್ಕಾರದ ಉನ್ನತ ಶಿಕ್ಷಣ ಸಚಿವರಾದ ಡಾ.ಸಿ.ಎನ್. ಅಶ್ವಥ್‌ನಾರಾಯಣ್‌ರವರು ಮಂಡ್ಯ ನಗರದ ಮಿಮ್ಸ್, ಮಹಿಳಾ ಸರ್ಕಾರಿ ಕಾಲೇಜು, ಮಾಂಡವ್ಯ ಸಮೂಹ ಸಂಸ್ಥೆ ಹಾಗೂ ಪಿ.ಇ.ಎಸ್ ಕಾಲೇಜುಗಳಿಗೆ ಭೇಟಿ ನೀಡಿ, ಕಾಲೇಜು ಗಳಲ್ಲಿ ಸಭೆಗಳನ್ನು ಆಯೋಜಿಸುವುದರ ಮೂಲಕ ಬಿಜೆಪಿ ಪಕ್ಷದ ಅಭ್ಯರ್ಥಿ ಹಾಗೂ ಕಾರ್ಯಕರ್ತರ ಜೊತೆಗೂಡಿ ಪ್ರಚಾರ ನಡೆಸಿ ಮತದಾರರ ಮೇಲೆ ಪ್ರಭಾವ ಬೀರಿ, ಚುನಾವಣಾ ನೀತಿ ಸಂಹಿತೆಯನ್ನು ಉಲ್ಲಂಘಿಸಿದ್ದಾರೆ. ಅವರ ವಿರುದ್ಧ ಕಾನೂನು ರೀತ್ಯಾ ಕ್ರಮ ಕೈಗೊಳ್ಳಬೇಕೆಂದು ಮಂಡ್ಯ ಜಿಲ್ಲಾ ಕಾಂಗ್ರೆಸ್ ಸಮಿತಿಯ ಪ್ರಧಾನ ಕಾರ್ಯದರ್ಶಿಯವರು ದೂರು ನೀಡಿದ್ದರು.

ಈ ಸಂಬಂಧ ತನಿಖೆ ನಡೆಸಿದ ಮಂಡ್ಯ ಜಿಲ್ಲಾ ಮಟ್ಟದ ಮಾದರಿ ನೀತಿ ಸಂಹಿತೆ ತಂಡದ ಮುಖ್ಯಸ್ಥರಾದ ಜಿ.ಪಂ‌.ಸಿಇಓ ಅವರು, ಮಂಡ್ಯ ನಗರದ ಮಿಮ್ಸ್, ಮಹಿಳಾ ಸರ್ಕಾರಿ ಕಾಲೇಜು, ಮಾಂಡವ್ಯ ಸಮೂಹ ಸಂಸ್ಥೆ ಹಾಗೂ ಪಿ.ಇ.ಎಸ್. ಕಾಲೇಜುಗಳಿಗೆ ಭೇಟಿ ನೀಡಿ, ಹೇಳಿಕೆ ಹಾಗೂ ವರದಿಯನ್ನು ಪಡೆದಿದ್ದಾರೆ.

ಬಿಜೆಪಿ ಅಭ್ಯರ್ಥಿ ಪರ ಮತಯಾಚನೆ ಮಾಡುತ್ತಿರುವ ಸಚಿವ ಆಶ್ವಥ್ ನಾರಾಯಣ್

ಈ ವೇಳೆ ಉನ್ನತ ಶಿಕ್ಷಣ ಸಚಿವರಾದ ಡಾ.ಸಿ.ಎನ್.ಅಶ್ವಥ್‌ನಾರಾಯಣ್ ರವರ ಕಚೇರಿಯಿಂದ ಮೇ 15 ರಂದು ಹೊರಡಿಸಲಾಗಿದ್ದ ತಾತ್ಕಾಲಿಕ ಪ್ರವಾಸ ಕಾರ್ಯಕ್ರಮ ಪಟ್ಟಿಯಲ್ಲಿ ಚುನಾವಣೆ ಸಂಬಂಧಿತ ಕಾರ್ಯಕ್ರಮಗಳನ್ನು ಸೇರ್ಪಡೆ ಮಾಡಿರುವುದು ಹಾಗೂ ಸರ್ಕಾರಿ ಶಿಕ್ಷಣ ಸಂಸ್ಥೆಗಳನ್ನು ಬಳಸಿ ಚುನಾವಣೆ ಪ್ರಚಾರ ಮಾಡಿರುವುದು ತಿಳಿದು ಬಂದಿದೆ. ಇದು ಚುನಾವಣೆ ಮಾದರಿ ನೀತಿ ಸಂಹಿತೆ ಉಲ್ಲಂಘನೆಯಾಗಿರುವುದು ಮೇಲ್ನೋಟಕ್ಕೆ ಕಂಡು ಬಂದಿರುತ್ತದೆ.

ಸದರಿ ವಿಷಯವನ್ನು ತಮ್ಮ ಅವಗಾಹನೆಗೆ ಹಾಗೂ ಮುಂದಿನ ಕ್ರಮಕ್ಕಾಗಿ ಸಲ್ಲಿಸುತ್ತಾ, ಸಂಬಂಧಪಟ್ಟ ಉಲ್ಲೇಖಿತ ಪತ್ರಗಳನ್ನು ಲಗತ್ತಿಸಿದೆ ಎಂದು ಮಂಡ್ಯ ಜಿಲ್ಲಾಧಿಕಾರಿಗಳಿಗೆ ಸಲ್ಲಿಸಿದ ವರದಿಯಲ್ಲಿ ಮಂಡ್ಯ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿಯೂ ಆಗಿರುವ ಮಂಡ್ಯ ಜಿಲ್ಲಾ ಮಟ್ಟದ ಮಾದರಿ ನೀತಿ ಸಂಹಿತೆ ತಂಡದ ಮುಖ್ಯಸ್ಥರು ಜಿಲ್ಲಾಧಿಕಾರಿಗಳಿಗೆ ನೀಡಿರುವ ವರದಿಯಲ್ಲಿ ಉಲ್ಲೇಖಿಸಿದ್ದಾರೆ.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!