ಕರ್ನಾಟಕದಲ್ಲಿ ನೂತನವಾಗಿ ಅಸ್ವಿತ್ವಕ್ಕೆ ಬಂದಿರುವ ಸಿಎಂ ಸಿದ್ದರಾಮಯ್ಯ ನೇತೃತ್ವದ ಸರ್ಕಾರದಲ್ಲಿ ಮಂಡ್ಯ ಜಿಲ್ಲೆಯ ಇಬ್ಬರು ಕಾಂಗ್ರೆಸ್ ನಾಯಕರಿಗೆ ಸಚಿವ ಸ್ಥಾನ ದೊರೆಯಲಿದೆ ಎಂಬ ಮಾತು ಕಾಂಗ್ರೆಸ್ ಪಡಸಾಲೆಯಲ್ಲಿ ಕೇಳಿ ಬರುತ್ತಿದೆ.
ದೆಹಲಿಯಲ್ಲಿ ಕರ್ನಾಟಕ ಕಾಂಗ್ರೆಸ್ ಸರ್ಕಾರದ ಸಂಪುಟ ರಚನೆ ಕಸರತ್ತು ನಡೆಯುತ್ತಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆಸಿ ವೇಣುಗೋಪಾಲ್ ಜೊತೆ ಸಭೆ ನಡೆಸುತ್ತಿದ್ದಾರೆ. ಈ ಸಂದರ್ಭದಲ್ಲಿ ರಾಜ್ಯ ಕಾಂಗ್ರೆಸ್ ನಾಯಕರು ಸಂಭವನೀಯ ಸಚಿವರ ಪಟ್ಟಿ ಮಾಡಿದ್ದು, ಮಂಡ್ಯ ಜಿಲ್ಲೆಯಿಂದ ಒಕ್ಕಲಿಗ ನಾಯಕ ಹಾಗೂ ನಾಗಮಂಗಲ ಶಾಸಕ ಎನ್.ಚಲುವರಾಯಸ್ವಾಮಿ ಹಾಗೂ ದಲಿತ ನಾಯಕ ಹಾಗೂ ಮಳವಳ್ಳಿ ಶಾಸಕ ಪಿ.ಎಂ.ನರೇಂದ್ರಸ್ವಾಮಿ ಅವರು ಮಂತ್ರಿಗಿರಿ ದೊರಯುವ ಸಾಧ್ಯತೆ ಇದೆ ಎಂಬ ನಿರೀಕ್ಷೆ ಇದೆ ಎನ್ನಲಾಗಿದೆ.
ಉಳಿದಂತೆ ರಾಜ್ಯಾದ್ಯಂತ ಈಶ್ವರ ಖಂಡ್ರೆ, ಲಕ್ಷ್ಮೀ ಹೆಬ್ಬಾಳ್ಕರ್, ಶಿವಾನಂದ ಪಾಟೀಲ್, ಶರಣಬಸಪ್ಪ ದರ್ಶನಾಪುರ, ಬಸವರಾಜ ರಾಯರೆಡ್ಡಿ, ಡಾ.ಹೆಚ್.ಸಿ.ಮಹದೇವಪ್ಪ, ಕೆ.ವೆಂಕಟೇಶ್, ಎಸ್ಎಸ್ ಮಲ್ಲಿಕಾರ್ಜುನ, ಶಿವರಾಜ ತಂಗಡಗಿ, ಭೈರತಿ ಸುರೇಶ್, ಕೃಷ್ಣ ಭೈರೇಗೌಡ, ರಹೀಂ ಖಾನ್, ಡಾ.ಅಜಯ್ ಸಿಂಗ್, ಸಿ.ಪುಟ್ಟರಂಗಶೆಟ್ಟಿ, ಎಂ.ಸಿ.ಸುಧಾಕರ್, ಡಿ.ಸುಧಾಕರ್, ಹೆಚ್.ಕೆ.ಪಾಟೀಲ್, ಕೆ.ಎನ್.ರಾಜಣ್ಣ ಅಥವಾ ಬಿ.ನಾಗೇಂದ್ರ ಅವರಿಗೆ ಸಚಿವ ಸ್ಥಾನ ಸಿಗುವ ಸಾಧ್ಯತೆ ಇದ್ದು, ನಾಳೆ ಅಥವಾ ನಾಡಿದ್ದು ಪ್ರಮಾಣವಚನ ಸ್ವೀಕರಿಸುವ ಸಾಧ್ಯತೆ ಇದೆ.
ಸಂಭವನೀಯ ಸಚಿವರ ಪಟ್ಟಿಯ ಭವಿಷ್ಯ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಮೇಲೆ ನಿಂತಿದೆ. ಸಿದ್ದರಾಮಯ್ಯ ಮತ್ತು ಡಿಕೆ ಶಿವಕುಮಾರ್ ನೇತೃತ್ವದಲ್ಲಿ ನಡೆಯುತ್ತಿರುವ ಸಭೆಯಲ್ಲಿ ಸಂಭವನೀಯ ಸಚಿವರ ಪಟ್ಟಿ ಸಿದ್ಧಪಡಿಸಲಾಗಿದ್ದು, ನಂತರ ಈ ಪಟ್ಟಿ ಮಲ್ಲಿಕಾರ್ಜುನ ಖರ್ಗೆ ಅವರ ಕೈ ಸೇರಲಿದೆ. ಬಳಿಕ ಮೂರ್ನಾಲ್ಕು ಹೆಸರುಗಳು ಬದಲಾಗುವ ಸಾಧ್ಯತೆಯೂ ಇದೆ.




