Thursday, May 16, 2024

ಪ್ರಾಯೋಗಿಕ ಆವೃತ್ತಿ

ಮುಸ್ಲಿಂ ಸಮುದಾಯ ಹತ್ತಿಕ್ಕಲು ಮೀಸಲಾತಿ ರದ್ದು: ಎಸ್ಡಿಪಿಐ ಆಕ್ರೋಶ

ರಾಜ್ಯ ಬಿಜೆಪಿ ಸರ್ಕಾರ ಮುಸ್ಲಿಂ ಸಮುದಾಯವನ್ನು ಹತ್ತಿಕ್ಕುವ ಭಾಗವಾಗಿ 2(ಬಿ) ಅಡಿಯಲ್ಲಿ ಮುಸ್ಲಿಂ ಸಮುದಾಯಕ್ಕಿದ್ದ ಮೀಸಲಾತಿಯನ್ನು ರದ್ದುಗೊಳಿಸಿದೆ ಎಂದು ಆರೋಪಿಸಿ ಎಸ್ಡಿಪಿಐನ ನೂರಾರು ಕಾರ್ಯಕರ್ತರು ಬಿಜೆಪಿ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸಿದರು.

ಮಂಡ್ಯ ನಗರದ ವಿಶ್ವೇಶ್ವರಯ್ಯ ಪ್ರತಿಮೆ ಬಳಿ ಜಮಾವಣೆಗೊಂಡ ನೂರಾರು ಎಸ್ಡಿಪಿಐ ಕಾರ್ಯಕರ್ತರು ಬಿಜೆಪಿ ಸರ್ಕಾರದ ವಿರುದ್ಧ ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.

ಬಿಜೆಪಿ ಸರ್ಕಾರ ಮಾರ್ಚ್ 24ರಂದು ನಡೆದ ಸಂಪುಟ ಸಭೆಯಲ್ಲಿ ಮುಸ್ಲಿಂ ಸಮುದಾಯಕ್ಕಿದ್ದ 2(ಬಿ) ಮೀಸಲಾತಿಯನ್ನು ರದ್ದುಪಡಿಸಿರುವುದು, ಅಸಂವಿಧಾನಿಕ ಹಾಗೂ ಅವೈಜ್ಞಾನಿಕ. ಇದೊಂದು ನಿರ್ದಿಷ್ಟ ಸಮುದಾಯವನ್ನು ಗುರಿಯಾಗಿಸಿಕೊಂಡು ಮಾಡಿರುವ ಉದ್ದೇಶಿತ ದಾಳಿಯಾಗಿದೆ ಎಂದು ಕಿಡಿಕಾರಿದರು.

ಸಂವಿಧಾನದಲ್ಲಿ ಧರ್ಮ ಆಧಾರಿತ ಮೀಸಲಾತಿ ಇಲ್ಲದಿರುವುದರಿಂದ 2(ಬಿ) ಪ್ರವರ್ಗದಡಿಯಲ್ಲಿ ಇತರೆ ಹಿಂದುಳಿದ ವರ್ಗಗಳಂತೆ ಕರ್ನಾಟಕದ ಮುಸ್ಲಿಂ ಸಮುದಾಯ ಕೂಡ ಸಾಮಾಜಿಕವಾಗಿ ಮತ್ತು ಶೈಕ್ಷಣಿಕವಾಗಿ ಹಿಂದುಳಿದ ವರ್ಗವೆಂದು ವೈಜ್ಞಾನಿಕ ಅಧ್ಯಯನದ ಮೂಲಕ ಗುರುತಿಸಿ 2(ಬಿ) ಮೀಸಲಾತಿ ನೀಡಲಾಗಿತ್ತು.

ಸ್ವಾತಂತ್ರ್ಯ ನಂತರ ನಾಗನಗೌಡ ಸಮಿತಿ, ವೆಂಕಟಸ್ವಾಮಿ ಆಯೋಗ ಮತ್ತು 1990 ರ ಚಿನ್ನಪ್ಪ ರೆಡ್ಡಿ ಆಯೋಗ ಕೂಡ ಮುಸ್ಲಿಮರನ್ನು ಹಿಂದುಳಿದ ವರ್ಗಗಳಿಗೆ ಸೇರಿಸಿರುವುದನ್ನು ನಾವು ಕಾಣಬಹುದು. ವಾಸ್ತವಾಂಶ ಹೀಗಿದ್ದರೂ ಸಹ ಮುಸ್ಲಿಂ ಸಮುದಾಯದ ಅಭಿವೃದ್ಧಿಗೆ ತಡೆಯೊಡ್ಡುವ,ಅವರನ್ನು ಮುಖ್ಯವಾಹಿನಿಗೆ ಬರದಂತೆ ನೋಡಿ ಕೊಳ್ಳುವ ಪಡ್ಯಂತ್ರದ ಮುಂದುವರಿದ ಭಾಗವಾಗಿ 2(ಬಿ) ಮೀಸಲಾತಿ ರದ್ದು ಪಡಿಸಿರುವುದು ಸ್ಪಷ್ಟವಾಗಿದೆ. ಸಂವಿಧಾನದ ಆಶಯಗಳಂತೆ ಸರ್ಕಾರ ಆಡಳಿತ ನಡೆಸಬೇಕೇ ಹೊರತು ತನ್ನ ಗುಪ್ತ ಅಜೆಂಡಾವನ್ನು ಜಾರಿಗೊಳಿಸಲು ಅಲ್ಲ. ಈ ನಿಟ್ಟಿನಲ್ಲಿ ಮುಸ್ಲಿಂ ಸಮುದಾಯಕ್ಕೆ ನಿಗದಿಯಾಗಿದ್ದ, 2(ಬಿ) ಮೀಸಲಾತಿಯನ್ನು ಮರು ಸ್ಥಾಪಿಸಬೇಕೆಂದು ಈ ಮೂಲಕ ಆಗ್ರಹಿಸಿದರು.

ಹಿಂದುಳಿದ ವರ್ಗಗಳ ಪಟ್ಟಿಯಲ್ಲಿರುವ ಮುಸ್ಲಿಮರ ಹಿತ ದೃಷ್ಟಿಯಿಂದ ಸರ್ಕಾರ ಕರ್ತವ್ಯ ನಿರ್ವಹಿಸಬೇಕೆಂದು ಆಗ್ರಹಿಸಿದ ಪ್ರತಿಭಟನಾಕಾರರು ಈ ಬಗ್ಗೆ ರಾಜ್ಯಪಾಲರು ಸರ್ಕಾರಕ್ಕೆ ಸೂಕ್ತ ನಿರ್ದೇಶನ ನೀಡಬೇಕೆಂದು ಜಿಲ್ಲಾಧಿಕಾರಿಗಳ ಮೂಲಕ ಮನವಿ ಪತ್ರ ಸಲ್ಲಿಸಿದರು.

ಎಸ್.ಡಿ.ಪಿ.ಐ ಅಧ್ಯಕ್ಷರು ಸಾದತ್ ಪಾಷ, ಎಸ್‌.ಡಿ.ಪಿ.ಐ ಕಾರ್ಯದರ್ಶಿ ಮುಖ್ತಾರ್ ಅಹ್ಮದ್, ವಕೀಲ ನದೀಂ ಅಹ್ಮದ್‌, ಮಹಮ್ಮದ್ ತಾಹೀರ್ ಸೇರಿದಂತೆ ನೂರಾರು ಕಾರ್ಯಕರ್ತರಿದ್ದರು.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!