Friday, November 20, 2026

ಪ್ರಾಯೋಗಿಕ ಆವೃತ್ತಿ

ಮಂಡ್ಯ | ‘ನನ್ನ ಮತ – ನನ್ನ ಹಕ್ಕು’ ಎಂಬ ಧ್ಯೇಯ ವಾಕ್ಯದಡಿ ಪ್ರಜಾಪ್ರಭುತ್ವ ದಿನಾಚರಣೆ

ಈ ಬಾರಿ ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆಯನ್ನು ‘ನನ್ನ ಮತ ನನ್ನ ಹಕ್ಕು’ ಎಂಬ ಧ್ಯೇಯ ವಾಕ್ಯದಡಿ ಸೆಪ್ಟೆಂಬರ್ 15 ರಂದು ಬೆಳಿಗ್ಗೆ 11 ಗಂಟೆಗೆ ಮಂಡ್ಯ ಜಿಲ್ಲಾ ಪಂಚಾಯತ್ ಕಾವೇರಿ ಸಭಾಂಗಣದಲ್ಲಿ ಆಚರಿಸಲಾಗುವುದು ಎಂದು ಜಿಲ್ಲಾಧಿಕಾರಿ ಡಾ.ಕುಮಾರ ತಿಳಿಸಿದರು.

ಮಂಡ್ಯ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಗುರುವಾರ ನಡೆದ ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆಯ ಪೂರ್ವ ಸಿದ್ದತಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆಯ ಅಂಗವಾಗಿ ಜಿಲ್ಲೆಯಲ್ಲಿ 4 ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. ಎಲ್ಲಾ ಕಾರ್ಯಕ್ರಮಗಳು ಅಚ್ಚುಕಟ್ಟಾಗಿ ಜರುಗಬೇಕು ಎಂದರು.

ಬೈಕ್ ರ‍್ಯಾಲಿ ಸೆಪ್ಟೆಂಬರ್ 15 ರಂದು‌ ಬೆಳಿಗ್ಗೆ 6 ಗಂಟೆಗೆ ಜಿಲ್ಲಾ ಕೇಂದ್ರದಿಂದ ಬೆಂಗಳೂರಿಗೆ 12 ಜನ ನುರಿತ ಬೈಕ್ ಸವಾರರು ಬೈಕ್ ಜಾಥಾ ನಡೆಸಬೇಕು. ಅವರಿಗೆ ಉತ್ತಮ ಟೀಶಾಟ್೯ ನ ವ್ಯವಸ್ಥೆ ಮಾಡಿ ಎಂದರು.

ಸೈಕಲ್ ಜಾಥಾ ಜಿಲ್ಲಾ ಕೇಂದ್ರದಲ್ಲಿ 5 ಕಿ.ಮೀಟರ್ ಸೈಕಲ್ ಜಾಥಾವನ್ನು ಆಯೋಜಿಸಿ, ಜಾಥಾದಲ್ಲಿ ಕನಿಷ್ಠ 100 ಜನರು‌ ಭಾಗವಹಿಸುವ ವ್ಯವಸ್ಥೆ ಮಾಡಿ. ಸೈಕಲ್ ಜಾಥಾ ಸಾಗಲು ರೂಟ್ ಮ್ಯಾಪ್ ಸಿದ್ಧಪಡಿಸಿ ಪೊಲೀಸ್ ಬಂದೋಬಸ್ತ್ ವ್ಯವಸ್ಥೆ ಮಾಡಿಕೊಳ್ಳಿ ಎಂದರು.

ವೇದಿಕೆ ಕಾರ್ಯಕ್ರಮ ಸೆಪ್ಟೆಂಬರ್ 15 ರಂದು ಬೆಳಿಗ್ಗೆ 11 ಗಂಟೆಗೆ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ವೇದಿಕೆ ಕಾರ್ಯಕ್ರಮ ಆಯೋಜಿಸಿ, ಪದವಿ ಹಾಗೂ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕು. ಮತದನದ ಮಹತ್ವದ ಬಗ್ಗೆ ಹೆಚ್ಚಿನ ಮಾಹಿತಿ ಕಾಲೇಜು‌ ವಿದ್ಯಾರ್ಥಿಗಳಿಗೆ ಬೇಕಿರುತ್ತದೆ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.

ವಿವಿಧ ಸ್ಪರ್ಧೆಗಳು
ಪ್ರಜಾಪ್ರಭುತ್ವದ ಬಗ್ಗೆ ಅರಿವು ಮೂಡಿಸಲು ಶಾಲಾ ವಿದ್ಯಾರ್ಥಿಗಳಿಗೆ ಚಿತ್ರಕಲಾ ಸ್ಪರ್ಧೆ, ಕಾಲೇಜು ವಿದ್ಯಾರ್ಥಿಗಳಿಗೆ ಛಾಯಚಿತ್ರ ಸ್ಪರ್ಧೆ ಹಾಗೂ ವಸತಿ ಶಾಲಾ ವಿದ್ಯಾರ್ಥಿಗಳಿಗೆ ಚರ್ಚಾ ಸ್ಪರ್ಧೆ ಆಯೋಜಿಸಲಾಗುವುದು. ಜಿಲ್ಲಾ ಮಟ್ಟದಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಪ್ರಥಮ-ರೂ 25,000, ದ್ವಿತೀಯ- ರೂ 15,000 ಹಾಗೂ ತೃತೀಯ- ರೂ 10,000 ನಗದು ಬಹುಮಾನ ನೀಡಿ ಗೌರವಿಸಲಾಗುವುದು ಎಂದರು.

ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಕೆ. ಆರ್ ನಂದಿನಿ ಅವರು ಮಾತನಾಡಿ ಇಂದಿನ ಯುವ ಪೀಳಿಗೆ ಪ್ರಜಾಪ್ರಭುತ್ವದ ಹಿನ್ನಲೆ, ಮಹತ್ವಗಳನ್ನು ಅರಿತುಕೊಳ್ಳುವುದು ಬಹಳ ಮುಖ್ಯವಾಗಿದೆ. ಸ್ಪರ್ಧೆಗಳನ್ನು ತಾಲ್ಲೂಕು‌ ಮಟ್ಟದಲ್ಲಿ ಆಯೋಜಿಸಿ ಆಯ್ಕೆಯಾದವರಿಗೆ ಕಾಲಾವಕಾಶವಿದ್ದು, ಹೆಚ್ಚಿನ ಅಭ್ಯಾಸ ಮಾಡಿಕೊಳ್ಳುವಂತೆ ತಿಳಿಸಿ. ಅವರಿಗೆ ಅಕ್ಟೋಬರ್ ಮಾಹೆಯಲ್ಲಿ ಜಿಲ್ಲಾ ಮಟ್ಟದ ಸ್ಪರ್ಧೆಗಳನ್ನು ಸಂಘಟಿಸಿ ಎಂದರು.

ಸೆ.15 ರಂದು ನಡೆಯುವ ವೇದಿಕೆ ಕಾರ್ಯಕ್ರಮದಲ್ಲಿ ಉಪನ್ಯಾಸಕರ ಮೂಲಕ‌ ಉಪನ್ಯಾಸ ಆಯೋಜಿಸುವ ಬದಲು 3 ವಿದ್ಯಾರ್ಥಿಗಳಿಗೆ ಮತದಾನದ ಮಹತ್ವ, ಪ್ರಜಾಪ್ರಭುತ್ವದಲ್ಲಿ ನನ್ನ ಹಕ್ಕು ಹಾಗೂ ಕರ್ತವ್ಯ ಗಳ ಬಗ್ಗೆ ಮಾತನಾಡಲು ಅವಕಾಶ ನೀಡಿ, ಇದರಿಂದ ವಿದ್ಯಾರ್ಥಿಗಳಲ್ಲಿ ವೇದಿಕೆ ಭಯ ಕಡಿಮೆಯಾಗುತ್ತದೆ ನಾಯಕತ್ವ ಗುಣ ಬೆಳೆಯುತ್ತದೆ ಎಂದರು.

ಸಭೆಯಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಕೆ.ಮೋಹನ್
ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪ ನಿರ್ದೇಶಕ ಸಿ. ಚಲುವಯ್ಯ, ಶಾಲಾ ಶಿಕ್ಷಣ ಇಲಾಖೆ ಉಪ ನಿರ್ದೇಶಕ ಲೋಕೇಶ್, ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕ ಶ್ರೀನಿವಾಸ್ ಸೇರಿದಂತೆ ಇನ್ನಿತರೆ ಅಧಿಕಾರಿಗಳು ಹಾಜರಿದ್ದರು.

ನಮ್ಮ ಸುದ್ದಿಗಳು ಇಷ್ಟವಾದರೆ ನುಡಿ ಕರ್ನಾಟಕ.ಕಾಂ (ಮಂಡ್ಯ ಡಿಜಿಟಲ್ ಮೀಡಿಯಾ) ಗೆ ದೇಣಿಗೆ ನೀಡಿ ಪ್ರೋತ್ಸಾಹಿಸಿ

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ