ನಾಗಮಂಗಲ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಟಿಕೆಟ್ ಬಯಸಿ ಮಾಜಿ ಸಚಿವ ಎನ್.ಚಲುವರಾಯಸ್ವಾಮಿ ಹೊರತುಪಡಿಸಿ ಬೇರೆ ಯಾರು ಕೂಡ ಅರ್ಜಿ ಸಲ್ಲಿಸಿಲ್ಲ.ಹಾಗಾಗಿ ಅವರೇ ನಾಗಮಂಗಲ ಕ್ಷೇತ್ರದಿಂದ 2023ರ ವಿಧಾನಸಭಾ ಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ.
ರಾಜ್ಯ ರಾಜಕೀಯದಲ್ಲಿ ಪ್ರಭಾವಿ ರಾಜಕಾರಣಿ ಎಂದೇ ಗುರುತಿಸಿಕೊಂಡಿರುವ ಚಲುವರಾಯಸ್ವಾಮಿ ಜಿಲ್ಲೆಯಲ್ಲಿ ಎಲ್ಲಾ ಕಾಂಗ್ರೆಸ್ಸಿಗರನ್ನು ಒಟ್ಟಾಗಿ ಕರೆದುಕೊಂಡು ಹೋಗುವ ನಾಯಕರಾಗಿದ್ದಾರೆ. ಜೆಡಿಎಸ್ ಪಕ್ಷದಿಂದ ಹೊರಬಂದ ನಂತರ ಜಿಲ್ಲೆಯಲ್ಲಿ ಕಾಂಗ್ರೆಸ್ ಪಕ್ಷವನ್ನು ಸಂಘಟಿಸುವ ಹೊಣೆ ಹೊತ್ತುಕೊಂಡು ಕಾರ್ಯನಿರ್ವಹಿಸುತ್ತಿರುವ ಚಲುವರಾಯಸ್ವಾಮಿ ನಾಗಮಂಗಲ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಪಕ್ಷದ ಅಧಿಕೃತ ಅಭ್ಯರ್ಥಿಯಾಗಿ ಹೊರಹೊಮ್ಮಿದ್ದಾರೆ.
ಜಿಲ್ಲೆಯಲ್ಲಿ ಚಲುವರಾಯಸ್ವಾಮಿ ನಾಯಕತ್ವದ ವಿರುದ್ಧ ಯಾರೂ ಕೂಡ ಪ್ರಶ್ನೆ ಮಾಡುವುದಿಲ್ಲ. ಇಡೀ ಜಿಲ್ಲೆಯಲ್ಲಿ ನಾಗಮಂಗಲ ಕ್ಷೇತ್ರದ ಕಾಂಗ್ರೆಸ್ ಟಿಕೆಟ್ ಗಾಗಿ ಬೇರೆ ಯಾರೂ ಕೂಡ ಅರ್ಜಿ ಸಲ್ಲಿಸಿಲ್ಲ ಎಂದರೆ ಕಾಂಗ್ರೆಸ್ ನಲ್ಲಿ ಅವರೆಷ್ಟು ಪ್ರಬಲ ಎಂಬುದು ಸಾಬೀತಾಗುತ್ತದೆ. ಕೈ ಟಿಕೆಟ್ ಸುಲಭವಾಗಿ ದಕ್ಕಿದೆ. ನಾಗಮಂಗಲದ ಮತದಾರರು ಏನು ಮಾಡುವರೋ ಎಂಬುದು ಯಕ್ಷ ಪ್ರಶ್ನೆಯಾಗಿದೆ.




