ವರದಿ : ಪ್ರಭು ವಿ ಎಸ್
ಪೋಷಕರು ಮಕ್ಕಳನ್ನು ಕೇವಲ ಅಂಕಗಳಿಕೆಗಷ್ಟೇ ಸೀಮಿತಗೊಳಿಸದೆ ಕ್ರೀಡಾ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳಲು ಪ್ರೇರೇಪಿಸುವ ಮೂಲಕ ಉನ್ನತ ಸಾಧನೆ ಮಾಡಲು ಪ್ರೋತ್ಸಾಹಿಸಬೇಕೆಂದು ಬಿಇಓ ಸಿ.ಎಚ್. ಕಾಳೀರಯ್ಯ ತಿಳಿಸಿದರು.
ಮದ್ದೂರು ಪಟ್ಟಣದ ಶಿವಪುರದ ವೆಂಟಕೇಶ್ವರ ಕಲ್ಯಾಣ ಮಂಟಪದಲ್ಲಿ ನಳಂದ ವಿದ್ಯಾಪೀಠ ಆಯೋಜಿಸಿದ್ದ ನಳಂದೋತ್ಸವ-2023 ಸಾಂಸ್ಕೃತಿಕ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.
ಮಕ್ಕಳ ಇಚ್ಚಾಶಕ್ತಿಗನುಗುಣವಾಗಿ ಕಲಿಕೆಗೆ ಅವಕಾಶ ಕಲ್ಪಿಸಿದ್ದು, ಪೋಷಕರು ಮುಂದಾಗಬೇಕಿದ್ದು ಯಾವುದೇ ಒತ್ತಡವೇರದೆ ವಿದ್ಯಾರ್ಥಿಗಳು ಕಲಿಕೆಯಲ್ಲಿ ನಿರತರಾಗಿರುವುದಕ್ಕೆ ಪ್ರೇರೇಪಿಸಿ ಅತ್ಯುನ್ನತ ಸಾಧನೆ ಮಾಡಲು ಅವಕಾಶ ಕಲ್ಪಿಸಬೇಕೆಂದರು.
ಕಳೆದ ಎರಡು ವರ್ಷಗಳ ಹಿಂದೆ ಎದುರಾದ ಕೋವಿಡ್ ಸಮಯದಲ್ಲಿ ಖಾಸಗಿ ಶಿಕ್ಷಣ ಸಂಸ್ಥೆಗಳು ಹಲವಾರು ಸಮಸ್ಯೆಗಳನ್ನು ಎದುರಿಸುವ ಜತೆಗೆ ಶಿಕ್ಷಕರಿಗೆ ಮತ್ತು ಇನ್ನಿತರೆ ನೌಕರರಿಗೆ ಕಠಿಣ ಪರಿಸ್ಥಿತಿಯಲ್ಲೂ ವೇತನ ವಿತರಿಸುವ ಮೂಲಕ ಜೀವನ ನಿರ್ವಹಣೆಗೆ ಅವಕಾಶ ಕಲ್ಪಿಸಿರುವುದು ಶ್ಲಾಘನೀಯವೆಂದರು.
ನಳಂದ ವಿದ್ಯಾಸಂಸ್ಥೆಯು ಕಳೆದ ಹಲವಾರು ವರ್ಷಗಳಿಂದ ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣ ನೀಡುವ ಮೂಲಕ ಶಿಕ್ಷಣ ಕ್ಷೇತ್ರಕ್ಕೆ ಹೆಚ್ಚಿನ ಒತ್ತು ನೀಡಿದ್ದು ಸಂಸ್ಥೆಯಲ್ಲಿ ಕಲಿತ ಮಕ್ಕಳು ರಾಜ್ಯ ಮತ್ತು ರಾಷ್ಟ್ರಮಟ್ಟದಲ್ಲಿ ಅತ್ಯುನ್ನತ ಹುದ್ದೆಗಳನ್ನು ಅಲಂಕರಿಸಿದ್ದಾರೆಂದರು.
ಮೈಸೂರು ಮಾನಸಗಂಗೋತ್ರಿಯ ಸಹ ಪ್ರಾಧ್ಯಾಪಕಿ ಎಚ್.ಪಿ.ಜ್ಯೋತಿ ರಾಘವೇಂದ್ರ ಮಾತನಾಡಿ ಕಲಿಕೆಗೆ ಅನುಗುಣವಾಗಿ ವಿದ್ಯಾರ್ಥಿಗಳನ್ನು ಅಣಿವುಗೊಳಿಸುವ ಜತೆಗೆ ಮಾನವೀಯ ಮೌಲ್ಯಗಳನ್ನು ಮೈಗೂಡಿಸಿಕೊಂಡು ದೇಶದ ಸತ್ಪಪ್ರಜೆಗಳಾಗಿ ರೂಪಿಸುವ ಜವಾಬ್ದಾರಿ ಶಿಕ್ಷಕರದ್ದಾಗಿದೆ ಎಂದರು.
ಬಹುಮಾನ ವಿತರಣೆ
ಸಾಂಸ್ಕೃತಿಕ ಕಾರ್ಯಕ್ರಮ ಅಂಗವಾಗಿ ಆಯೋಜಿಸಿದ್ದ ವಿವಿಧ ಕ್ರೀಡೆಗಳು ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಪಾಲ್ಗೊಂಡು ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಲಾಯಿತಲ್ಲದೇ ಕಳೆದ ಸಾಲಿನಲ್ಲಿ ಎಸ್‌ಎಸ್‌ಎಲ್‌ಸಿಯಲ್ಲಿ ಅತಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಿ ಗೌರವಿಸಿದರು.
ಈ ವೇಳೆ ನಳಂದ ವಿದ್ಯಾಸಂಸ್ಥೆಯ ಸಂಸ್ಥಾಪಕ ಅಧ್ಯಕ್ಷ ಎಂ. ರಾಮಣ್ಣ, ಸಿಡಿಪಿಓ ಜಿ. ಪ್ರದೀಪ್, ತಾ.ಪಂ. ಮಾಜಿ ಸದಸ್ಯ ಕೆ.ಆರ್. ಮಹೇಶ್, ಸಂಸ್ಥೆ ಧರ್ಮದರ್ಶಿಗಳಾದ ಡಾ. ಆರ್. ರಾಮಕೃಷ್ಣ, ಎ.ಸಿ. ಸವಿತ, ಶಿಕ್ಷಕರು ವಿದ್ಯಾರ್ಥಿಗಳು ಹಾಜರಿದ್ದರು.




