ಸಜ್ಜನ ಹಾಗೂ ಸುಶಿಕ್ಷಿತ ರಾಜಕಾರಣಿಯಾಗಿದ್ದ ಮಾಜಿ ಮುಖ್ಯಮಂತ್ರಿ ಎಸ್.ಎಂ ಕೃಷ್ಣ ಅವರ ಅಗಲಿಕೆಯಿಂದ ಮಂಡ್ಯ ಜಿಲ್ಲೆಗೆ ತುಂಬಲಾರದ ನಷ್ಟ ಉಂಟಾಗಿದೆ ಎಂದು ಶಾಸಕ ಪಿ.ಎಂ ನರೇಂದ್ರಸ್ವಾಮಿ ಕಂಬನಿ ಮಿಡಿದಿದ್ದಾರೆ.
ಕೃಷ್ಣ ಅವರದ್ದು ಮಾದರಿ ರಾಜಕಾರಣ.ಮುಖ್ಯಮಂತ್ರಿ ಆಗಿ ಜನಪರ ಆಡಳಿತ ನೀಡಿದರು. ಮಹಿಳೆಯರ ಸಬಲೀಕರಣ ಹಾಗೂ ಆರ್ಥಿಕ ಸ್ವಾವಲಂಬನೆಗಾಗಿ ಸ್ತ್ರೀ ಶಕ್ತಿ ಸ್ವಸಹಾಯ ಸಂಘ ಆರಂಭಿಸಿದರು.ಸರ್ಕಾರಿ ಶಾಲೆಯಲ್ಲಿ ಓದುತ್ತಿರುವ ಎಲ್ಲಾ ವಿದ್ಯಾರ್ಥಿಗಳಿಗೆ ಬಿಸಿಯೂಟ ಜಾರಿಗೆ ತಂದರು, ಯಶಸ್ವಿನಿ ಯೋಜನೆ ಜಾರಿ, ಬೆಂಗಳೂರನ್ನು ಸಿಂಗಪುರ ಮಾಡಬೇಕೆಂದು ಶ್ರಮಿಸಿದ ಫಲದಿಂದಾಗಿ ರಾಜಧಾನಿ ಬೆಂಗಳೂರು ಸಿಲಿಕಾನ್ ವ್ಯಾಲಿ ಆಫ್ ಇಂಡಿಯಾ ಎಂಬ ಹೆಸರು ಬರಲು ಕಾರಣರಾಗುವುದರ ಜೊತೆಗೆ ರಾಜ್ಯ ಹಾಗೂ ರಾಷ್ಟ್ರಕ್ಕೆ ಹಲವಾರು ಕೊಡುಗೆಗಳನ್ನು ನೀಡಿದ್ದಾರೆ ಎಂದು ಸ್ಮರಿಸಿದ್ದಾರೆ.
1972ರಲ್ಲಿ ವಾಣಿಜ್ಯ ಮತ್ತು ಕೈಗಾರಿಕಾ ಸಚಿವರಾಗಿ ಮಂಡ್ಯ ಜಿಲ್ಲೆಯ ಸೋಮನಹಳ್ಳಿ ಸೇರಿದಂತೆ ಹಲವು ಕಡೆಗಳಲ್ಲಿ ಕೈಗಾರಿಕೆಗಳನ್ನು ಸ್ಥಾಪಿಸಿ ಸಾವಿರಾರು ನಿರುದ್ಯೋಗಿಗಳಿಗೆ ಉದ್ಯೋಗ ಕಲ್ಪಿಸಿದರು. ಸಾವಿರಾರು ರಾಜಕಾರಣಿಗಳಿಗೆ ಮಾರ್ಗದರ್ಶಕರಾಗಿದ್ದ ಜನಮೆಚ್ಚಿದ ನಾಯಕ ಎಸ್.ಎಂ ಕೃಷ್ಣ ಅವರ ಅಗಲಿಕೆಯಿಂದ ಮಂಡ್ಯ ಜಿಲ್ಲೆ ಸೇರಿದಂತೆ ರಾಜ್ಯಕ್ಕೆ ತುಂಬಲಾಗದ ನಷ್ಟ ಉಂಟಾಗಿದ್ದು, ಅವರ ಕುಟುಂಬಕ್ಕೆ ದುಃಖ ಭರಿಸುವ ಶಕ್ತಿ ಭಗವಂತ ನೀಡಲಿ ಎಂದು ಸಂತಾಪ ಸಲ್ಲಿಸಿದ್ದಾರೆ.




