ಮುಂಬರುವ ತಾಲ್ಲೂಕು ಮತ್ತು ಜಿಲ್ಲಾ ಪಂಚಾಯಿತಿ ಸ್ಥಳೀಯ ಸಂಸ್ಥೆಗಳ ಚುನಾವಣೆಗಳು ಪಕ್ಷದ ಕಾರ್ಯಕರ್ತರು ಹಾಗೂ ಮುಖಂಡರುಗಳ ಅಸ್ತಿತ್ವದ ಪ್ರಶ್ನೆಯಾಗಿದ್ದು, ಕಾಂಗ್ರೆಸ್ ಕಾರ್ಯಕರ್ತರು ಪಕ್ಷದ ಗೆಲುವಿಗೆ ಒಗ್ಗಟ್ಟಿನಿಂದ ಶ್ರಮಿಸಬೇಕೆಂದು ರಾಜ್ಯ ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿ ಅಧ್ಯಕ್ಷ ಹಾಗೂ ಶಾಸಕ ಪಿ.ಎಂ.ನರೇಂದ್ರಸ್ವಾಮಿ ಕರೆ ನೀಡಿದರು.
ಮಂಡ್ಯ ನಗರದ ಎ & ಎ ಸಮುದಾಯ ಭವನದಲ್ಲಿ ನಡೆದ ಮಂಡ್ಯ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಕಾರ್ಯಕರ್ತರ ‘ಸರ್ಕಾರದ ನಡಿಗೆ ಕಾರ್ಯಕರ್ತರ ಕಡೆಗೆ’ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.
ಮಂಡ್ಯ ಜಿಲ್ಲೆಯ ಕಾಂಗ್ರೆಸ್ ಬಂಧುಗಳು ಒಗ್ಗಟ್ಟಿನಿಂದ ಶ್ರಮಿಸಿದ ಫಲವಾಗಿ ಜಿಲ್ಲೆಯಲ್ಲಿ ನಾವು 6 ಮಂದಿ ಶಾಸಕರು ಆಯ್ಕೆಯಾಗಿ ಸರ್ಕಾರದ ಭಾಗವಾಗಿದ್ದೇವೆ. ಇದು ಜಿಲ್ಲೆಯ ಜನರ ಔದಾರ್ಯ ಎಂದು ಬಣ್ಣಿಸಿದರು.
ಮಂಡ್ಯ ಜಿಲ್ಲೆಯ ಮತದಾರರು, ಪಕ್ಷದ ಮುಖಂಡರು ಮತ್ತು ಕಾರ್ಯಕರ್ತರ ಶ್ರಮದಿಂದ ರಾಜ್ಯದಲ್ಲಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಅಸ್ತಿತ್ವದಲ್ಲಿದೆ, ಅಧಿಕಾರದ ಗದ್ದುಗೆಗೆ ನಮ್ಮನ್ನು ಆಯ್ಕೆಗೊಳಿಸಿದ ಜನ ಸಾಮಾನ್ಯರ ದುಃಖ ದುಮ್ಮಾನಗಳಿಗೆ ಸ್ಪಂದಿಸಲು ಪಂಚ ಗ್ಯಾರಂಟಿ ಯೋಜನೆಗಳ ಅನುಷ್ಠಾನದ ಜತೆ ಅಭಿವೃದ್ದಿಗೂ ಆದ್ಯತೆ ನೀಡಲಾಗುತ್ತಿದೆ ಎಂದರು.

ಸಿದ್ದರಾಮಯ್ಯ ಹಾಗೂ ಡಿ.ಕೆ.ಶಿವಕುಮಾರ್ ನೇತೃತ್ವದ ಸರ್ಕಾರ ರಾಜ್ಯದಲ್ಲಿದ್ದು ಚುನಾವಣಾ ಪ್ರಣಾಳಿಕೆಯ ಭರವಸೆಯಂತೆ ಪಂಚ ಗ್ಯಾರಂಟಿಗಳನ್ನು ಅನುಷ್ಟಾನಗೊಳಿಸಿ ಈ ವರ್ಷದಿಂದ ಅಭಿವೃದ್ದಿ ಕಾರ್ಯಗಳ ವೇಗವನ್ನು ಹೆಚ್ಚಿಸಲಾಗಿದೆ ಎಂದರು.
ಪಕ್ಷ ನಿಷ್ಟ ಕಾರ್ಯಕರ್ತರ ಸ್ಪಂದನೆಗೆ ಸೂಕ್ತವಾಗಿ ಸ್ಪಂದಿಸಲಾಗದಿರುವುದು ನಮಗೂ ಬೇಸರ ತಂದಿದೆ. ಮುಂದಿನ ದಿನಗಳಲ್ಲಿ ನಡೆಯುವ ಸ್ಥಳೀಯ ಸಂಸ್ಥೆ ಚುನಾವಣೆಗಳಲ್ಲಿ ಕಾರ್ಯಕರ್ತರ ಹಿತ ಕಾಪಾಡಲು ಬದ್ದರಾಗಿರುತ್ತೇವೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಮಂಡ್ಯ ವಿಧಾನಸಭಾ ಕ್ಷೇತ್ರದಲ್ಲಿ ಜಿ.ಪಂ., ತಾ.ಪಂ., ಚುನಾವಣೆ ಜತೆ ನಗರಸಭೆ ಚುನಾವಣೆಯೂ ಪಕ್ಷದ ಅಸ್ತಿತ್ವಕ್ಕೆ ಮುಖ್ಯವಾಗುತ್ತದೆ. ನಗರಸಭೆ ವರಿಷ್ಟ ಚುನಾವಣೆಯಲ್ಲಿ ಸ್ಥಳೀಯ ಸಂಸದರಾದ ಕೇಂದ್ರ ಸಚಿವರು ತಮ್ಮ ಮತ ಚಲಾಯಿಸಲು ಆಗಮಿಸಿದ್ದರು. ಇಂತಹ ಒಂದು ಮತದ ಅಗತ್ಯತೆಯನ್ನು ಮನಗಂಡು ಕಾರ್ಯಕರ್ತರು ಬೂತ್ ಮಟ್ಟದಲ್ಲಿ ಪಕ್ಷ ಸಂಘಟಿಸಲು ಮುಂದಾಗಬೇಕೆಂದು ಕಿವಿಮಾತು ಹೇಳಿದರು.
ಶಾಸಕ ದರ್ಶನ್ ಪುಟ್ಟಣ್ಣಯ್ಯ ಮಾತನಾಡಿ, ಬೂತ್ ಮಟ್ಟದಲ್ಲಿ ವ್ಯಾಪಕ ಪ್ರಚಾರ ನಡೆಸಿ, ನಮ್ಮ ಗೆಲುವಿಗೆ ಸಹಕಾರ ನೀಡಿದ ಕಾರ್ಯಕರ್ತರಿಗೆ ನಾವು ಋಣಿಯಾಗಿದ್ದೇವೆ. ಅದೇ ರೀತಿ ಜಿಲ್ಲೆಯ ಅಭಿವೃದ್ದಿಗೆ ಕಟಿಬದ್ದರಾಗಿದ್ದೇವೆ. ಮುಖ್ಯಮಂತ್ರಿಗಳು ಈ ಬಾರಿ ಆಯ-ವ್ಯಯದಲ್ಲಿ ಸಾವಯವ ಕೃಷಿ ಮತ್ತು ಕೃಷಿ ಖಾತೆಯ ಬಲವರ್ಧನೆಗೆ ಹೆಚ್ಚು ಅನುದಾನ ನೀಡಿರುವುದು ಶ್ಲಾಘನೀಯ ಕಾರ್ಯವೆಂದು ಪ್ರಶಂಸೆ ವ್ಯಕ್ತಪಡಿಸಿದರು.




