Tuesday, November 24, 2026

ಪ್ರಾಯೋಗಿಕ ಆವೃತ್ತಿ

ರಾಷ್ಟ್ರೀಯ ಶಿಕ್ಷಣ ನೀತಿ (NEP) ಅವ್ಯವಸ್ಥೆ ಖಂಡಿಸಿ ಡಿ.17ಕ್ಕೆ ಕಾಲೇಜು ಬಂದ್

ರಾಜ್ಯದಲ್ಲಿ ತರಾತುರಿಯಲ್ಲಿ ರಾಷ್ಟ್ರೀಯ ಶಿಕ್ಷಣ ನೀತಿಯನ್ನು ಜಾರಿ ಮಾಡುವ ಮೂಲಕ ಬಿಜೆಪಿ ಸರ್ಕಾರವು ಶಿಕ್ಷಣ ಕ್ಷೇತ್ರದ ಅವ್ಯವಸ್ಥೆಗೆ ಕಾರಣವಾಗಿದ್ದು, ಈ ಎಲ್ಲಾ ಅವ್ಯವಸ್ಥೆಗಳನ್ನು ಖಂಡಿಸಿ ಡಿ.17ರಂದು ಕರ್ನಾಟಕದ ರಾಜ್ಯಾದ್ಯಂತ ಎಲ್ಲಾ ವಿಶ್ವವಿದ್ಯಾಲಯಗಳು ಹಾಗೂ ಪದವಿ ಕಾಲೇಜುಗಳನ್ನು ಬಂದ್‌ ಮಾಡಿ ಪ್ರತಿಭಟನೆ ನಡೆಸಲಾಗುವುದು ಎಂದು ಭಾರತೀಯ ರಾಷ್ಟ್ರೀಯ ವಿದ್ಯಾರ್ಥಿ ಒಕ್ಕೂಟ (NSUI)ದ ಮಂಡ್ಯ ಜಿಲ್ಲಾಧ್ಯಕ್ಷ ಮನೋರಂಜನ್ ಡಿ.ಆರ್. ತಿಳಿಸಿದರು.

ಮಂಡ್ಯದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕೇಂದ್ರ ಸರ್ಕಾರವು ಅವೈಜ್ಞಾನಿಕವಾಗಿ ನ್ಯಾಷನಲ್ ಎಜುಕೇಷನ್ ಪಾಲಿಸಿ (ಎನ್.ಇ.ಪಿ)ಯನ್ನು ಪದವಿ ಕಾಲೇಜುಗಳಿಗೆ ಅಳವಡಿಸಿದ್ದು, ಇದರಿಂದ ಸೆಮಿಸ್ಟ‌ರ್ ವಿದ್ಯಾರ್ಥಿಗಳಿಗೆ ತೊಂದರೆಯಾಗುತ್ತಿದೆ ಹಾಗೂ ಎನ್.ಇ.ಪಿ ಅಡಿಯಲ್ಲಿ ಪ್ರವೇಶ ಪಡೆದ ವಿದ್ಯಾರ್ಥಿಗಳಿಗೆ ಕಾಲೇಜಿನಲ್ಲಿ ಕೊಠಡಿ ಇಲ್ಲದೆ, ತರಗತಿಗಳು ಪ್ರಾರಂಭವಾಗಿಲ್ಲ, ಆದ್ದರಿಂದ ವಿದ್ಯಾರ್ಥಿಗಳ ಸಮಸ್ಯೆ ಬಗೆಹರಿಸಲು ಸರ್ಕಾರ ಮುಂದಾಗಬೇಕೆಂದು ಆಗ್ರಹಿಸಿದರು.

ಮಂಡ್ಯ ಜಿಲ್ಲೆಯ ವ್ಯಾಪ್ತಿಯಲ್ಲಿ ಬರುವ ಮಂಡ್ಯ ವಿಶ್ವವಿದ್ಯಾಲಯ ಹಾಗೂ ಸಂಯೋಜಿತ ಕಾಲೇಜುಗಳನ್ನು ಡಿ.17 ರಂದು ಸಂಪೂರ್ಣವಾಗಿ ಬಂದ್‌ ಮಾಡಿ, ಪ್ರತಿಭಟನೆಯ ಮೂಲಕ ಸರ್ಕಾರಕ್ಕೆ ಒತ್ತಾಯ ಮಾಡಲಾಗುವುದು ಎಂದರು.

8 ತಿಂಗಳಾದರೂ ಬಾರದ ಫಲಿತಾಂಶ 

ಈಗಾಗಲೇ ಪದವಿ ಪರೀಕ್ಷೆಗಳು ಮುಗಿದು 6 ರಿಂದ 8 ತಿಂಗಳು ಕಳೆದರೂ ಫಲಿತಾಂಶ ಪ್ರಕಟಿಸಿಲ್ಲ, ಇದರಿಂದ ಮುಂದಿನ ಸೆಮಿಸ್ಟರ್ ಓದಲು ವಿದ್ಯಾರ್ಥಿಗಳಿಗೆ ತೊಂದರೆಯಾಗುತ್ತಿದ್ದು,, ರಾಜ್ಯ ಸರ್ಕಾರ ವಿದ್ಯಾರ್ಥಿಗಳ ಭವಿಷ್ಯ ಹಾಳು ಮಾಡಲು ಹೊರಡಿದೆ ಎಂದು ದೂರಿದರು.

ವಿದ್ಯಾರ್ಥಿ ವೇತನ ನೀಡದ ಸರ್ಕಾರ 

2022-23ರ ಸಾಲಿನಲ್ಲಿ ಪ್ರಿ ಮೆಟ್ರಿಕ್‌ ಹಾಗೂ ಪೋಸ್ಟ್ ಮೆಟ್ರಿಕ್ ವಿದ್ಯಾರ್ಥಿ ವೇತನವನ್ನು ಎಸ್.ಎಸ್‌.ಪಿ ವಿದ್ಯಾರ್ಥಿ ವೇತನ ಪೋರ್ಟಲ್ ಹಾಗೂ ರಾಜ್ಯ ವಿದ್ಯಾರ್ಥಿ ವೇತನ ಪೋರ್ಟಲ್ ನಲ್ಲಿ ಆರ್ಜಿ ಸಲ್ಲಿಸಿದ್ದರೂ ಇದುವರೆಗೆ ವಿದ್ಯಾರ್ಥಿ ವೇತನ ಮಂಜೂರಾಗಿಲ್ಲ ಎಂದು ದೂರಿದರು.

ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳಿಗೆ ನೀಡುತ್ತಿದ್ದ ವಿದ್ಯಾರ್ಥಿ ವೇತನವನ್ನು ಏಕಾಏಕಿ ತಡೆ ಹಿಡಿದು ಕಾಲೇಜಿನ ಪ್ರವೇಶ ಶುಲ್ಕವನ್ನು ಹೆಚ್ಚಳ ಮಾಡಲಾಗಿದೆ. ಕಾಲೇಜಿನಲ್ಲಿ ಮೂಲಭೂತ ಸೌಕರ್ಯಗಳ ಕೊರತೆಯಿಂದ ವಿದ್ಯಾರ್ಥಿಗಳಿಗೆ ತೊಂದರೆಯಾಗುತ್ತಿದೆ. ಸರ್ಕಾರವು ವಿದ್ಯಾರ್ಥಿಗಳಿಗೆ ಉಚಿತ ಬಸ್‌ ಪಾಸ್ ನೀಡುವುದಾಗಿ ಘೋಷಿಸಿ, ಬಸ್ ಪಾಸ್ ದರವನ್ನು ಏರಿಕೆ ಮಾಡಿದೆ, ಇದರಿಂದ ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳಿಗೆ ತೊಂದರೆಯಾಗುತ್ತಿದೆ ಎಂದು ಆರೋಪಿಸಿದರು.

ಗೋಷ್ಠಿಯಲ್ಲಿ ವಿದ್ಯಾರ್ಥಿ ಮುಖಂಡರಾದ ಗಗನ್, ಧನರಾಜ್, ದರ್ಶನ್, ಹರ್ಷಿತ್ ಹಾಗೂ ಇಂದ್ರಜಿತ್ ಉಪಸ್ಥಿತರಿದ್ದರು.

ನಮ್ಮ ಸುದ್ದಿಗಳು ಇಷ್ಟವಾದರೆ ನುಡಿ ಕರ್ನಾಟಕ.ಕಾಂ (ಮಂಡ್ಯ ಡಿಜಿಟಲ್ ಮೀಡಿಯಾ) ಗೆ ದೇಣಿಗೆ ನೀಡಿ ಪ್ರೋತ್ಸಾಹಿಸಿ

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ