ಎಲ್ಲರ ಸಹಕಾರದೊಂದಿಗೆ ಮಂಡ್ಯದಲ್ಲಿ ರಾಷ್ಟ್ರಮಟ್ಟದ ಕಬಡ್ಡಿ ಪಂದ್ಯಾವಳಿಯನ್ನು ಆಯೋಜಿಸಲಾಗುವುದೆಂದು ಕೃಷಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿ ಹೇಳಿದರು.
ಮಂಡ್ಯ ನಗರದ ಸುಮರವಿ ಕಲ್ಯಾಣ ಮಂಟಪದಲ್ಲಿ ಶುಕ್ರವಾರ ಜಿಲ್ಲಾ ಅಮೆಚೂರ್ ಕಬಡ್ಡಿ ಅಸೋಸಿಯೇಷನ್ನಿಂದ ಆಯೋಜಿಸಿದ್ದ ಅಭಿನಂದನಾ ಸಮಾರಂಭ ಉದ್ಘಾಟಿಸಿ ಅವರು ಮಾತನಾಡಿದರು.

ದೊಡ್ಡಬಳ್ಳಾಪುರದಲ್ಲಿ ನಡೆದ ರಾಜ್ಯ ಮಟ್ಟದ ಕಬಡ್ಡಿ ಕ್ರೀಡಾಕೂಟದಲ್ಲಿ ಜಿಲ್ಲೆಯ ಪುರುಷರು ಮೊದಲ ಸ್ಥಾನವನ್ನು,ಮಹಿಳೆಯರು ಮೂರನೇ ಸ್ಥಾನ ಪಡೆದಿರುವುದು ಸಂತೋಷ ತಂದಿದ್ದು, ಎಲ್ಲಾ ಕ್ರೀಡಾಪಟುಗಳಿಗೆ ಅಭಿನಂದನೆ ಸಲ್ಲಿಸುತ್ತೇನೆ. ಕ್ರೀಡೆಯಲ್ಲಿ ಮಂಡ್ಯ ಯಾವಾಗಲೂ ಮುಂದಿದೆ. ಅದರಲ್ಲಿಯೂ ಕಬಡ್ಡಿ ಕ್ರೀಡೆಯಲ್ಲಿ ಪ್ರಖ್ಯಾತಿ ಪಡೆದಿದೆ. ಇದಕ್ಕೆ ಪ್ರೋತ್ಸಾಹ ನೀಡುವ ನಿಟ್ಟಿನಲ್ಲಿ ರಾಷ್ಟ್ರಮಟ್ಟದ ಟೂರ್ನಿ ಆಯೋಜಿಸೋಣ. ಇದಕ್ಕೆ ಸಂಬಂಧಿಸಿದಂತೆ ಅಂತರರಾಷ್ಟ್ರೀಯ ಕಬಡ್ಡಿ ಕೋಚ್ ಬಿ.ಸಿ.ರಮೇಶ್ ಅವರೊಂದಿಗೆ ಮಾತನಾಡಿದ್ದೇನೆ. ಎಲ್ಲರೂ ಸೇರಿ ಅದ್ದೂರಿಯಾಗಿ ರಾಷ್ಟ್ರಮಟ್ಟದ ಕಬಡ್ಡಿ ಪಂದ್ಯಾವಳಿ ಆಯೋಜಿಸೋಣ,ಅದಕ್ಕಾಗಿ ಸಿದ್ಧತೆ ಮಾಡಿಕೊಳ್ಳಿ ಎಂದರು.
87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದಂತೆಯೇ ಪಂದ್ಯಾವಳಿಯನ್ನು ಯಶಸ್ವಿಗೊಳಿಸಿದಂತೆ ,ಪಕ್ಷಾತೀತವಾಗಿ ಎಲ್ಲರ ಸಹಕಾರ ಪಡೆದುಕೊಳ್ಳೋಣ ಎಂದರು.
ಶಾಸಕ ರವಿಕುಮಾರ್ ಗಣಿಗ, ಮನ್ಮುಲ್ ನಿರ್ದೇಶಕ ಯು.ಸಿ.ಶಿವಕುಮಾರ್, ಮೈಷುಗರ್ ಅಧ್ಯಕ್ಷ ಸಿ.ಡಿ.ಗಂಗಾಧರ, ಮುಡಾ ಅಧ್ಯಕ್ಷ ನಯೀಂ,ಕಬಡ್ಡಿ ಅಸೋಸಿಯೇಷನ್ನ ಪ್ರಧಾನ ಪೋಷಕ ರವಿ ಭೋಜೇಗೌಡ, ಶಿವಲಿಂಗ ಪ್ರಸಾದ್, ಸಿ.ಪಿ.ನಾಗರಾಜು, ಶಿವಲಿಂಗಯ್ಯ, ವಿಜಯಕುಮಾರ್ ಇತರರಿದ್ದರು.




